ADVERTISEMENT

ತಡೆಯಾಜ್ಞೆ ತೆರವಿಗೆ ಕ್ರಮ: ಖಾದರ್‌

​ಪ್ರಜಾವಾಣಿ ವಾರ್ತೆ
Published 20 ಅಕ್ಟೋಬರ್ 2017, 9:00 IST
Last Updated 20 ಅಕ್ಟೋಬರ್ 2017, 9:00 IST
ಮಂಗಳೂರು ಜಿಲ್ಲಾಧಿಕಾರಿ ಕಚೇರಿಯಲ್ಲಿ ಗುರುವಾರ ಸಚಿವ ಯು.ಟಿ. ಖಾದರ್ ಸಭೆ ನಡೆಸಿದರು.
ಮಂಗಳೂರು ಜಿಲ್ಲಾಧಿಕಾರಿ ಕಚೇರಿಯಲ್ಲಿ ಗುರುವಾರ ಸಚಿವ ಯು.ಟಿ. ಖಾದರ್ ಸಭೆ ನಡೆಸಿದರು.   

ಮಂಗಳೂರು:  ಕ್ಷೇತ್ರದ ಕಿನ್ಯಾ ಹಾಗೂ ಬೊಳಿಯಾರ್‌ಗೆ ಸರ್ಕಾರಿ ಬಸ್ ಸಂಚಾರಕ್ಕೆ ಖಾಸಗಿ ಬಸ್ ಮಾಲೀಕರು ತಂದಿರುವ ಹೈಕೋರ್ಟ್ ತಡೆಯಾಜ್ಞೆ ತೆರವುಗೊಳಿಸಲು ಅಗತ್ಯ ಕ್ರಮ ಕೈಗೊಳ್ಳಲು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಯು.ಟಿ. ಖಾದರ್ ಸೂಚಿಸಿದ್ದಾರೆ. ಗುರುವಾರ ಈ ಸಂಬಂಧ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಭೆ ನಡೆಸಿದ ಅವರು, ಹೈಕೋರ್ಟ್ ಆದೇಶಕ್ಕೆ ಮೇಲ್ಮನವಿ ಸಲ್ಲಿಸಲು ತಿಳಿಸಿದರು.

ಗ್ರಾಮಾಂತರ ಪ್ರದೇಶದ ಜನತೆಯ ದೀರ್ಘಕಾಲದ ಬೇಡಿಕೆಗೆ ಸ್ಪಂದಿಸಿ ಕಿನ್ಯಾ- ಬೊಳಿಯಾರ್ ಪ್ರದೇಶಗಳಿಗೆ ಬಸ್ ಸಂಚಾರ ಆರಂಭಿಸಲಾಗಿತ್ತು. ಆದರೆ ಖಾಸಗಿ ಬಸ್ ಮಾಲೀಕರು ಇದನ್ನು ವಿರೋಧಿಸಿ ಹೈಕೋರ್ಟ್ ತಡೆಯಾಜ್ಞೆ ತಂದಿದ್ದು, ಇದನ್ನು ತೆರವುಗೊಳಿಸಲು ಪ್ರಾದೇಶಿಕ ಸಾರಿಗೆ ಪ್ರಾಧಿಕಾರ ತಕ್ಷಣವೇ ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು.

ಒಂದು ತಿಂಗಳಲ್ಲಿ ಈ ಪ್ರದೇಶಗಳಿಗೆ ಸರ್ಕಾರಿ ಬಸ್ ಸಂಚಾರಕ್ಕೆ ಅಗತ್ಯ ಕ್ರಮ ವಹಿಸಲು ಸಚಿವರು ನಿರ್ದೇಶನ ನೀಡಿದರು. ಅಲ್ಲದೇ ತೌಡುಗೋಳಿ ಪ್ರದೇಶಕ್ಕೂ ಸಮರ್ಪಕ ಬಸ್ ಸಂಚಾರ ಆರಂಭಿಸಲು ಸೂಚಿಸಿದರು.

ADVERTISEMENT

ಕಾಂಟ್ರಾಕ್ಟ್ ಕ್ಯಾರೇಜ್ ಬಸ್‌ ಗಳು ಮಂಗಳೂರು ನಗರ ಪ್ರವೇಶಿಸುವುದನ್ನು ನಿಲ್ಲಿಸಲು ಕೂಡಲೇ ಕ್ರಮ ಕೈಗೊಳ್ಳಲು ಸಚಿವ ಖಾದರ್ ಸಾರಿಗೆ ಅಧಿಕಾರಿಗಳಿಗೆ ತಾಕೀತು ಮಾಡಿದರು. ನೂತನ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಎಸ್‌., ಹೆಚ್ಚುವರಿ ಜಿಲ್ಲಾಧಿಕಾರಿ ಕುಮಾರ್, ಸಾರಿಗೆ ಇಲಾಖೆ, ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಅಧಿಕಾರಿಗಳು, ಮಂಗಳೂರು ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಮುಹಮ್ಮದ್ ಮೋನು, ಸದಸ್ಯ ಜಬ್ಬಾರ್, ಕಿನ್ಯಾ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಮಾಲಿನಿ, ಉಪಾಧ್ಯಕ್ಷ ಸಿರಾಜ್, ಸ್ಥಳೀಯ ಮುಖಂಡರು ಸಭೆಯಲ್ಲಿ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.