ADVERTISEMENT

ಉದ್ಯೋಗ ಮೇಳದ ಪ್ರಯೋಜನ ಪಡೆಯಿರಿ

​ಪ್ರಜಾವಾಣಿ ವಾರ್ತೆ
Published 7 ಫೆಬ್ರುವರಿ 2018, 6:44 IST
Last Updated 7 ಫೆಬ್ರುವರಿ 2018, 6:44 IST

ಮಂಗಳೂರು: ಮಂಗಳೂರು ವಿಶ್ವವಿದ್ಯಾಲಯದಲ್ಲಿ ಇದೇ 17ರಂದು ನಡೆಯುವ ಬೃಹತ್ ಉದ್ಯೋಗ ಮೇಳ ‘ದಿಶಾ ಉದ್ಯೋಗ ಪರ್ವ’ದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಉದ್ಯೋಗಾವಕಾಶಗಳು ಲಭ್ಯವಿದ್ದು, ಜಿಲ್ಲೆಯ ಯುವಜನತೆ ಇದರ ಪ್ರಯೋಜನ ಪಡೆದುಕೊಳ್ಳಬೇಕು ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿ ಡಾ.ಎಂ.ಆರ್. ರವಿ ಸಲಹೆ ನೀಡಿದರು. ಅವರು ಮಂಗಳವಾರ ತಮ್ಮ ಕಚೇರಿಯಲ್ಲಿ ನಡೆದ ಉದ್ಯೋಗ ಮೇಳ ಪ್ರಚಾರ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಈ ಉದ್ಯೋಗ ಮೇಳದಲ್ಲಿ ದೇಶ, ವಿದೇಶಗಳ ಸಾಕಷ್ಟು ಕಂಪನಿ ಗಳು ಭಾಗವಹಿಸಲಿವೆ. ಹೈಸ್ಕೂಲ್‌ ನಿಂದ ಸ್ನಾತಕೋತ್ತರ ಪದವಿ ಶಿಕ್ಷಣದವರೆಗೆ ಕಲಿತವರಿಗೆ, ಅವರ ಅರ್ಹತೆಗೆ ತಕ್ಕಂತೆ ಸಾವಿರಾರು ಉದ್ಯೋಗಗಳು ಲಭ್ಯವಾಗಲಿದೆ. ಈ ನಿಟ್ಟಿನಲ್ಲಿ ಈಗಾಗಲೇ ಅಭ್ಯರ್ಥಿಗಳ ನೋಂದಣಿ ಆರಂಭವಾಗಿದ್ದು, ಉದ್ಯೋಗಾಕಾಂಕ್ಷಿಗಳು ವೆಬ್‌ಸೈಟ್‌ mangaluruudyogamela.com ನಲ್ಲಿ ತಮ್ಮ ಹೆಸರು ನೋಂದಾಯಿಸಿಕೊಳ್ಳಬೇಕು. ಅರ್ಹತೆಗೆ ತಕ್ಕ ಉದ್ಯೋಗವನ್ನು ಪಡೆದುಕೊಳ್ಳಲು ಇದೊಂದು ಸದವಕಾಶ ಎಂದರು.

ಈ ಉದ್ಯೋಗ ಮೇಳದ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸಲು ವಿವಿಧ ರೀತಿ ಬಹು ಪ್ರಚಾರಾಂದೋಲನ ಹಮ್ಮಿಕೊಳ್ಳಬೇಕು. ವಿಶೇಷವಾಗಿ ಜಿಲ್ಲೆಯ ಗ್ರಾಮೀಣ ಪ್ರದೇಶಗಳಲ್ಲೂ ಹೆಚ್ಚು ಅರಿವು ಮೂಡಿಸಬೇಕು. ಇದಲ್ಲದೇ, ಕಾಲೇಜುಗಳು, ವಿವಿಧ ಯುವಕ ಮಂಡಲಗಳು, ಸ್ವಸಹಾಯ ಸಂಘಗಳು, ಹಾಲು ಉತ್ಪಾದಕರ ಸಂಘಗಳಿಗೂ ಉದ್ಯೋಗ ಮೇಳದ ಮಾಹಿತಿ ನೀಡುವಂತೆ ತಿಳಿಸಿದರು.

ADVERTISEMENT

ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಜಗನ್ನಾಥ ಶೆಟ್ಟಿ ಬಾಳ, ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ರೊನಾಲ್ಡ್ ಅನಿಲ್ ಫರ್ನಾಂಡಿಸ್, ಜಿಲ್ಲಾ ಪಂಚಾಯಿತಿ ಯೋಜನಾ ನಿರ್ದೇಶಕ ಲೋಕೇಶ್, ವಿವಿಧ ಇಲಾಖಾಧಿಕಾರಿಗಳು ಭಾಗವಹಿಸಿದ್ದರು. ಜಿಲ್ಲಾ ವಾರ್ತಾಧಿಕಾರಿ ಬಿ.ಎ. ಖಾದರ್ ಶಾ ಪ್ರಾಸ್ತಾವಿಕವಾಗಿ ಮಾತನಾಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.