ADVERTISEMENT

ಸಚಿವ ರೈ ಸಾಧನೆಗೆ ಸಿಎಂ ಮೆಚ್ಚುಗೆ

​ಪ್ರಜಾವಾಣಿ ವಾರ್ತೆ
Published 23 ಅಕ್ಟೋಬರ್ 2017, 10:00 IST
Last Updated 23 ಅಕ್ಟೋಬರ್ 2017, 10:00 IST
ಬಂಟ್ವಾಳದಲ್ಲಿ ಅರಣ್ಯ ಇಲಾಖೆ ವತಿಯಿಂದ ರೂ 35ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಂಡ ಟ್ರೀ ಪಾರ್ಕ್‌ ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅರಣ್ಯ ಸಚಿವ ಬಿ.ರಮಾನಾಥ ರೈ ಉದ್ಘಾಟಿಸಿದರು.
ಬಂಟ್ವಾಳದಲ್ಲಿ ಅರಣ್ಯ ಇಲಾಖೆ ವತಿಯಿಂದ ರೂ 35ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಂಡ ಟ್ರೀ ಪಾರ್ಕ್‌ ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅರಣ್ಯ ಸಚಿವ ಬಿ.ರಮಾನಾಥ ರೈ ಉದ್ಘಾಟಿಸಿದರು.   

ಬಂಟ್ವಾಳ: ಬಂಟ್ವಾಳ ವಿಧಾನಸಭಾ ಕ್ಷೇತ್ರದಲ್ಲಿ 4 ವರ್ಷಗಳ ಅವಧಿಯಲ್ಲಿ ಸುಮಾರು ₹800 ಕೋಟಿಗೂ ಮಿಕ್ಕಿ ವೆಚ್ಚದ ವಿವಿಧ ಅಭಿವೃದ್ಧಿ ಯೋಜನೆ ಕಾರ್ಯರೂಪಕ್ಕೆ ಬಂದಿವೆ. ಇದೀಗ ಮತ್ತೆ ₹252 ಕೋಟಿ ವೆಚ್ಚದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿ ಉದ್ಘಾಟನೆ ಮತ್ತು ಶಿಲಾನ್ಯಾಸ ಮಾಡಲಾಗಿದೆ.

ಅವಿರತ ಶ್ರಮವಹಿಸಿ ದುಡಿಯುತ್ತಿರುವ ಜಿಲ್ಲಾ ಉಸ್ತುವಾರಿ ಸಚಿವ ರಮಾನಾಥ ರೈ, ಕ್ರಿಯಾಶೀಲ ಮತ್ತು ಮಾನವೀಯತೆ ಹೊಂದಿರುವ ವ್ಯಕ್ತಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಶ್ಲಾಘಿಸಿದ್ದಾರೆ.

ತಾಲ್ಲೂಕಿನ ಬಿ.ಸಿ.ರೋಡ್‌ನಲ್ಲಿ ಭಾನುವಾರ ಮಧ್ಯಾಹ್ನ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದ ಬಳಿಕ ಅವರು ಮಾತನಾಡಿದರು. ವಾಸ್ತವದಲ್ಲಿ ಮೌನದಿಂದಲೇ ದುಡಿಯುತ್ತಿರುವ ಸಚಿವ ರೈ ಅವರು, ವಿಧಾನಸಭೆಯಲ್ಲಿ ಕೂಡಾ ಕೋಮುವಾದಿಗಳು ಅಟ್ಟಹಾಸದ ವರ್ತನೆ ತೋರಿದಾಗ ಎದ್ದು ನಿಂತು ಏರುದನಿಯಲ್ಲಿ ಅಬ್ಬರಿಸುತ್ತಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ADVERTISEMENT

ಇಂಧನ ಸಚಿವ ಡಿ.ಕೆ.ಶಿವಕುಮಾರ್ ಮಾತನಾಡಿ, ಈ ಜಿಲ್ಲೆಯಲ್ಲಿ ಧರ್ಮರಾಯನಂತೆ ಸಚಿವ ರೈ ಧರ್ಮದ ರಾಜಕಾರಣ ಮಾಡುತ್ತಿದ್ದಾರೆ. ಇದರಿಂದಾಗಿ ಇಲ್ಲಿನ ಅಭಿವೃದ್ಧಿ ಕಾಮಗಾರಿ ಇತರ ಜಿಲ್ಲೆಗೆ ಮಾದರಿಯಾಗಿದೆ ಎಂದರು.

ರಾಜ್ಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ, 4 ವರ್ಷಗಳ ಅವಧಿಯಲ್ಲಿ ಸುಮಾರು ₹9 ಸಾವಿರ ಕೋಟಿ ವೆಚ್ಚದಲ್ಲಿ ಅಭಿವೃದ್ಧಿ ಕಾಮಗಾರಿ ಮತ್ತು ಜನತೆಗೆ ವಿವಿಧ ಭಾಗ್ಯ ನೀಡಿದೆ ಎಂದರು.

ಆಹಾರ ಸಚಿವ ಯು.ಟಿ.ಖಾದರ್ ಮಾತನಾಡಿ, ‘ಡಾ.ಬಿ.ಆರ್.ಅಂಬೇಡ್ಕರ್ ಅವರು ರಚಿಸಿದ ಸಂವಿಧಾನಕ್ಕೆ ಬದ್ಧವಾಗಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್, ಕಳೆದ ಚುನಾವಣೆ ವೇಳೆ ನೀಡಿದ ಎಲ್ಲ ಭರವಸೆ ಈಡೇರಿಸಿದೆ ಎಂದು ನಾವು ಎದೆ ತಟ್ಟಿ ಹೇಳುತ್ತೇವೆ’ ಎಂದರು.

ಲೋಕೋಪಯೋಗಿ ಇಲಾಖೆ ಸಚಿವ ಡಾ.ಎಚ್.ಸಿ.ಮಹದೇವಪ್ಪ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಟಿ.ಬಿ.ಜಯಚಂದ್ರ, ಪೌರಾಡಳಿತ ಸಚಿವ ಈಶ್ವರ ಖಂಡ್ರೆ, ನಗರಾಭಿವೃದ್ಧಿ ಸಚಿವ ಆರ್.ರೋಶನ್ ಬೇಗ್, ಉಡುಪಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಮೋದ್ ಮಧ್ವರಾಜ್, ಮಾಜಿ ಸಚಿವ ಕೆ.ಅಭಯಚಂದ್ರ ಜೈನ್, ವಿಧಾನಪರಿಷತ್ ಮುಖ್ಯ ಸಚೇತಕ ಐವನ್ ಡಿಸೋಜ, ಶಾಸಕರಾದ ಕೆ.ಗೋಪಾಲ ಪೂಜಾರಿ, ಜೆ.ಆರ್.ಲೋಬೊ, ಶಕುಂತಳಾ ಟಿ.ಶೆಟ್ಟಿ, ಮೊಯ್ದಿನ್ ಬಾವ, ಮೇಯರ್ ಕವಿತಾ ಸನಿಲ್, ರಾಜ್ಯ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಸದಸ್ಯ ಪಿಯೂಸ್ ಎಲ್.ರಾಡ್ರಿಗಸ್, ಪುರಸಭಾಧ್ಯಕ್ಷ ಪಿ.ರಾಮಕೃಷ್ಣ ಆಳ್ವ, ಉಪಾಧ್ಯಕ್ಷ ಮಹಮ್ಮದ್ ನಂದರಬೆಟ್ಟು, ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಚಂದ್ರಹಾಸ ಕರ್ಕೇರ, ಉಪಾಧ್ಯಕ್ಷ ಅಬ್ಬಾಸ್ ಆಲಿ, ಬೂಡಾ ಅಧ್ಯಕ್ಷ ಸದಾಶಿವ ಬಂಗೇರ, ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಎ.ಸಿ.ಭಂಡಾರಿ, ಗೇರು ಅಭಿವೃದ್ಧಿ ನಿಗಮ ಅಧ್ಯಕ್ಷ ಬಿ.ಎಚ್.ಖಾದರ್, ಕೊಂಕಣಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಆರ್.ಪಿ.ನಾಯಕ್, ಎಪಿಎಂಸಿ ಅಧ್ಯಕ್ಷ ಕೆ.ಪದ್ಮನಾಭ ರೈ, ಜಿಲ್ಲಾಧಿಕಾರಿ ಶಶಿಕಾಂತ್ ಸೆಂಥಿಲ್, ಪಶ್ಚಿಮ ವಲಯ ಐಜಿಪಿ ಹೇಮಂತ್‌ ನಿಂಬಾಳ್ಕರ್‌, ಜಿಲ್ಲಾ ಪಂಚಾಯಿತಿ ಸಿಇಒ ಡಾ.ಎಂ.ಆರ್‌. ರವಿ, ಎಸ್ಪಿ ಸುಧೀರ್‌ಕುಮಾರ್‌ ರೆಡ್ಡಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.