ಮಂಗಳೂರು: ‘ಶಿಕ್ಷಣ ವ್ಯಾಪಾರೀಕರಣ ಆಗಿದೆ. ಖಾಸಗಿ ಶಿಕ್ಷಣ ಸಂಸ್ಥೆಗಳು ವಿದ್ಯಾರ್ಥಿಗಳ ಪೋಷಕರಿಂದ ಮನಬಂದಂತೆ ಶುಲ್ಕ ಪಡೆಯುತ್ತಿವೆ. ಇದನ್ನು ತಡೆಯಲು ಸರ್ಕಾರ ಖಾಸಗಿ ಶಾಲೆಗಳ ಶುಲ್ಕ ನಿಯಂತ್ರಣ ಪ್ರಾಧಿಕಾರ ರಚಿಸಬೇಕು’ ಎಂದು ಆಮ್ ಆದ್ಮಿ ಪಾರ್ಟಿಯ (ಎಎಪಿ) ದಕ್ಷಿಣ ಕನ್ನಡ ಜಿಲ್ಲಾ ಘಟಕವು ಆಗ್ರಹಿಸಿದೆ.
ಇಲ್ಲಿ ಸುದ್ದಿಗೋಷ್ಠಿಯಲ್ಲಿ ಶನಿವಾರ ಮಾತನಾಡಿದ ಎಎಪಿ ದಕ್ಷಿಣ ಕನ್ನಡ ಜಿಲ್ಲಾ ಘಟಕದ ಅಧ್ಯಕ್ಷ ಬಿ.ಕೆ.ವಿಶುಕುಮಾರ್, ‘ಕೆಲವು ಪ್ರದೇಶಗಳಲ್ಲಿ ಸರ್ಕಾರಿ ಶಾಲೆಗಳಲ್ಲಿ ಮೂಲಸೌಕರ್ಯ ಕೊರತೆ ಇದ್ದು, ಪೋಷಕರು ತಮ್ಮ ಮಕ್ಕಳನ್ನು ಅನಿವಾರ್ಯವಾಗಿ ಖಾಸಗಿ ಶಾಲೆಗೆ ಕಳುಹಿಸುತ್ತಿದ್ದಾರೆ. ಖಾಸಗಿ ಶಾಲೆಗಳು ಶುಲ್ಕವನ್ನು ಹೆಚ್ಚಳ ಮಾಡುವ ಬಗ್ಗೆ ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸಿವೆ. ಖಾಸಗಿ ಶಾಲೆಗಳ ಶುಲ್ಕವನ್ನು ನಿಗದಿಪಡಿಸಲು ಸರ್ಕಾರ ಸೂಕ್ತ ವ್ಯವಸ್ಥೆ ರೂಪಿಸಬೇಕು. ಶಾಲೆಗಳಿಂದ ವಾರ್ಷಿಕ ಲೆಕ್ಕಪರಿಶೋಧನಾ ವರದಿಯನ್ನು ಪಡೆದು, ಅದರ ಆಧಾರದಲ್ಲಿ ಶುಲ್ಕ ನಿಗದಿಗೆ ಒಪ್ಪಿಗೆ ನೀಡಬೇಕು. ಲಾಭದಲ್ಲಿರುವ ಶಾಲೆಗಳ ಶುಲ್ಕ ಹೆಚ್ಚಳಕ್ಕೆ ಅವಕಾಶ ನೀಡಬಾರದು’ ಎಂದು ಒತ್ತಾಯಿಸಿದರು.
‘ನವದೆಹಲಿಯಲ್ಲಿ ಖಾಸಗಿ ಶಾಲೆಗಳ ಶುಲ್ಕ ನಿಯಂತ್ರಣಕ್ಕೆ ಪ್ರಾಧಿಕಾರವನ್ನು ರಚಿಸಿದ್ದು, ಆ ವ್ಯವಸ್ಥೆ ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸುತ್ತಿದೆ. ಎಎಪಿ ನೇತೃತ್ವದ ಸರ್ಕಾರ ಅಲ್ಲಿನ ಸರ್ಕಾರಿ ಶಾಲೆಗಳಿಗೆ ಅತ್ಯುತ್ತಮ ಸೌಕರ್ಯಗಳನ್ನು ಕಲ್ಪಿಸಿ ಅಭಿವೃದ್ಧಿಪಡಿಸಿದೆ. ನಮ್ಮ ರಾಜ್ಯದಲ್ಲೂ ಸರ್ಕಾರಿ ಶಾಲೆಗಳನ್ನು ಬಲಪಡಿಸುವ ಅಗತ್ಯವಿದೆ. ಸರ್ಕಾರಿ ಶಾಲೆಗಳ ಸ್ಥಿತಿಗತಿ ಕುರಿತು ಪಕ್ಷವು ಅಧ್ಯಯನ ನಡೆಸುತ್ತಿದ್ದು, ಶೀಘ್ರವೇ ವರದಿ ಬಿಡುಗಡೆ ಮಾಡಲಿದೆ’ ಎಂದರು.
ಪಕ್ಷದ ಸಂಘಟನಾ ಕಾರ್ಯದರ್ಶಿ ಶನೋನ್ ಪಿಂಟೊ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕಲಂದರ್ ಎಲಿಮಲೆ ಹಾಗೂ ಜಿಲ್ಲಾ ಘಟಕದ ಕಾರ್ಯದರ್ಶಿ ಸೀಮ ಮಡಿವಾಳ ಸುದ್ದಿಗೋಷ್ಠಿಯಲ್ಲಿ ಭಾಗವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.