ADVERTISEMENT

ನಿವೃತ್ತಿ ವೇತನ ಹೆಚ್ಚಳಕ್ಕೆ ಕಾರ್ಮಿಕರ ಆಗ್ರಹ

ಜಿಲ್ಲಾ ಕಟ್ಟಡ ಕಾರ್ಮಿಕರ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 9 ಮಾರ್ಚ್ 2022, 5:14 IST
Last Updated 9 ಮಾರ್ಚ್ 2022, 5:14 IST
ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಚಿತ್ರದುರ್ಗ ಜಿಲ್ಲಾ ಕಟ್ಟಡ ಕಾರ್ಮಿಕರ ಸಂಘಟನೆ ಚಿತ್ರದುರ್ಗ ನಗರದ ಒನಕೆ ಓಬವ್ವ ವೃತ್ತದಲ್ಲಿ ಪ್ರತಿಭಟನೆ ನಡೆಸಿತು.
ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಚಿತ್ರದುರ್ಗ ಜಿಲ್ಲಾ ಕಟ್ಟಡ ಕಾರ್ಮಿಕರ ಸಂಘಟನೆ ಚಿತ್ರದುರ್ಗ ನಗರದ ಒನಕೆ ಓಬವ್ವ ವೃತ್ತದಲ್ಲಿ ಪ್ರತಿಭಟನೆ ನಡೆಸಿತು.   

ಚಿತ್ರದುರ್ಗ: ನೋಂದಾಯಿತ ಕಟ್ಟಡ ಕಾರ್ಮಿಕರ ನಿವೃತ್ತಿ ವೇತನ ಹೆಚ್ಚಳ ಸೇರಿ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಚಿತ್ರದುರ್ಗ ಜಿಲ್ಲಾ ಕಟ್ಟಡ ಕಾರ್ಮಿಕರ ಸಂಘಟನೆ ಮಂಗಳವಾರ ಪ್ರತಿಭಟನೆ ನಡೆಸಿತು.

ನಗರದ ಒನಕೆ ಓಬವ್ವ ವೃತ್ತದಲ್ಲಿ ಜಮಾಯಿಸಿದ ಪ್ರತಿಭಟನಕಾರರು, ‘ಕಟ್ಟಡ ಕಾರ್ಮಿಕರು ನಿರಂತರ ಶೋಷಣೆಗೆ ಒಳಗಾಗುತ್ತಿದ್ದಾರೆ. ಎಷ್ಟೇ ಹೋರಾಟ ನಡೆಸಿದರೂ ಸರ್ಕಾರ ಸಮಸ್ಯೆ ಬಗೆಹರಿಸಲು ಮುಂದಾಗುತ್ತಿಲ್ಲ’ ಎಂದು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ನೋಂದಾಯಿತ ಕಟ್ಟಡ ಕಾರ್ಮಿಕರ ಮದುವೆ ಸಹಾಯ ಧನವನ್ನು ₹ 50 ಸಾವಿರದಿಂದ ₹ 2 ಲಕ್ಷಕ್ಕೆ ಹೆಚ್ಚಿಸಬೇಕು. ಜಿಲ್ಲೆಯಾದ್ಯಂತ 1,45,000ಕ್ಕಿಂತ ಹೆಚ್ಚು ಜನ ಕಾರ್ಮಿಕ ಮಂಡಳಿಯಲ್ಲಿ ನೋಂದಾಯಿಸಿಕೊಂಡಿದ್ದಾರೆ. ಅದರಲ್ಲಿ ಶೇ 30ರಷ್ಟು ಕಾರ್ಮಿಕರಲ್ಲದವರಿದ್ದಾರೆ. ಅಂತಹ ಕಾರ್ಡ್‌ಗಳನ್ನು ಪತ್ತೆ ಹಚ್ಚಿ ರದ್ದುಗೊಳಿಸಬೇಕು ಎಂದು ಆಗ್ರಹಿಸಿದರು.

ADVERTISEMENT

ಮಹಿಳಾ ಕಾರ್ಮಿಕರಿಗೆ ನೀಡುವ ಹೆರಿಗೆ ಭತ್ಯೆಯನ್ನು ₹ 15 ಸಾವಿರದಿಂದ ₹ 50 ಸಾವಿರಕ್ಕೆ ಏರಿಸಬೇಕು. ಮದುವೆ ಸಹಾಯಧನವನ್ನು₹ 50 ಸಾವಿರದಿಂದ ₹ 2 ಲಕ್ಷಕ್ಕೆಹೆಚ್ಚಿಸಬೇಕು. ಜತೆಗೆ ಕಾರ್ಮಿಕರ ಮಕ್ಕಳ ಶೈಕ್ಷಣಿಕ ಸಹಾಯಧನಕ್ಕೆ ಸೇವಾಸಿಂಧುವಿನಲ್ಲಿ ಅರ್ಜಿ ಸಲ್ಲಿಸಲು ಅವಕಾಶ ನೀಡಬೇಕು ಎಂದು ಒತ್ತಾಯಿಸಿದರು.

ಹೆಚ್ಚುವರಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು. ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ವೈ. ತಿಪ್ಪೇಸ್ವಾಮಿ, ಗೌರವಾಧ್ಯಕ್ಷ ಎಚ್‌. ಹಾಲೇಶಪ್ಪ, ಉಪಾಧ್ಯಕ್ಷರಾದ ಟಿ. ಬಸವರಾಜ್‌, ಎಂ. ಮಲ್ಲಿಕಾರ್ಜುನ್‌, ಕಾರ್ಯಾಧ್ಯಕ್ಷ ಜಾವೀದ್‌ ಬಾಷ, ಪ್ರಧಾನ ಕಾರ್ಯದರ್ಶಿ ಎ. ನಾಗರಾಜ್‌ ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.