ಚಿತ್ರದುರ್ಗ: ‘ಜಿಲ್ಲೆಯಲ್ಲಿ ಕಂಡುಬರುವ ಬಾಲ್ಯ ವಿವಾಹ, ಬಾಲ ಗರ್ಭಿಣಿಯರ ಪ್ರಕರಣಗಳನ್ನು ಅಧಿಕಾರಿಗಳು ಗಂಭೀರವಾಗಿ ಪರಿಗಣಿಸಬೇಕು. ಸಮುದಾಯದಲ್ಲಿ ಹೆಚ್ಚಿನ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಅಗತ್ಯ ಕ್ರಮವಹಿಸಬೇಕು’ ಎಂದು ಜಿಲ್ಲಾ ಪಂಚಾಯಿತಿ ಸಿಇಒ ಎಸ್.ಜೆ.ಸೋಮಶೇಖರ್ ಸೂಚನೆ ನೀಡಿದರು.
ಇಲ್ಲಿನ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಮಂಗಳವಾರ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಆಯೋಜಿಸಿದ್ದ ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
‘ಪ್ರಕರಣ ಹೆಚ್ಚು ವರದಿಯಾಗುವ ಭಾಗದಲ್ಲಿ ಆರೋಗ್ಯ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಾಲಾ ಶಿಕ್ಷಣ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಸಹಯೋಗದೊಂದಿಗೆ ಜಾಗೃತಿ ಮೂಡಿಸಬೇಕು’ ಎಂದು ಅಧಿಕಾರಿಗಳಿಗೆ ತಿಳಿಸಿದರು.
‘ಕ್ಷಯ ಮುಕ್ತ ಗ್ರಾಮ ಪಂಚಾಯಿತಿ ಘೋಷಣೆ ಮಾಡುವ ನಿಟ್ಟಿನಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು ಹಾಗೂ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ಸಹಕಾರ ಅಗತ್ಯವಾಗಿದೆ. ಗ್ರಾಮ ಪಂಚಾಯಿತಿಗಳಲ್ಲಿ ನಡೆಯುವ ಪ್ರತಿ ಗ್ರಾಮ ಸಭೆಗಳಲ್ಲಿ ಕ್ಷಯ ರೋಗದ ಬಗ್ಗೆ ಜಾಗೃತಿ ಮೂಡಿಸಬೇಕು’ ಎಂದು ಜಿಲ್ಲಾ ಕ್ಷಯರೋಗ ನಿಯಂತ್ರಣಾಧಿಕಾರಿ ಡಾ.ಸಿ.ಒ.ಸುಧಾ ಹೇಳಿದರು.
‘ಜುಲೈ 31ರ ವರೆಗೆ ಜಿಲ್ಲೆಯಲ್ಲಿ ಅತಿಸಾರ ಭೇದಿ ನಿಯಂತ್ರಣ ಆಂದೋಲನ ನಡಯಲಿದೆ. 5 ವರ್ಷದೊಳಗಿನ ಮಕ್ಕಳಲ್ಲಿ ಅತಿಸಾರ ಭೇದಿ ನಿಯಂತ್ರಣಕ್ಕೆ ಕ್ರಮ ವಹಿಸಲಾಗುತ್ತಿದೆ’ ಎಂದು ಜಿಲ್ಲಾ ಆರ್‌ಸಿಎಚ್ ಅಧಿಕಾರಿ ಡಾ.ಅಭಿನವ್ ತಿಳಿಸಿದರು.
ಡಿಎಚ್‌ಒ ಡಾ.ಜಿ.ಪಿ.ರೇಣುಪ್ರಸಾದ್, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ರವೀಂದ್ರ, ಜಿಲ್ಲಾ ಸರ್ವೇಕ್ಷಣಾಧಿಕಾರಿ ಚಂದ್ರಶೇಖರ್ ಕಂಬಾಳಿಮಠ್, ಜಿಲ್ಲಾ ಅಂಧತ್ವ ನಿವಾರಣಾಧಿಕಾರಿ ಡಾ.ನಾಗರಾಜ್, ಜಿಲ್ಲಾ ಆಯುಷ್ ಅಧಿಕಾರಿ ಡಾ.ಚಂದ್ರಕಾಂತ್ ನಾಗಸಮುದ್ರ, ಕಾರ್ಮಿಕ ಅಧಿಕಾರಿ ಅನಿಲ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ವಿಜಯ್ ಕುಮಾರ್ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.