ADVERTISEMENT

ಬೀಳು ಬಿಟ್ಟ ಜಮೀನು ಸಮೀಕ್ಷೆಗೆ ಕೃಷಿ ಸಚಿವ ಬಿ.ಸಿ.ಪಾಟೀಲ್‌ ಸೂಚನೆ

​ಪ್ರಜಾವಾಣಿ ವಾರ್ತೆ
Published 5 ಮೇ 2020, 16:05 IST
Last Updated 5 ಮೇ 2020, 16:05 IST
ಕೃಷಿ ಸಚಿವ ಬಿ.ಸಿ.ಪಾಟೀಲ್‌ ಅವರು ಮಂಗಳವಾರ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕಚೇರಿಯಲ್ಲಿ ಕೃಷಿ ಇಲಾಖೆಯ ಪ್ರಗತಿ ಪರಿಶೀಲನೆ ಸಭೆ ನಡೆಸಿದರು. ಜಿಲ್ಲಾಧಿಕಾರಿ ಸಿಂಧೂ ಬಿ.ರೂಪೇಶ್‌, ಸಂಸದ ನಳಿನ್‌ ಕುಮಾರ್‌ ಕಟೀಲ್‌, ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿ ಡಾ.ಆರ್‌.ಸೆಲ್ವಮಣಿ ಇದ್ದರು– ಪ್ರಜಾವಾಣಿ ಚಿತ್ರ
ಕೃಷಿ ಸಚಿವ ಬಿ.ಸಿ.ಪಾಟೀಲ್‌ ಅವರು ಮಂಗಳವಾರ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕಚೇರಿಯಲ್ಲಿ ಕೃಷಿ ಇಲಾಖೆಯ ಪ್ರಗತಿ ಪರಿಶೀಲನೆ ಸಭೆ ನಡೆಸಿದರು. ಜಿಲ್ಲಾಧಿಕಾರಿ ಸಿಂಧೂ ಬಿ.ರೂಪೇಶ್‌, ಸಂಸದ ನಳಿನ್‌ ಕುಮಾರ್‌ ಕಟೀಲ್‌, ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿ ಡಾ.ಆರ್‌.ಸೆಲ್ವಮಣಿ ಇದ್ದರು– ಪ್ರಜಾವಾಣಿ ಚಿತ್ರ   

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯವಸಾಯ ಮಾಡದೇ ಬೀಳು ಬಿಟ್ಟಿರುವ ಎಲ್ಲ ಜಮೀನುಗಳ ಸಮೀಕ್ಷೆ ನಡೆಸಿ, ವರದಿ ಸಲ್ಲಿಸುವಂತೆ ಕೃಷಿ ಇಲಾಖೆಯ ಅಧಿಕಾರಿಗಳಿಗೆ ಕೃಷಿ ಸಚಿವ ಬಿ.ಸಿ.ಪಾಟೀಲ್‌ ಸೂಚನೆ ನೀಡಿದರು.

ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಂಗಳವಾರ ಕೃಷಿ ಇಲಾಖೆಯ ಪ್ರಗತಿ ಪರಿಶೀಲನೆ ನಡೆಸಿದ ಅವರು, ಜಿಲ್ಲೆಯಲ್ಲಿನ ಕೃಷಿ ಚಟುವಟಿಕೆಯ ಕುರಿತು ಮಾಹಿತಿ ಪಡೆದರು. ಜಿಲ್ಲೆಯಲ್ಲಿ ಹಲವು ರೈತರು ಜಮೀನನ್ನು ಬೀಳು ಬಿಟ್ಟಿದ್ದು, ಅವರಿಗೂ ರೈತಪರ ಯೋಜನೆಗಳ ಅನುಕೂಲ ದೊರೆಯುತ್ತಿದೆ ಎಂದು ಸಂಸದ ನಳಿನ್‌ ಕುಮಾರ್‌ ಕಟೀಲ್‌ ಮತ್ತು ಬಂಟ್ವಾಳ ಶಾಸಕ ರಾಜೇಶ್‌ ನಾಯ್ಕ್‌ ಆಕ್ಷೇಪ ವ್ಯಕ್ತಪಡಿಸಿದರು. ಪ್ರಧಾನಮಂತ್ರಿ ಕಿಸಾನ್‌ ಸಮ್ಮಾನ್‌ ಯೋಜನೆಯಲ್ಲೂ ಅಂತಹ ರೈತರು ಹಣ ಪಡೆದಿರುವುದಾಗಿ ದೂರಿದರು.

ಈ ಕುರಿತು ಪ್ರತಿಕ್ರಿಯಿಸಿದ ಸಚಿವರು, ‘ಬೇಸಾಯ ಮಾಡದೇ ಜಮೀನನ್ನು ಪಾಳು ಬಿಟ್ಟವರಿಗೂ ಸರ್ಕಾರದ ಸೌಲಭ್ಯ ನೀಡುವುದು ಸರಿಯಲ್ಲ. ಜಿಲ್ಲೆಯಲ್ಲಿ ಹೆಚ್ಚಿನ ಪ್ರಮಾಣದ ಜಮೀನನ್ನು ಬೀಳು ಬಿಡಲಾಗಿದೆ ಎಂಬ ಮಾಹಿತಿ ಇದೆ. ಈ ಕುರಿತು ಸಮಗ್ರ ಸಮೀಕ್ಷೆ ನಡೆಸಬೇಕು. ಜಮೀನು ಬೀಳು ಬಿಟ್ಟವರಿಗೆ ಸರ್ಕಾರದ ಸೌಲಭ್ಯಗಳನ್ನು ನೀಡಬಾರದು. ಅಂತಹ ಜಮೀನುಗಳಲ್ಲಿ ಕೃಷಿ ಚಟುವಟಿಕೆ ಪುನರಾರಂಭಕ್ಕೆ ಕ್ರಮ ಕೈಗೊಳ್ಳಬೇಕು’ ಎಂದು ಸೂಚನೆ ನೀಡಿದರು.

ADVERTISEMENT

ದಾಸ್ತಾನು ಪರಿಶೀಲಿಸಿ

‘ಕೃಷಿ ಮತ್ತು ತೋಟಗಾರಿಕೆ ಬೆಳೆಗಳಿಗೆ ಅಗತ್ಯವಿರುವ ರಸಗೊಬ್ಬರ, ಔಷಧಿಗಳ ಕೊರತೆ ಉಂಟಾಗಿದೆ. ವ್ಯಾಪಾರಿಗಳು ಕೃತಕ ಕೊರತೆ ಸೃಷ್ಟಿಸಿ, ದುಬಾರಿ ದರ ಕೇಳುತ್ತಿದ್ದಾರೆ. ಅಡಿಕೆ ಕೊಳೆರೋಗ ನಿಯಂತ್ರಣಕ್ಕೆ ಅಗತ್ಯವಾಗಿರುವ ಮೈಲುತುತ್ತ ಮಾರುಕಟ್ಟೆಯಲ್ಲಿ ಲಭ್ಯವಿಲ್ಲ’ ಎಂದು ಸಭೆಯಲ್ಲಿದ್ದ ಕೆಲವು ರೈತರು ದೂರಿದರು.

ರಸಗೊಬ್ಬರ ಮತ್ತು ಕೃಷಿ ಸಂಬಂಧಿ ಔಷಧಿ ವಿತರಕರ ಉಗ್ರಾಣಗಳಿಗೆ ಭೇಟಿನೀಡಿ, ದಾಸ್ತಾನು ಪರಿಶೀಲಿಸಬೇಕು. ಅಕ್ರಮ ದಾಸ್ತಾನು ಮಾಡಿದ್ದರೆ ಕ್ರಮ ಜರುಗಿಸಬೇಕು. ನೇರವಾಗಿ ಉತ್ಪಾದಕ ಕಂಪನಿಗಳ ಜೊತೆ ಮಾತುಕತೆ ನಡೆಸಿ, ಜಿಲ್ಲೆಗೆ ಅಗತ್ಯವಿರುವ ಔಷಧಿ ಮತ್ತು ರಸಗೊಬ್ಬರ ಪೂರೈಕೆಗೆ ವ್ಯವಸ್ಥೆ ಮಾಡಬೇಕು ಎಂದು ಕೃಷಿ ಮತ್ತು ತೋಟಗಾರಿಕೆ ಇಲಾಖೆ ಅಧಿಕಾರಿಗಳಿಗೆ ಬಿ.ಸಿ.ಪಾಟೀಲ್‌ ನಿರ್ದೇಶನ ನೀಡಿದರು.

ಕೃಷಿ ವಿಸ್ತರಣೆಗೆ ಕ್ರಮ

ಸಭೆಯ ಬಳಿಕ ಪತ್ರಕರ್ತರ ಜೊತೆ ಮಾತನಾಡಿದ ಸಚಿವರು, ‘ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೃಷಿ ಚಟುವಟಿಕೆ ಗಣನೀಯವಾಗಿ ಕುಸಿದಿದೆ. ಬೀಳು ಬಿಟ್ಟಿರುವ ಜಮೀನುಗಳಲ್ಲಿ ಕೃಷಿ ಚಟುವಟಿಕೆ ಆರಂಭಕ್ಕೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು. ಸಹಕಾರಿ ಪದ್ಧತಿಯಡಿ ಕೃಷಿ ನಡೆಸಲು ಅನುಮತಿ ನೀಡಬೇಕೆಂಬ ಬೇಡಿಕೆ ಇದೆ. ಈ ಬಗ್ಗೆ ಪರಿಶೀಲಿಸಿ ಕ್ರಮ ಕೈಗೊಳ್ಳಲಾಗುವುದು’ ಎಂದರು.

ಜಿಲ್ಲೆಯಲ್ಲಿ ಕೃಷಿ ಬಳಕೆಯ ಯಂತ್ರೋಪಕರಣಗಳನ್ನು ಹೆಚ್ಚಿನ ರೈತರಿಗೆ ಒದಗಿಸಲಾಗುವುದು. ಬಿತ್ತನೆ ಬೀಜ, ರಸಗೊಬ್ಬರ, ಔಷಧಿ ಸೇರಿದಂತೆ ಅಗತ್ಯವಿರುವ ಎಲ್ಲ ವಸ್ತುಗಳನ್ನು ಬೇಡಿಕೆ ಇರುವಷ್ಟು ಪೂರೈಸಲಾಗುವುದು. ಕೃಷಿ ಚಟುವಟಿಕೆಗೆ ಯಾವುದೇ ರೀತಿಯ ಕೊರತೆ ಆಗದಂತೆ ಎಚ್ಚರಿಕೆ ವಹಿಸಲಾಗುವುದು ಎಂದರು.

ಶಾಸಕರಾದ ಉಮಾನಾಥ ಕೋಟ್ಯಾನ್‌, ಹರೀಶ್‌ ಪೂಂಜ, ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು, ಉಪಾಧ್ಯಕ್ಷೆ ಕಸ್ತೂರಿ ಪಂಜ, ಜಿಲ್ಲಾಧಿಕಾರಿ ಸಿಂಧೂ ಬಿ.ರೂಪೇಶ್‌, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿ ಡಾ.ಆರ್‌.ಸೆಲ್ವಮಣಿ ಸಭೆಯಲ್ಲಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.