ADVERTISEMENT

ನಮೋ ಎಂದರೆ ‘ನಂಬಿಕೆಗೆ ಮೋಸ’ ಸರ್ಕಾರ

​ಪ್ರಜಾವಾಣಿ ವಾರ್ತೆ
Published 13 ಅಕ್ಟೋಬರ್ 2017, 8:59 IST
Last Updated 13 ಅಕ್ಟೋಬರ್ 2017, 8:59 IST

ಬಂಟ್ವಾಳ: ಕೇಂದ್ರದಲ್ಲಿರುವ ‘ನಮೋ’ ಸರ್ಕಾರ ಎಂದರೆ ‘ನಂಬಿಕೆಗೆ ಮೋಸ’ ಮಾಡುವ ಸರ್ಕಾರ. ಕೇವಲ ಸುಳ್ಳನ್ನೇ ಬಂಡವಾಳವಾಗಿಸಿಕೊಂಡಿರುವ ಮೋದಿ ಅವರು ಮಾತಿನಲ್ಲೇ ಜನರ ಹೊಟ್ಟೆ ತುಂಬಿಸುತ್ತಿದ್ದಾರೆ ಎಂದು ಅರಣ್ಯ ಸಚಿವ ಬಿ.ರಮಾನಾಥ ರೈ ಟೀಕಿಸಿದರು.

ಕೇಂದ್ರ ಸರ್ಕಾರದ ರೈತ ವಿರೋಧಿ ನೀತಿಯ ವಿರುದ್ಧ ಜಿಲ್ಲಾ ಕಾಂಗ್ರೆಸ್ ಸಮಿತಿ, ಜಿಲ್ಲಾ ಕಿಸಾನ್ ಕಾಂಗ್ರೆಸ್ ಘಟಕ ಪಾಣೆಮಂಗಳೂರು ಮತ್ತು ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ವತಿಯಿಂದ ಬಿ.ಸಿ.ರೋಡ್ ಜಂಕ್ಷನ್ ಬಳಿ ಗುರುವಾರ ನಡೆದ ಪ್ರತಿಭಟನೆಯಲ್ಲಿ ಅವರು ಮಾತನಾಡಿದರು.

ಕೇಂದ್ರದಲ್ಲಿ ಮನಮೋಹನ್ ನೇತೃತ್ವದ ಸರ್ಕಾರ ಇದ್ದಾಗ ಸುಮಾರು ₹ 72 ಸಾವಿರ ಕೋಟಿ ರೈತರ ಸಾಲ ಮನ್ನಾ ಮಾಡಿದ್ದಾರೆ. ಆದರೆ ಮೋದಿ ಅವರು ಬಂಡವಾಳಶಾಹಿ, ರಿಲಯನ್ಸ್, ಅದಾನಿ ಹಾಗೂ ಕಾರ್ಪೊರೇಟ್ ಸಂಸ್ಥೆಗಳ ದೊಡ್ಡ ಮೊತ್ತದ ಸಾಲ ಮನ್ನಾ ಮಾಡುವ ಮೂಲಕ ಶ್ರೀಮಂತರನ್ನು ಪುನರುತ್ಥಾನ ಮಾಡುತ್ತಿದ್ದಾರೆ ಎಂದರು.

ADVERTISEMENT

ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ರೈತರ ಸಾಲ ಮನ್ನಾ, ಕೃಷಿ ಉಪಕರಣ ನೀಡಿಕೆ, ಬೆಂಬಲ ಬೆಲೆ ಹಾಗೂ ಉಚಿತ ಪಂಪ್‍ಸೆಟ್ ನೀಡುವ ಮೂಲಕ ರೈತರ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸಿದೆ. ಇದರಿಂದ ರಾಜ್ಯದಲ್ಲಿ ರೈತರು ನೆಮ್ಮದಿಯ ಹಾಗೂ ಸ್ವಾಭಿಮಾನದ ಬದುಕು ರೂಪಿಸುವಂತಾಗಿದೆ ಎಂದರು.

ಕಿಸಾನ್ ಕಾಂಗ್ರೆಸ್ ಘಟಕದ ರಾಜ್ಯಾಧ್ಯಕ್ಷ ಸಚಿನ್ ಮೀಗಾ ಮಾತನಾಡಿ, ಬಿಜೆಪಿ ಕೋಮುಗಳ ನಡುವೆ ವಿಷಬೀಜ ಬಿತ್ತುವ ಮೂಲಕ ಕೊಮುಗಲಭೆಯನ್ನು ನಡೆಸುತ್ತಿದೆ ಎಂದರು. ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಹರೀಶ್ ಕುಮಾರ್ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಪಂಚಾಯಿತಿ ಸದಸ್ಯರಾದ ಚಂದ್ರಪ್ರಕಾಶ್ ಶೆಟ್ಟಿ, ಎಂ.ಎಸ್. ಮುಹಮ್ಮದ್, ಕಿಸಾನ್ ಕಾಂಗ್ರೆಸ್ ಘಟಕದ ವಾಮನಾಥ ಶೆಟ್ಟಿ ಪೆರ್ನೆ ಮಾತನಾಡಿದರು. ಪಾಣೆಮಂಗಳೂರು ಯುವ ಕಾಂಗ್ರೆಸ್ ಬ್ಲಾಕ್ ಅಧ್ಯಕ್ಷ ಅಬ್ಬಾಸ್ ಅಲಿ ಪ್ರಾಸ್ತಾವಿಕವಾಗಿ ಮಾತನಾಡಿದರು.

ಜಿಲ್ಲಾ ಪಂಚಾಯಿತಿ ಸದಸ್ಯರಾದ ಪದ್ಮಶೇಖರ್ ಜೈನ್, ಮಂಜುಳ ಮಾವೆ, ಶಾಹುಲ್ ಹಮೀದ್, ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಚಂದ್ರಹಾಸ ಕರ್ಕೇರ, ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಾಯಿಲಪ್ಪ ಸಾಲಿಯಾನ್, ಪುರಸಭಾ ಉಪಾಧ್ಯಕ್ಷ ಮುಹಮ್ಮದ್ ನಂದರಬೆಟ್ಟು, ಸ್ಥಾಯಿ ಸಮಿತಿ ಅಧ್ಯಕ್ಷ ವಾಸು ಪೂಜಾರಿ, ಬುಡಾ ಅಧ್ಯಕ್ಷ ಸದಾಶಿವ ಬಂಗೇರ, ಕಾಂಗ್ರೆಸ್ ಎಸ್ಸಿ,ಎಸ್ಟಿ ಘಟಕದ ಜಿಲ್ಲಾಧ್ಯಕ್ಷ ಪದ್ಮನಾಭ ನರಿಂಗಾನ, ಜನಾರ್ದನ ಚಂಡ್ತಿಮಾರ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.