ADVERTISEMENT

ಬಾಲ್ ಬ್ಯಾಡ್ಮಿಂಟನ್ ಚಾಂಪಿಯನ್‌ಷಿಪ್‌ಗೆ ಅದ್ದೂರಿ ಚಾಲನೆ

ಉಪ್ಪಿನಂಗಡಿ: ಗ್ರಾಮೀಣ ಕ್ರೀಡೆಗಳ ಉಳಿಸಿ ಬೆಳೆಸುವಂತೆ ಶಾಸಕ ಸಂಜೀವ ಮಠಂದೂರು ಸಲಹೆ

​ಪ್ರಜಾವಾಣಿ ವಾರ್ತೆ
Published 13 ಜನವರಿ 2023, 15:44 IST
Last Updated 13 ಜನವರಿ 2023, 15:44 IST
ಪುರುಷರ ಅಖಿಲ ಭಾರತ ಅಂತರ ವಿಶ್ವವಿದ್ಯಾನಿಲಯ ಬಾಲ್ ಬ್ಯಾಡ್ಮಿಂಟನ್ ಚಾಂಪಿಯನ್‌ಷಿಪ್‌ಗೆ ಉಪ್ಪಿನಂಗಡಿಯಲ್ಲಿ ಶಾಸಕ ಸಂಜೀವ ಮಠಂದೂರು ಚಾಲನೆ ನೀಡಿದರು
ಪುರುಷರ ಅಖಿಲ ಭಾರತ ಅಂತರ ವಿಶ್ವವಿದ್ಯಾನಿಲಯ ಬಾಲ್ ಬ್ಯಾಡ್ಮಿಂಟನ್ ಚಾಂಪಿಯನ್‌ಷಿಪ್‌ಗೆ ಉಪ್ಪಿನಂಗಡಿಯಲ್ಲಿ ಶಾಸಕ ಸಂಜೀವ ಮಠಂದೂರು ಚಾಲನೆ ನೀಡಿದರು   

ಉಪ್ಪಿನಂಗಡಿ: ಇಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಶನಿವಾರದಿಂದ 17ರ ವರೆಗೆ ನಡೆಯಲಿರುವ ಪುರುಷರ ಅಖಿಲ ಭಾರತ ಅಂತರ ವಿಶ್ವವಿದ್ಯಾನಿಲಯ ಬಾಲ್ ಬ್ಯಾಡ್ಮಿಂಟನ್ ಚಾಂಪಿಯನ್‌ಷಿಪ್‌ಗೆ ಶುಕ್ರವಾರ ಸಂಜೆ ಅದ್ದೂರಿಯಾಗಿ ಚಾಲನೆ ನೀಡಲಾಯಿತು.

ರಾಷ್ಟ್ರಧ್ವಜದ ಬಣ್ಣಗಳನ್ನು ಹೊಂದಿರುವ ಬಲೂನುಗಳನ್ನು ಹಾರಿಬಿಡುವ ಮೂಲಕ ಕಾಲೇಜು ಅಭಿವೃದ್ಧಿ ಸಮಿತಿ ಕಾರ್ಯಾಧ್ಯಕ್ಷರೂ ಆಗಿರುವ ಶಾಸಕ ಸಂಜೀವ ಮಠಂದೂರು ಚಾಂಪಿಯನ್‌ಷಿಪ್‌ಗೆ ಚಾಲನೆ ನೀಡಿದರು.

ನಂತರ ಮಾತನಾಡಿದ ಅವರು ಬಾಲ್ ಬ್ಯಾಡ್ಮಿಂಟನ್, ತಮಿಳುನಾಡಿನ ತಂಜಾವೂರು ಶ್ರೀಮಂತ ಮನೆತನದಲ್ಲಿ ಆರಂಭಗೊಂಡ ಗ್ರಾಮೀಣ ಕ್ರೀಡೆಯಾಗಿದೆ. ದೇಶದ ಗ್ರಾಮೀಣ ಕ್ರೀಡೆಗಳನ್ನು ಉಳಿಸಿ ಬೆಳೆಸಬೇಕು ಎಂದರು.

ADVERTISEMENT

ಮಂಗಳೂರು ವಿಶ್ವವಿದ್ಯಾನಿಲಯದ ರಿಜಿಸ್ಟ್ರಾರ್ ಡಾ.ಕಿಶೋರ್ ಕುಮಾರ್ ಸಿ.ಕೆ. ಮಾತನಾಡಿ ಬೋಧನೆ ಹಾಗೂ ಕ್ರೀಡಾ ಚಟುವಟಿಕೆಗಳಲ್ಲಿ ಮಂಗಳೂರು ವಿವಿ ಉತ್ತಮವಾಗಿ ತೊಡಗಿಸಿಕೊಂಡಿದ್ದು, ಕ್ರೀಡಾಳುಗಳಿಗೆ ಪ್ರೋತ್ಸಾಹ, ಸಹಕಾರ ಹಾಗೂ ಮೂಲ ಸೌಕರ್ಯ ಒದಗಿಸುವಲ್ಲಿ ಮುಂದೆ ಇದೆ ಎಂದರು.

ಏಕಲವ್ಯ ಪ್ರಶಸ್ತಿ ಪುರಸ್ಕೃತ ಮುಹಮ್ಮದ್ ಇಲ್ಯಾಸ್, ಉಪ್ಪಿನಂಗಡಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಉಷಾಚಂದ್ರ ಮುಳಿಯ ಇದ್ದರು. ಮಂಗಳೂರು ವಿವಿ ದೈಹಿಕ ಶಿಕ್ಷಣ ವಿಭಾಗದ ನಿರ್ದೇಶಕ ಜೆರಾಲ್ಡ್ ಎಸ್‌.ಡಿ ಸೋಜ ಸ್ವಾಗತಿಸಿದರು. ಉಪ್ಪಿನಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಚಾರ್ಯ ಪ್ರೊ.ಸುಬ್ಬಪ್ಪ ಕೈಕಂಬ ವಂದಿಸಿದರು. ಕ್ರೀಡಾಪಟು ಮುತ್ತುಮಿಲ್ ಪ್ರತಿಜ್ಞಾ ವಿಧಿ ಬೋಧಿಸಿದರು. ಆಳ್ವಾಸ್ ಕಾಲೇಜಿನ ರಾಜೇಶ್ ಹಾಗೂ ಇಂಡಿಯನ್ ಓವರ್ಸೀಸ್ ಬ್ಯಾಂಕ್‌ನ ಮುತ್ತು ನಿರೂಪಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.