ADVERTISEMENT

ಮಂಗಳೂರು ವಿವಿ ವಿರುದ್ಧ ಎಬಿವಿಪಿ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 21 ಅಕ್ಟೋಬರ್ 2022, 11:40 IST
Last Updated 21 ಅಕ್ಟೋಬರ್ 2022, 11:40 IST
ಮಂಗಳೂರಲ್ಲಿ ಎಬಿವಿಪಿ ನೇತೃತ್ವದಲ್ಲಿ ವಿದ್ಯಾರ್ಥಿಗಳು ಶುಕ್ರವಾರ ಪ್ರತಿಭಟನೆ ನಡೆಸಿದರು
ಮಂಗಳೂರಲ್ಲಿ ಎಬಿವಿಪಿ ನೇತೃತ್ವದಲ್ಲಿ ವಿದ್ಯಾರ್ಥಿಗಳು ಶುಕ್ರವಾರ ಪ್ರತಿಭಟನೆ ನಡೆಸಿದರು   

ಮಂಗಳೂರು: ಮಂಗಳೂರು ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ಎದುರಿಸುತ್ತಿರುವ ಸಮಸ್ಯೆಗಳನ್ನು ಕೂಡಲೇ ಪರಿಹರಿಸುವಂತೆ ಒತ್ತಾಯಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್‌ ನೇತೃತ್ವದಲ್ಲಿ ಶುಕ್ರವಾರ ಇಲ್ಲಿಯ ಕ್ಲಾಕ್‌ ಟವರ್‌ ಬಳಿ ಪ್ರತಿಭಟನೆ ನಡೆಸಲಾಯಿತು.

ಯುಯುಸಿಎಂಎಸ್‌ ತಂತ್ರಾಂಶದ ಲೋಪದಿಂದಾಗಿ ಎನ್‌ಇಪಿ ಅಡಿ ಪ್ರಥಮ ವರ್ಷದ ಪದವಿ ಮುಗಿಸಿರುವ ವಿದ್ಯಾರ್ಥಿಗಳ ಮೌಲ್ಯಮಾಪನ ಮಾಡಿ, ಫಲಿತಾಂಶವನ್ನು ನೀಡದೆ ವಿದ್ಯಾರ್ಥಿಗಳು ಗೊಂದಲದಲ್ಲಿ ಶಿಕ್ಷಣವನ್ನು ಮುಂದುವರಿಸುವಂತೆ ಆಗಿದೆ ಎಂದು ಪ್ರತಿಭಟನಾಕಾರರು ದೂರಿದರು.

ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯವು ಸರಿಯಾದ ಸಮಯಕ್ಕೆ ಅಂಕಪಟ್ಟಿ ವಿತರಿಸುತ್ತಿಲ್ಲ. 2021ರಲ್ಲಿ ಅಂತಿಮ ವರ್ಷ ಪೂರೈಸಿದ ವಿದ್ಯಾರ್ಥಿಗಳಿಗೆ ಹಾಗೂ ಪ್ರಸ್ತುತ ವಿದ್ಯಾಭ್ಯಾಸ ನಡೆಸುತ್ತಿರುವ, ಬಿಕಾಂ ಹೊರತಾಗಿ ಬಹುತೇಕ ವಿದ್ಯಾರ್ಥಿಗಳಿಗೆ ಅಂಕಪಟ್ಟಿ ನೀಡಿಲ್ಲ. 2022 ಮಾಚ್‌ನಲ್ಲಿ ಮರು ಮೌಲ್ಯಮಾಪನಕ್ಕೆ ಶುಲ್ಕಪಾವತಿ ಮಾಡಿದ ವಿದ್ಯಾರ್ಥಿಗಳ ಉತ್ತರ ಪತ್ರಿಕೆಯ ಮೌಲ್ಯಮಾಪನವನ್ನು ವಿ.ವಿ ನಡೆಸಿಲ್ಲ. ವಿದ್ಯಾರ್ಥಿಗಳು ಏಳು ತಿಂಗಳುಗಳಿಂದ ಫಲಿತಾಂಶದ ನಿರೀಕ್ಷೆಯಲ್ಲಿದ್ದಾರೆ ಎಂದರು.

ADVERTISEMENT

ಮಂಗಳೂರು ವಿ.ವಿ ಯಿಂದ ದೂರ ಶಿಕ್ಷಣ ಪಡೆಯುತ್ತಿರುವ ವಿದ್ಯಾರ್ಥಿಗಳಿಗೆ ಫಲಿತಾಂಶವನ್ನು ನೀಡಿರುವುದಿಲ್ಲ. ಸ್ನಾತಕೋತ್ತರ ಶಿಕ್ಷಣ ಪಡೆಯುತ್ತಿರುವ ವಿದ್ಯಾರ್ಥಿಗಳಿಗೂ ಅಂಕಪಟ್ಟಿಗಳು ಸರಿಯಾಗಿ ದೊರೆಯುತ್ತಿಲ್ಲ. ಫಲಿತಾಂಶಗಳನ್ನು ವಿಳಂಬವಾಗಿ ನೀಡುತ್ತಿರುವುದು ವಿದ್ಯಾರ್ಥಿಗಳಿಗೆ ಸಮಸ್ಯೆಯಾಗಿದೆ ಎಂದು ಹೇಳಿದರು.

ಈ ಬಾರಿ ನಡೆದಿರುವ ಪರೀಕ್ಷೆಗಳ ಮೌಲ್ಯ ಮಾಪನವನ್ನು ನಡೆಸಿ ಕೂಡಲೇ ಫಲಿತಾಂಶ ನೀಡಬೇಕು. ಫಲಿತಾಂಶ ವಿಳಂಬವಾದಲ್ಲಿ ಸ್ನಾತಕೋತ್ತರ ಶಿಕ್ಷಣ ಪಡೆಯುವಲ್ಲಿ ವಿದ್ಯಾರ್ಥಿಗಳು ವಂಚಿತರಾಗಲಿದ್ದಾರೆ ಎಂದು ಆತಂಕ ವ್ಯಕ್ತಪಡಿಸಿದರು.

ವಿವಿಧ ಕಾಲೇಜುಗಳ ವಿದ್ಯಾರ್ಥಿಗಳು ಭಾಗವಹಿಸಿದ್ದರು. ಹೋರಾಟದ ನೇತೃತ್ವವನ್ನು ಎಬಿವಿಪಿ ರಾಜ ಕಾರ್ಯದರ್ಶಿ ಮಣಿಕಂಠ ಕಳಸ ವಹಿಸಿದ್ದರು. ಶ್ರೇಯಸ್ ಶೆಟ್ಟಿ, ನಿಶಾನ್ ಆಳ್ವ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.