ADVERTISEMENT

ಜಿಲ್ಲೆಯಲ್ಲಿ 11 ಆಮ್ಲಜನಕ ಉತ್ಪಾದನಾ ಘಟಕ

ಕೊರತೆ ಆಗದಂತೆ ಅಗತ್ಯ ಕ್ರಮ: ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ

​ಪ್ರಜಾವಾಣಿ ವಾರ್ತೆ
Published 20 ಮೇ 2021, 4:05 IST
Last Updated 20 ಮೇ 2021, 4:05 IST
ಮಂಗಳೂರಿನಲ್ಲಿ ಬುಧವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಮಾಹಿತಿ ನೀಡಿದರು.
ಮಂಗಳೂರಿನಲ್ಲಿ ಬುಧವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಮಾಹಿತಿ ನೀಡಿದರು.   

ಮಂಗಳೂರು: ಜಿಲ್ಲೆಯ ವಿವಿಧೆಡೆ 11 ಆಮ್ಲಜನಕ ಉತ್ಪಾದನಾ ಘಟಕಗಳ ನಿರ್ಮಾಣ ಆರಂಭಿಸಲಾಗಿದೆ. ಈ ಘಟಕಗಳು ಆರಂಭವಾದ ನಂತರ ಜಿಲ್ಲೆಯಲ್ಲಿ ವೈದ್ಯಕೀಯ ಆಮ್ಲಜನಕದ ಕೊರತೆ ಉಂಟಾಗುವುದಿಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.

ನಗರದಲ್ಲಿ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನಗರದ ವೆನ್ಲಾಕ್‌ ಜಿಲ್ಲಾ ಆಸ್ಪತ್ರೆ, ಲೇಡಿಗೋಷನ್‌ ಆಸ್ಪತ್ರೆ, ತಾಲ್ಲೂಕು ಆಸ್ಪತ್ರೆಗಳಲ್ಲಿ ಆಮ್ಲಜನಕ ಘಟಕಗಳ ನಿರ್ಮಾಣ ಮಾಡಲಾಗುತ್ತಿದೆ ಎಂದರು.

ರಾಜ್ಯ ಸರ್ಕಾರ 1.5 ಲಕ್ಷ ವಿಟಮಿನ್ ಸಿ ಮತ್ತು ಝಿಂಕ್ ಮಾತ್ರೆಗಳನ್ನು ಪೂರೈಕೆ ಮಾಡಿದೆ. ಜಿಲ್ಲೆಯಲ್ಲಿ ಔಷಧಿ, ವೈದ್ಯಕೀಯ ಪರಿಕರಗಳ ಕೊರತೆ ಇಲ್ಲ ಎಂದು ಸ್ಪಷ್ಟಪಡಿಸಿದರು.

ADVERTISEMENT

ಜಿಲ್ಲೆಯ 223 ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಗ್ರಾಮ ಮಟ್ಟದ ಕಾರ್ಯಪಡೆ ರಚನೆ ಮಾಡಲಾಗಿದೆ. ಕಾರ್ಯಪಡೆಯ ಸದಸ್ಯರು, ಕೋವಿಡ್–19 ನಿಯಂತ್ರಣಕ್ಕೆ ಶ್ರಮಿಸುತ್ತಿದ್ದಾರೆ. ಶಾಸಕರು ಈ ಕಾರ್ಯಪಡೆಗಳಿಗೆ ಅಗತ್ಯ ಸಲಹೆ, ಸೂಚನೆ ನೀಡುತ್ತಿದ್ದಾರೆ ಎಂದು ತಿಳಿಸಿದರು.

10 ದಿನದಲ್ಲಿ ಅಗತ್ಯ ಲಸಿಕೆ: ಜಿಲ್ಲೆಗೆ ಅಗತ್ಯವಾಗಿರುವ ಕೋವಿಶೀಲ್ಡ್ ಮತ್ತು ಕೋವ್ಯಾಕ್ಸಿನ್ ಲಸಿಕೆಗಳು ಇನ್ನು 8–10 ದಿನಗಳಲ್ಲಿ ಲಭ್ಯವಾಗಲಿವೆ ಎಂದು ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದರು.

60 ವರ್ಷದ ಮೇಲಿನ ಶೇ 58 ಜನರಿಗೆ ಮೊದಲ ಡೋಸ್ ಹಾಗೂ ಶೇ 39 ರಷ್ಟು ಜನರಿಗೆ ಎರಡನೇ ಡೋಸ್‌ ಲಸಿಕೆ ಹಾಕಲಾಗಿದೆ. 45 ವರ್ಷ ಮೇಲಿನವರ ವಿಭಾಗದಲ್ಲಿ 10.92 ಲಕ್ಷ ಜನರಿಗೆ ಲಸಿಕೆ ನೀಡುವ ಗುರಿ ಇದೆ. ಈಗಾಗಲೇ ಶೇ 26 ರಷ್ಟು ಜನರಿಗೆ ಮೊದಲ ಡೋಸ್‌, ಶೇ 16 ರಷ್ಟು ಜನರಿಗೆ ಎರಡನೇ ಡೋಸ್‌ ಲಸಿಕೆ ನೀಡಲಾಗಿದೆ. 18 ವರ್ಷ ಮೇಲಿನವರಿಗೆ ಸದ್ಯಕ್ಕೆ ಲಸಿಕೆ ನೀಡುವುದನ್ನು ಸ್ಥಗಿತಗೊಳಿಸಲಾಗಿದೆ ಎಂದು ಹೇಳಿದರು.

ಸಿಎಂ ನಿರ್ಧಾರವೇ ಅಂತಿಮ: ಲಾಕ್‌ಡೌನ್‌ ವಿಸ್ತರಣೆ ಕುರಿತು ಬಿ.ಎಸ್. ಯಡಿಯೂರಪ್ಪ ಅಂತಿಮ ನಿರ್ಧಾರ ಕೈಗೊಳ್ಳಲಿದ್ದಾರೆ ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದರು.

ಲಾಕ್‌ಡೌನ್‌ ಅನ್ನು ಇನ್ನೊಂದು ವಾರ ವಿಸ್ತರಿಸುವಂತೆ ಬಹುತೇಕ ಸಚಿವರು, ಜಿಲ್ಲಾಧಿಕಾರಿಗಳು ಮುಖ್ಯ ಮಂತ್ರಿಗೆ ಮನವಿ ಮಾಡಿದ್ದಾರೆ. ಯಡಿಯೂರಪ್ಪ ಅವರು ಶೀಘ್ರದಲ್ಲಿಯೇ ಈ ಕುರಿತು ನಿರ್ಧಾರ ಕೈಗೊಳ್ಳಲಿದ್ದಾರೆ ಎಂದರು.

ಶಾಸಕ ವೇದವ್ಯಾಸ ಕಾಮತ್, ಬಿಜೆಪಿ ಮುಖ್ಯ ವಕ್ತಾರ ಕ್ಯಾ. ಗಣೇಶ್ ಕಾರ್ಣಿಕ್, ಮುಡಾ ಅಧ್ಯಕ್ಷ ರವಿಶಂಕರ್ ಮಿಜಾರ್, ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಎಂ. ಸುದರ್ಶನ್‌ ಇದ್ದರು.

‘ಹೆಚ್ಚು ಹಣ ವಸೂಲಿ ಮಾಡಿದರೆ ಕ್ರಮ’

ಜಿಲ್ಲೆಯಲ್ಲಿ ಖಾಸಗಿ ಆಸ್ಪತ್ರೆಗಳಲ್ಲಿ ಕೋವಿಡ್–19 ರೋಗಿಗಳಿಗೆ ಹೆಚ್ಚಿನ ಶುಲ್ಕ ವಿಧಿಸಿದರೆ ಕ್ರಮ ಕೈಗೊಳ್ಳಲಾಗುವುದು ಎಂದು ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.

ಹೆಚ್ಚಿನ ಹಣ ವಸೂಲಿ ಮಾಡುತ್ತಿರುವ ಬಗ್ಗೆ ದೂರುಗಳು ಬರುತ್ತಿವೆ. ಈ ಸಮಸ್ಯೆ ಪರಿಹರಿಸಲು ಜಿಲ್ಲಾಧಿಕಾರಿ ನೇತೃತ್ವದಲ್ಲಿ ಸಮಿತಿ ರಚಿಸಲಾಗಿದೆ. ಜನರು ಸಮಸ್ಯೆಯನ್ನು ಸಮಿತಿಯ ಗಮನಕ್ಕೆ ತಂದಲ್ಲಿ ಸಮಿತಿಯು ಆಸ್ಪತ್ರೆಯ ಬಿಲ್‌ ಅನ್ನು ಕೂಲಂಕಷವಾಗಿ ಪರಿಶೀಲಿಸಲಿದ್ದು, ಸರ್ಕಾರ ನಿಗದಿಪಡಿಸಿದ ದರಕ್ಕಿಂತ ಹೆಚ್ಚಿನ ಹಣ ವಸೂಲಿ ಮಾಡಿದರೆ, ಕ್ರಮ ಕೈಗೊಳ್ಳಲಾಗುವುದು ಎಂದರು.

ಜನರು ಗಮನಕ್ಕೆ ತಂದ ಕೆಲವು ಪ್ರಕರಣಗಳಲ್ಲಿ ಆಸ್ಪತ್ರೆಯವರಿಂದ ಹೆಚ್ಚುವರಿ ಹಣವನ್ನು ವಾಪಸ್ ಕೊಡಿಸಲಾಗಿದೆ ಎಂದು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.