
ಸುಬ್ರಹ್ಮಣ್ಯ: ಸಾವಿರಾರು ವಿದ್ಯಾರ್ಥಿಗಳಿಗೆ ಶಿಕ್ಷಣ ನೀಡಿದ ಪಂಜ ಸರ್ಕರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗಕ್ಕೆ 75 ವರ್ಷ ತುಂಬಿದ್ದು, ಈ ಸಂಬಂಧ ಅಮೃತ ಪಥ ಸಮಾರಂಭದ ಆಚರಣೆಗೆ ಸಿದ್ಧತೆ ನಡೆದಿದೆ. ಡಿ.28ರಂದು ಕಾರ್ಯಕ್ರಮ ನಡೆಯಲಿದೆ ಎಂದು ಅಮೃತಪಥ ಸಮಿತಿ ಅಧ್ಯಕ್ಷ ಜಾಕೆ ಮಾಧವ ಗೌಡ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಹಿರಿಯ ವಿದ್ಯಾರ್ಥಿ, ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಕಾರ್ಯಕ್ರಮ ಉದ್ಘಾಟಿಸುವರು. ರಾಜ್ಯ ಸರ್ಕಾರದ ಕನಿಷ್ಠ ವೇತನ ಸಲಹಾ ಮಂಡಳಿ ಅಧ್ಯಕ್ಷ ಟಿ.ಎಂ.ಶಹೀದ್ ಸಾಕ್ಷ್ಯಚಿತ್ರ ಬಿಡುಗಡೆಗೊಳಿಸುವರು. ಅಮೃತ ಪಥ ಸಮಿತಿ ಅಧ್ಯಕ್ಷ ಜಾಕೆ ಮಾಧವ ಗೌಡ ಅಧ್ಯಕ್ಷತೆ ವಹಿಸುವರು. ಬಳಿಕ ಹಿರಿಯ ವಿದ್ಯಾರ್ಥಿಗಳ ಸಮ್ಮಿಲನ ನಡೆಯಲಿದೆ. ಸಾಹಿತಿ ಸುಬ್ರಾಯ ಚೊಕ್ಕಾಡಿ ಆಶಯ ಮಾತನಾಡಲಿದ್ದು, ಅಮೃತ ಪಥ ಸಮಿತಿ ಪ್ರಧಾನ ಕಾರ್ಯದರ್ಶಿ ಸವಿತಾರ ಮುಡೂರು ಅಧ್ಯಕ್ಷತೆ ವಹಿಸುವರು. ಹಿರಿಯ ವಿದ್ಯಾರ್ಥಿಗಳ ಮುಕ್ತ ಸಂವಾದ ನಡೆಯಲಿದ್ದು, ಸಮನ್ವಯಕಾರರಾಗಿ ಪತ್ರಕರ್ತ ದುರ್ಗಾಕುಮಾರ್ ನಾಯರ್ ಕೆರೆ ಪಾಲ್ಗೊಳ್ಳಲಿದ್ದಾರೆ ಎಂದರು.
ವಿಜ್ಞಾನ ಕ್ಷೇತ್ರದ ಸಾಧನೆಗಾಗಿ ಪದ್ಮಶ್ರೀ ಪಡೆದ ರಾಮಮೂರ್ತಿ ಬೆಳಗಜೆ, ಅವರ ಸಹೋದರ ಕೃಷ್ಣಮೂರ್ತಿ ಬೆಳಗಜೆ, ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪುರುಷೋತ್ತಮ ಬಿಳಿಮಲೆ, ವಕೀಲ ಬಾಲಕೃಷ್ಣ ಶಾಸ್ತ್ರಿ ಗಟ್ಟಿಗಾರು ಸೇರಿದಂತೆ ವಿವಿಧ ಕ್ಷೇತ್ರಗಳ ಸಾಧಕರು ಈ ಸಂಸ್ಥೆಯ ಹಿರಿಯ ವಿದ್ಯಾರ್ಥಿಗಳಾಗಿದ್ದಾರೆ ಎಂದು ಮಾಧವ ಗೌಡ ಹೇಳಿದರು.
ಅಮೃತ ಪಥ ಸಮಿತಿ ಪ್ರಧಾನ ಕಾರ್ಯದರ್ಶಿ ಸವಿತಾರ ಮುಡೂರು, ಕೋಶಾಧಿಕಾರಿ ಜಯರಾಮ ಕಂಬಳ, ಪ್ರಚಾರ ಸಮಿತಿ ಸಂಚಾಲಕ ಮಧು ಪಂಜ ಭಾಗವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.