ಮೂಡುಬಿದಿರೆ (ದಕ್ಷಿಣ ಕನ್ನಡ): ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಆಶ್ರಯದಲ್ಲಿ ನಡೆಯುತ್ತಿರುವ ಆಳ್ವಾಸ್ ಕನ್ನಡ ಮಾಧ್ಯಮ ಶಾಲೆಯ ಪ್ರವೇಶ ಪರೀಕ್ಷೆಯು ಇದೇ 2ರಂದು ಭಾನುವಾರ ಸಂಸ್ಥೆಯ ವಿದ್ಯಾಗಿರಿ ಹಾಗೂ ಪುತ್ತಿಗೆ ಶಾಲಾ ಆವರಣದ 5ಕೇಂದ್ರಗಳಲ್ಲಿ ನಡೆಯಲಿದೆ.
ಈ ವರೆಗೆ ರಾಜ್ಯದ ವಿವಿಧ ಜಿಲ್ಲೆಗಳಿಂದ ಒಟ್ಟು 20,134 ಅರ್ಜಿಗಳು ಸ್ವೀಕೃತವಾಗಿವೆ. ಎರಡೂವರೆ ಗಂಟೆ ಅವಧಿಯ, 150 ಅಂಕಗಳ ಪರೀಕ್ಷೆಯನ್ನು ವಿದ್ಯಾರ್ಥಿಗಳು ಎದುರಿಸಲಿದ್ದಾರೆ. ಆಯ್ಕೆಯಾದ ವಿದ್ಯಾರ್ಥಿಗಳು 6ನೇ ತರಗತಿಯಿಂದ 10ನೇ ತರಗತಿ ವರೆಗಿನ ಶಿಕ್ಷಣವನ್ನು ಉಚಿತವಾಗಿ ಊಟ, ವಸತಿ ಹಾಗೂ ಇನ್ನಿತರ ಸೌಲಭ್ಯಗಳೊಂದಿಗೆ ಪಡೆಯಲಿದ್ದಾರೆ.
‘ಸರ್ಕಾರದ ಹೆಚ್ಚಿನ ಕನ್ನಡ ಮಾಧ್ಯಮ ಶಾಲೆಗಳು ವಿದ್ಯಾರ್ಥಿಗಳಿಲ್ಲದೆ ಮುಚ್ಚುವ ಅಥವಾ ಶಾಲೆಗಳನ್ನು ವಿಲೀನಗೊಳಿಸುವ ಪರಿಸ್ಥಿತಿ ಇದೆ. ನಮ್ಮ ಕನ್ನಡ ಮಾಧ್ಯಮ ಶಾಲೆಯ ಪ್ರವೇಶಕ್ಕೆ ಸ್ವೀಕೃತಗೊಂಡಿರುವ ಅರ್ಜಿಗಳ ಸಂಖ್ಯೆ ಗಮನಿಸಿದರೆ, ಗುಣಮಟ್ಟದ ಶಿಕ್ಷಣ ನೀಡಿದರೆ ಖಂಡಿತವಾಗಿಯೂ ಕನ್ನಡ ಮಾಧ್ಯಮಕ್ಕೂ ವಿದ್ಯಾರ್ಥಿಗಳ ಕೊರತೆ ಎದುರಾಗದು. ಅದನ್ನು ನಮ್ಮ ಆಳ್ವಾಸ್ ಸಂಸ್ಥೆ ಸಾಬೀತುಪಡಿಸಿದೆ’ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ. ಮೋಹನ ಆಳ್ವ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.