ADVERTISEMENT

ಕುತೂಹಲ ಮೂಡಿಸಿದ ವಿಜಯೇಂದ್ರ ಭೇಟಿ

ಮಠಾಧೀಶರೊಂದಿಗೆ ಔತಣಕೂಟ, ಗೋಪ್ಯ ಸಮಾಲೋಚನೆ

​ಪ್ರಜಾವಾಣಿ ವಾರ್ತೆ
Published 10 ಜೂನ್ 2021, 14:57 IST
Last Updated 10 ಜೂನ್ 2021, 14:57 IST
ಚಿತ್ರದುರ್ಗದ ಮುರುಘಾ ಮಠಕ್ಕೆ ಬುಧವಾರ ಭೇಟಿ ನೀಡಿದ್ದ ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಮಠಾಧೀಶರೊಂದಿಗೆ ಮಾತುಕತೆ ನಡೆಸಿದರು. ಶಿವಮೂರ್ತಿ ಮುರುಘಾ ಶರಣರು, ರಾಜ್ಯ ಖನಿಜ ನಿಗಮದ ಅಧ್ಯಕ್ಷ ಲಿಂಗಮೂರ್ತಿ ಇದ್ದಾರೆ.
ಚಿತ್ರದುರ್ಗದ ಮುರುಘಾ ಮಠಕ್ಕೆ ಬುಧವಾರ ಭೇಟಿ ನೀಡಿದ್ದ ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಮಠಾಧೀಶರೊಂದಿಗೆ ಮಾತುಕತೆ ನಡೆಸಿದರು. ಶಿವಮೂರ್ತಿ ಮುರುಘಾ ಶರಣರು, ರಾಜ್ಯ ಖನಿಜ ನಿಗಮದ ಅಧ್ಯಕ್ಷ ಲಿಂಗಮೂರ್ತಿ ಇದ್ದಾರೆ.   

ಚಿತ್ರದುರ್ಗ: ಬಿಜೆಪಿ ರಾಜ್ಯ ಉಪಾಧ್ಯಕ್ಷರೂ ಆಗಿರುವ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರ ಪುತ್ರ ಬಿ.ವೈ.ವಿಜಯೇಂದ್ರ ಜಿಲ್ಲೆಯ ಹಲವು ಮಠಾಧೀಶರನ್ನು ಭೇಟಿಯಾಗಿ ಗೋಪ್ಯ ಮಾತುಕತೆ ನಡೆಸಿರುವುದು ಕುತೂಹಲ ಮೂಡಿಸಿದೆ.

ಜಿಲ್ಲೆಯ ಹಲವು ಮಠಾಧೀಶರೊಂದಿಗೆ ಮುರುಘಾ ಮಠದಲ್ಲಿ ಬುಧವಾರ ಮಧ್ಯಾಹ್ನ ಊಟ ಸ್ವೀಕರಿಸಿದ್ದಾರೆ. ಬಳಿಕ ಗೋಪ್ಯ ಮಾತುಕತೆ ನಡೆಸಿದ್ದಾರೆ. ಮುಖ್ಯಮಂತ್ರಿ ಹುದ್ದೆಯ ಬದಲಾವಣೆಯ ಬಗ್ಗೆ ನಡೆಯುತ್ತಿರುವ ಚರ್ಚೆಯ ಸಂದರ್ಭದಲ್ಲಿಯೇ ಈ ಬೆಳವಣಿಗೆ ನಡೆದಿರುವುದು ರಾಜಕೀಯ ವಲಯದ ಗಮನ ಸೆಳೆದಿದೆ.

ಬುಧವಾರ ಬೆಳಿಗ್ಗೆ ಸಿರಿಗೆರೆಯ ತರಳಬಾಳು ಮಠಕ್ಕೆ ವಿಜಯೇಂದ್ರ ಭೇಟಿ ನೀಡಿದ್ದಾರೆ. ಕೋವಿಡ್‌ ಸಂತ್ರಸ್ಥರಿಗೆ ತರಳಬಾಳು ಸೇವಾ ಸಮಿತಿ ನಡೆಸುತ್ತಿರುವ ದಾಸೋಹ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಕೆಲ ಹೊತ್ತು ಮಠದಲ್ಲಿ ಕಾಲ ಕಳೆದಿದ್ದಾರೆ. ಈ ವೇಳೆ ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು ಎನ್ನಲಾಗಿದೆ.

ADVERTISEMENT

ಅಲ್ಲಿಂದ ಮರುಘಾ ಮಠಕ್ಕೆ ಭೇಟಿ ನೀಡಿದ್ದಾರೆ. ಅದಾಗಲೇ ಜಿಲ್ಲೆಯ ಹಲವು ಮಠಾಧೀಶರು ಇಲ್ಲಿ ಸೇರಿದ್ದರು. ಶಿವಮೂರ್ತಿ ಮುರುಘಾ ಶರಣರು, ಶಿವಶರಣ ಮಾದಾರ ಚನ್ನಯ್ಯ ಗುರುಪೀಠದ ಮಾದಾರ ಚನ್ನಯ್ಯ ಸ್ವಾಮೀಜಿ, ಭೋವಿ ಗುರುಪೀಠದ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ, ಭಗೀರಥ ಗುರುಪೀಠದ ಪುರುಷೋತ್ತಮಾನಂದಪುರಿ ಸ್ವಾಮೀಜಿ, ಮಡಿವಾಳ ಮಾಚಿದೇವ ಸ್ವಾಮೀಜಿ, ಬಸವಪ್ರಭು ಸ್ವಾಮೀಜಿ ಅವರೊಂದಿಗೆ ಹೋಳಿಗೆ, ಸೀಕರಣೆ ಊಟ ಸೇವಿಸಿದ್ದಾರೆ. ಈ ವೇಳೆ ಹಲವು ವಿಚಾರಗಳನ್ನು ಪ್ರಸ್ತಾಪಿಸಿದರು ಎಂದು ತಿಳಿದುಬಂದಿದೆ.

ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರನ್ನು ಬದಲಾವಣೆ ಮಾಡುವ ವಿಚಾರ ರಾಜಕೀಯ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ. ಕೆಲ ದಿನಗಳ ಹಿಂದೆಯಷ್ಟೇ ವಿಜಯೇಂದ್ರ ಅವರು ದೆಹಲಿಗೆ ತೆರಳಿ ಪಕ್ಷದ ವರಿಷ್ಠರನ್ನು ಭೇಟಿ ಮಾಡಿದ್ದರು. ಅನಿರೀಕ್ಷಿತ ಬೆಳವಣಿಗೆಯ ಸಂದರ್ಭದಲ್ಲಿ ಮಾನಸಿಕವಾಗಿ ಜೊತೆಗೆ ಇರುವಂತೆ ಮಠಾಧೀಶರನ್ನು ಕೇಳಿಕೊಂಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.