ADVERTISEMENT

ಕೃಷಿ ಕಾಯ್ದೆ ವಿರೋಧಿಸಿ ರಾಜಭವನ ಚಲೋ

ರಾಜ್ಯ, ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್‌ ವಕ್ತಾರ ವಿ.ಎಸ್.ಉಗ್ರಪ್ಪ ಕಿಡಿ

​ಪ್ರಜಾವಾಣಿ ವಾರ್ತೆ
Published 17 ಜನವರಿ 2021, 14:09 IST
Last Updated 17 ಜನವರಿ 2021, 14:09 IST
ವಿ.ಎಸ್.ಉಗ್ರಪ್ಪ
ವಿ.ಎಸ್.ಉಗ್ರಪ್ಪ   

ಚಿತ್ರದುರ್ಗ: ಕೃಷಿಗೆ ಸಂಬಂಧಿಸಿದಂತೆ ಕೇಂದ್ರ ಹಾಗೂ ರಾಜ್ಯ ಸರ್ಕಾರ ಜಾರಿಗೊಳಿಸಿದ ಕಾಯ್ದೆಗಳನ್ನು ವಿರೋಧಿಸಿ ಜ.20ರಂದು ರಾಜಭವನ ಚಲೋ ಹಮ್ಮಿಕೊಳ್ಳಲಾಗಿದೆ ಎಂದು ಕಾಂಗ್ರೆಸ್‌ ವಕ್ತಾರ ವಿ.ಎಸ್.ಉಗ್ರಪ್ಪ ತಿಳಿಸಿದರು.

ಭಾನುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ನೇತೃತ್ವದಲ್ಲಿ ಸಾವಿರಾರು ಜನರು ಹೋರಾಟದಲ್ಲಿ ಪಾಲ್ಗೊಳ್ಳಲಿದ್ದಾರೆ. ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದಿಂದ ರಾಜಭವನದವರೆಗೆ ಮೆರವಣಿಗೆ ತೆರಳಸಲಾಗುವುದು. ವಿವಿಧ ಸಂಘಟನೆಗಳ ಮುಖಂಡರು ಹೋರಾಟದಲ್ಲಿ ಪಾಲ್ಗೊಳ್ಳಲಿದ್ದಾರೆ’ ಎಂದರು.

‘ಭೂಸುಧಾರಣಾ ಕಾಯ್ದೆ ಹಾಗೂ ಎಪಿಎಂಸಿ ಕಾಯ್ದೆಗಳು ರೈತ ವಿರೋಧಿಯಾಗಿವೆ. ಕೇಂದ್ರ ಸರ್ಕಾರ ರೂಪಿಸಿದ ಕಾಯ್ದೆ ಎಪಿಎಂಸಿ ವ್ಯವಸ್ಥೆಯನ್ನೇ ಹಾಳು ಮಾಡಿದೆ. ಕಾರ್ಪೊರೇಟ್ ಕಂಪನಿಗಳ ಹಿತಾಸಕ್ತಿಗಾಗಿ ಕಾಯ್ದೆ ರೂಪಿಸಲಾಗಿದೆ. ರೈತರ ಬಳಿ ಇರುವ ಭೂಮಿಯನ್ನು ಕಿತ್ತುಕೊಳ್ಳುವ ಹುನ್ನಾರಕ್ಕೆ ಸರ್ಕಾರ ಮುಂದಾಗಿದೆ’ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ADVERTISEMENT

‘ಕೃಷಿ ಕಾಯ್ದೆಗಳನ್ನು ವಿರೋಧಿಸಿ ದೆಹಲಿಯಲ್ಲಿ ರೈತರು ನಡೆಸುತ್ತಿರುವ ಪ್ರತಿಭಟನೆ 50 ದಿನ ದಾಟಿದೆ. ರೈತರ ಮನವೊಲಿಸಲು ಸರ್ಕಾರ ನಡೆಸಿದ 9 ಸುತ್ತಿನ ಮಾತುಕತೆಗಳು ವಿಫಲವಾಗಿವೆ. ಕೇಂದ್ರ ಸರ್ಕಾರಕ್ಕೆ ರೈತ ಪರ ಕಾಳಜಿ ಇದ್ದಿದ್ದರೆ ಹೋರಾಟ ನಡೆಸುತ್ತಿರುವ ರೈತರಿಗೆ ಶೀಘ್ರ ಸ್ಪಂದಿಸುತ್ತಿತ್ತು. ದಪ್ಪ ಚರ್ಮದ ಬಿಜೆಪಿ ನಾಯಕರಿಗೆ ರೈತರ ಸಮಸ್ಯೆ ಅರ್ಥವಾಗುತ್ತಿಲ್ಲ’ ಎಂದು ದೂರಿದರು.

‘ಕೃಷಿ ಕಾಯ್ದೆಗಳಿಗೆ ತಡೆಯಾಜ್ಞೆ ನೀಡುವ ಮೂಲಕ ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ ಕಪಾಳಮೋಕ್ಷ ಮಾಡಿದೆ. ನ್ಯಾಯಾಲಯದ ಈ ಕ್ರಮಕ್ಕೆ ಪ್ರಧಾನಿ ಹಾಗೂ ಕೃಷಿ ಸಚಿವರು ಕ್ಷಮೆಯಾಚಿಸಬೇಕಿತ್ತು. ಸುಪ್ರೀಂ ಕೋರ್ಟ್‌ ಅಭಿಪ್ರಾಯವನ್ನು ಬಿಜೆಪಿ ನಾಯಕರು ಅರ್ಥ ಮಾಡಿಕೊಂಡಂತೆ ಕಾಣುತ್ತಿಲ್ಲ. ಕಾರ್ಪೊರೇಟ್‌ ಕಂಪನಿಗಳಿಗೆ ಅನುಕೂಲ ಮಾಡಿಕೊಡುವ ಉದ್ದೇಶದಿಂದ ಕೇಂದ್ರ ಸರ್ಕಾರ ಜಾಣ ಕುರುಡುತನ ಪ್ರದರ್ಶಿಸುತ್ತಿದೆ’ ಎಂದು ಕಿಡಿಕಾರಿದರು.

‘ಕೋವಿಡ್, ಪಾಕಿಸ್ತಾನ ಹಾಗೂ ಚೀನಾ ಹೆಸರಿನಲ್ಲಿ ಬಿಜೆಪಿ ರಾಜಕಾರಣ ಮಾಡಲಾಗುತ್ತಿದೆ. ರೈತರು ಮತ್ತು ಜನಸಾಮಾನ್ಯರಿಗೆ ಅನುಕೂಲವಾಗುವಂತಹ ಯಾವುದೇ ಯೋಜನೆಗಳನ್ನು ಜಾರಿಗೊಳಿಸುತ್ತಿಲ್ಲ. ರಾಜ್ಯ ಸರ್ಕಾರ ಆರ್ಥಿಕವಾಗಿ ದಿವಾಳಿಯಾಗಿದೆ. ಕೇವಲ ಭಾಷಣ ಮತ್ತು ಪ್ರಚಾರಕ್ಕೆ ಸರ್ಕಾರದ ಸಾಧನೆ ಸೀಮಿತವಾಗಿದೆ’ ಎಂದು ವ್ಯಂಗ್ಯವಾಡಿದರು.

ಕಾಂಗ್ರೆಸ್‌ ಜಿಲ್ಲಾ ಘಟಕದ ಅಧ್ಯಕ್ಷ ಎಂ.ಕೆ.ತಾಜ್‌ಪೀರ್, ಕಾರ್ಯಾಧ್ಯಕ್ಷ ಹಾಲೇಶ್, ಮಾಜಿ ಶಾಸಕ ಉಮಾಪತಿ, ಜಿಲ್ಲಾ ಪ್ರಚಾರ ಸಮಿತಿಯ ಜಿ.ಎಸ್‌.ಮಂಜುನಾಥ್, ಮುಖಂಡರಾದ ಮೀನಾಕ್ಷಿ, ಸಂಪತ್‍ಕುಮಾರ್, ಮೋಕ್ಷಾ, ಮುನೀರಾ, ಮೈಲಾರಪ್ಪ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.