ADVERTISEMENT

ಅವಧಿಗೆ ಮುನ್ನವೇ ತುಂಗಭದ್ರಾ ಕಾಲುವೆಗಳಿಗೆ ನೀರು ಬಿಡಲು ಕ್ರಮ

ಡಿಸೆಂಬರ್ ಅಂತ್ಯಕ್ಕೆ ತುಂಗಭದ್ರಾ ಹಿನ್ನೀರು ವಿತರಣೆ ಕ್ರಮ: ಶ್ರೀರಾಮುಲು

​ಪ್ರಜಾವಾಣಿ ವಾರ್ತೆ
Published 22 ಜೂನ್ 2022, 2:15 IST
Last Updated 22 ಜೂನ್ 2022, 2:15 IST
ಹೊಸಪೇಟೆ ಸಮೀಪದ ತುಂಗಭದ್ರಾ ಜಲಾಶಯ ಹಿನ್ನೀರು ಸ್ಥಳಕ್ಕೆ ಮಂಗಳವಾರ ಸಚಿವ ಬಿ. ಶ್ರೀರಾಮುಲು ನೇತೃತ್ವದಲ್ಲಿ ಮೊಳಕಾಲ್ಮುರು ವಿಧಾನಸಭಾ ಗ್ರಾಮಪಂಚಾಯಿತಿ ಸದಸ್ಯರ ತಂಡವು ಭೇಟಿ ನೀಡಿ ಕುಡಿಯುವ ನೀರು ಕಾಮಗಾರಿಯನ್ನು ವೀಕ್ಷಿಸಿದರು.
ಹೊಸಪೇಟೆ ಸಮೀಪದ ತುಂಗಭದ್ರಾ ಜಲಾಶಯ ಹಿನ್ನೀರು ಸ್ಥಳಕ್ಕೆ ಮಂಗಳವಾರ ಸಚಿವ ಬಿ. ಶ್ರೀರಾಮುಲು ನೇತೃತ್ವದಲ್ಲಿ ಮೊಳಕಾಲ್ಮುರು ವಿಧಾನಸಭಾ ಗ್ರಾಮಪಂಚಾಯಿತಿ ಸದಸ್ಯರ ತಂಡವು ಭೇಟಿ ನೀಡಿ ಕುಡಿಯುವ ನೀರು ಕಾಮಗಾರಿಯನ್ನು ವೀಕ್ಷಿಸಿದರು.   

ಮೊಳಕಾಲ್ಮುರು: ಬಹು ನಿರೀಕ್ಷಿತ ತುಂಗಭದ್ರಾ ಹಿನ್ನೀರು ಕುಡಿಯುವ ನೀರು ಯೋಜನೆ ಅಡಿ ತಾಲ್ಲೂಕಿನ ಎಲ್ಲಾ ಗ್ರಾಮಗಳಿಗೆ ಕುಡಿಯುವ ನೀರು ನೀಡಲು ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವ ಬಿ. ಶ್ರೀರಾಮುಲು ಹೇಳಿದರು.

ಮಂಗಳವಾರ ಹೊಸಪೇಟೆ ಸಮೀಪದ ತುಂಗಭದ್ರಾ ಹಿನ್ನೀರು ಸ್ಥಳದಲ್ಲಿ ನಡೆಯುತ್ತಿರುವ ಯೋಜನೆಯ ಕಾಮಗಾರಿ ಸ್ಥಳಕ್ಕೆ ವಿಧಾನಸಭಾ ಕ್ಷೇತ್ರದ ಗ್ರಾಮಪಂಚಾಯಿತಿ ಜನಪ್ರತಿನಿಧಿಗಳೊಂದಿಗೆ ವೀಕ್ಷಣೆ ಮಾಡಿ ಅವರು ಮಾತನಾಡಿದರು.

‘ಈ ಯೋಜನೆಯು ವಿಧಾನಸಭಾ ಕ್ಷೇತ್ರದ ಜನರ ಬಹು ಆಕಾಂಕ್ಷಿತ ಯೋಜನೆಯಾಗಿದೆ. ಚುನಾವಣಾ ಪೂರ್ವದಲ್ಲಿ ನಾನು ಜನರಿಗೆ ನೀಡಿದ್ದ ಆಶ್ವಾಸನೆಯಂತೆ ಅನುಷ್ಠಾನಕ್ಕೆ ಕ್ರಮ ಕೈಗೊಂಡಿದ್ದೇನೆ. ಸುಮಾರು ₹ 2,100 ಕೋಟಿ ವೆಚ್ಚದಲ್ಲಿ ಇದನ್ನು ಕೈಗೆತ್ತಿಕೊಳ್ಳಲಾಗಿದ್ದು ಬಿಜೆಪಿ ಸರ್ಕಾರದ ಅವಧಿಯಲ್ಲಿ ಪೂರ್ಣಗೊಳಿಸಿ ನೀಡಲು ಕ್ರಮ ಕೈಗೊಳ್ಳಲಾಗುವುದು’ ಎಂದು ಹೇಳಿದರು.

ADVERTISEMENT

‘ಈಗಾಗಲೇ ಯೋಜನೆಗೆ ಸಂಬಂಧಪಟ್ಟಂತೆ ಪೈಪ್‌ಲೈನ್‌ಗಳನ್ನು ಅಳವಡಿಸಲಾಗಿದ್ದು ಎಲ್ಲ ಗ್ರಾಮಗಳಲ್ಲಿ ಓವರ್ ಹೆಡ್ ಟ್ಯಾಂಕ್‌ಗಳನ್ನು ನಿರ್ಮಿಸಲಾಗಿದೆ. ಜಲಾಶಯದಲ್ಲಿ ಮುಂಗಾರು ಮಳೆ ನೀರಿನ ಒಳ ಹರಿವಿನ ಪ್ರಮಾಣ ಹೆಚ್ಚಳವಾಗಿದ್ದು ಜಾಕ್‌ವೆಲ್ ಬಳಿ ಕಾಮಗಾರಿ ಕೈಗೊಳ್ಳಲು ತೊಂದರೆಯಾಗಿದೆ. ಇದರಿಂದ ಕಾಮಗಾರಿ ನಡೆಸಲು ತೊಂದರೆಯಾಗುತ್ತಿದೆ. ಆದ್ದರಿಂದ ಬಳ್ಳಾರಿ ಜಿಲ್ಲೆಯ ತುಂಗಭದ್ರಾ ಕಾಲುವೆಗಳಿಗೆ ಅವಧಿಗೆ ಮುನ್ನವೇ ನೀರನ್ನು ಹರಿಸಿ ಜಾಕ್‌ವೆಲ್‌ ಬಳಿ ಕಾಮಗಾರಿಯನ್ನು ಕೈಗೊಳ್ಳಲು ಸೂಚಿಸಲಾಗಿದೆ’ ಎಂದು ಹೇಳಿದರು.

ಬಿಜೆಪಿ ಮಂಡಲಾಧ್ಯಕ್ಷರಾದ ಡಾ.ಪಿ. ಎಂ ಮಂಜುನಾಥ್. ಇ. ರಾಮರೆಡ್ಡಿ, ಪಟ್ಟಣ ಪಂಚಾಯಿತಿ ಅಧ್ಯಕ್ಷ ಪಿ. ಲಕ್ಷ್ಮಣ್ ಹಾಗೂ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ 36 ಗ್ರಾಮ ಪಂಚಾಯಿತಿ ಅಧ್ಯಕ್ಷರು, ಉಪಾಧ್ಯಕ್ಷರು, ಪಿಡಿಒಗಳು
ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.