
ಪುತ್ತೂರು: ಬಿಜೆಪಿಯವರ ತಪ್ಪು ಸಂದೇಶಗಳ ವಿರುದ್ಧ ಕಾಂಗ್ರೆಸ್ ಪಕ್ಷದ ಸಾಧನೆಗಳನ್ನು ಜನಸಾಮಾನ್ಯರಿಗೆ ತಿಳಿಸುವ ಮೂಲಕ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಜನಾರ್ದನ ಪೂಜಾರಿಯವರನ್ನು ಗೆಲ್ಲಿಸಲು ಪ್ರತಿಯೊಬ್ಬ ಕಾರ್ಯಕರ್ತರು ಶ್ರಮಿಸಬೇಕು ಎಂದು ರಾಜ್ಯದ ನಗರಾಭಿವೃದ್ಧಿ ಸಚಿವ ವಿನಯಕುಮಾರ್ ಸೊರಕೆ ಹೇಳಿದರು.
ಪುರಷರಕಟ್ಟೆಯಲ್ಲಿ ಶುಕ್ರವಾರ ನಡೆದ ಸರ್ವೆ, ಮುಂಡೂರು, ನರಿಮೊಗರು, ಮತ್ತು ಶಾಂತಿಗೋಡು ಗ್ರಾಮ ವ್ಯಾಪ್ತಿಯ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಅವರು ಮಾತನಾಡಿದರು.
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ತಕ್ಷಣ ₨1.15 ಲಕ್ಷ ಜನರಿಗೆ ತಿಂಗಳಿಗೆ 30 ಕೆಜಿ ಅಕ್ಕಿಯನ್ನು ಕೇವಲ 1 ರೂಪಾಯಿಗೆ ನೀಡುವ ಯೋಜನೆ ಜಾರಿಗೊಳಿಸಿದೆ. ಶೇ 80 ಜನರಿಗೆ ಬಿ.ಪಿ.ಎಲ್ ಪಡಿತರ ಚೀಟಿಯನ್ನು ವಿತರಿಸುವ ಕಾರ್ಯಕ್ರಮ ನಡೆಸಿದೆ ಎಂದ ಅವರು ಜಗತ್ತಿನಲ್ಲಿ ಅಭಿವೃದ್ಧಿಯಲ್ಲಿ 30ನೇ ಸ್ಥಾನದಲ್ಲಿರುವ ಭಾರತವನ್ನು ಇದೀಗ 4ನೇ ಸ್ಥಾನಕ್ಕೆ ತಂದು ನಿಲ್ಲಿಸಿದ ಕೀರ್ತಿ ಕಾಂಗ್ರೆಸ್‌ಗೆೆ ಸಲ್ಲುತ್ತದೆ ಎಂದರು.
ದೇಶದೆಲ್ಲೆಡೆ ಮೋದಿ ಅಲೆ ಇದೆ ಎಂದು ಪುಕ್ಕಟೆ ಪ್ರಚಾರ ನಡೆಸುವ ಬಿಜೆಪಿಗರಿಗೆ ಅದರಿಂದ ಏನೂ ಸಾಧಿಸಲು ಸಾಧ್ಯವಿಲ್ಲ. ಗುಜರಾತ್‌ನಲ್ಲೇ ವರ್ಚಸ್ಸು ಕಳೆದುಕೊಳ್ಳುತ್ತಿರುವ ಮೋದಿಯ ಅಲೆ ದೇಶದಲ್ಲಿ ಎಲ್ಲೂ ಪ್ರಭಾವ ಬೀರಲು ಸಾಧ್ಯವಿಲ್ಲ ಎಂದರು. ಶಾಸಕಿ ಶಕುಂತಳಾ ಶೆಟ್ಟಿ ಮಾತನಾಡಿ ಮಾತೃದೇವೋಭವ ಎನ್ನುತ್ತಾ ಮಹಿಳೆಯರ ರಕ್ಷಣೆಯ ಬಗ್ಗೆ ಬೊಬ್ಬೆ ಹೊಡೆಯುತ್ತಿರುವ ಬಿಜೆಪಿಯವರು ಮಹಿಳೆಯರಿಗೆ ಎಲ್ಲೂ ರಕ್ಷಣೆ ನೀಡಿಲ್ಲ ಎಂದು ದೂರಿದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕಾವು ಹೇಮನಾಥ ಶೆಟ್ಟಿ , ಮಾಜಿ ಅಧ್ಯಕ್ಷ ಎನ್.ಸುಧಾಕರ ಶೆಟ್ಟಿ ಅವರು ಮಾತನಾಡಿದರು. ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷ ಲೋಕೇಶ್ ಹೆಗ್ಡೆ, ಕಾಂಗ್ರೆಸ್ ನಗರಾಧ್ಯಕ್ಷ ಲ್ಯಾನ್ಸಿ ಮಸ್ಕರೇನ್ಹಸ್, ಬ್ಲಾಕ್ ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷೆ ಕಲಾವತಿ ಮತ್ತಿತರರು ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.