ADVERTISEMENT

ಕಾಲೇಜು ಶುಲ್ಕ ಹೆಚ್ಚಿಸಬೇಡಿ: ಮಂಗಳೂರು ವಿ.ವಿ ಕುಲಪತಿಗೆ ಎಬಿವಿಪಿ ಮನವಿ

​ಪ್ರಜಾವಾಣಿ ವಾರ್ತೆ
Published 20 ಮೇ 2020, 14:15 IST
Last Updated 20 ಮೇ 2020, 14:15 IST
ಎಬಿವಿಪಿ ನಿಯೋಗದಿಂದ ಮಂಗಳೂರು ವಿಶ್ವವಿದ್ಯಾಲಯದ ಕುಲಪತಿ ಡಾ.ಪಿ.ಎಸ್. ಯಡಪಡಿತ್ತಾಯ ಅವರಿಗೆ ಬುಧವಾರ ಮನವಿ ಸಲ್ಲಿಸಲಾಯಿತು
ಎಬಿವಿಪಿ ನಿಯೋಗದಿಂದ ಮಂಗಳೂರು ವಿಶ್ವವಿದ್ಯಾಲಯದ ಕುಲಪತಿ ಡಾ.ಪಿ.ಎಸ್. ಯಡಪಡಿತ್ತಾಯ ಅವರಿಗೆ ಬುಧವಾರ ಮನವಿ ಸಲ್ಲಿಸಲಾಯಿತು   

ಮಂಗಳೂರು: ಲಾಕ್‌ಡೌನ್ ಮುಗಿದ ಬಳಿಕ ವಿದ್ಯಾರ್ಥಿಗಳಿಗೆ ಸರಿಯಾದ ಶಿಕ್ಷಣದ ವಾತಾವರಣವನ್ನು ನಿರ್ಮಾಣ ಮಾಡುವ ಕುರಿತು ಮಂಗಳೂರು ವಿಶ್ವವಿದ್ಯಾಲಯದ ಕುಲಪತಿ ಡಾ.ಪಿ.ಎಸ್. ಯಡಪಡಿತ್ತಾಯ ಹಾಗೂ ಕುಲಸಚಿವ ರಾಜು ಮೊಗವೀರ ಅವರಿಗೆ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಮಂಗಳೂರು ವಿಭಾಗ ವತಿಯಿಂದ ಬುಧವಾರ ಮನವಿ ಸಲ್ಲಿಸಲಾಯಿತು.

ಮಂಗಳೂರು ವಿಶ್ವವಿದ್ಯಾಲಯದ ವ್ಯಾಪ್ತಿಯಲ್ಲಿ ಬರುವ ವಿದ್ಯಾರ್ಥಿಗಳಿಗೆ ಆನ್‌ಲೈನ್ ತರಗತಿಗಳನ್ನು ನಡೆಸಲಾಗುತ್ತಿದೆ. ಆದರೆ, ಗ್ರಾಮೀಣ ಭಾಗದ ಹಾಗೂ ನೆಟ್‌ವರ್ಕ್ ರಹಿತ ಪ್ರದೇಶದಲ್ಲಿರುವ ವಿದ್ಯಾರ್ಥಿಗಳಿಗೆ ಇದರಿಂದ ಅನಾನುಕೂಲವಾಗಿದೆ. ಹಾಗಾಗಿ ಆನ್‌ಲೈನ್ ತರಗತಿ ನಡೆಸಿದರೂ, ಲಾಕ್‌ಡೌನ್ ನಂತರ 20 ರಿಂದ 25 ದಿನಗಳ ಕಾಲ ಪುನರಾವರ್ತನ ತರಗತಿಗಳನ್ನು ನಡೆಸಬೇಕು ಎಂದು ಸಲಹೆ ನೀಡಿದೆ.

ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಆದಷ್ಟು ಬೇಗ ಪರೀಕ್ಷೆಗಳನ್ನು ನಡೆಸಿ, ಸರಿಯಾದ ಫಲಿತಾಂಶ ನೀಡಬೇಕು. ವಿಶ್ವವಿದ್ಯಾಲಯ ವ್ಯಾಪ್ತಿಯ ಯಾವುದೇ ಕಾಲೇಜುಗಳು ಮುಂದಿನ ಶೈಕ್ಷಣಿಕ ವರ್ಷದ ಶುಲ್ಕ ಹೆಚ್ಚಿಸದಂತೆ ಆದೇಶ ಹೊರಡಿಸಬೇಕು ಎಂದು ಒತ್ತಾಯಿಸಿದೆ.

ADVERTISEMENT

ನಿಯೋಗದಲ್ಲಿ ಎಬಿವಿಪಿ ಮಂಗಳೂರು ವಿಭಾಗ ಸಂಚಾಲಕ ಆಶೀಶ್ ಅಜ್ಜಿಬೆಟ್ಟು, ರಾಜ್ಯ ಕಾರ್ಯಕಾರಿಣಿ ಸದಸ್ಯ ನಿಶಾನ್ ಆಳ್ವ, ತಾಲ್ಲೂಕು ಸಂಚಾಲಕ ಹರ್ಷಿತ್ ಕೊಯಿಲ, ನಗರ ಸಹ ಕಾರ್ಯದರ್ಶಿ ನಾಗರಾಜ್ ಹಾಗೂ ಸರ್ವಕಾಲೇಜು ವಿದ್ಯಾರ್ಥಿ ಸಂಘದ ಪ್ರತಿನಿಧಿ ಸಂಜನ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.