ಮಹೇಶ್ ಶೆಟ್ಟಿ ತಿಮರೋಡಿ
ಬೆಳ್ತಂಗಡಿ (ದಕ್ಷಿಣ ಕನ್ನಡ): ಬಂಧಿಸಲು ಬಂದ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪಕ್ಕೆ ಸಂಬಂಧಿಸಿದಂತೆ ಸೌಜನ್ಯಾ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಅವರು ವಿಚಾರಣೆಗಾಗಿ ಶುಕ್ರವಾರ ಬೆಳ್ತಂಗಡಿ ಠಾಣೆಗೆ ಹಾಜರಾದರು.
ಬಿಜೆಪಿಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್ ಸಂತೋಷ್ ಅವರ ವಿರುದ್ಧ ಸಾಮಾಜಿಕ ಮಾಧ್ಯಮಗಳಲ್ಲಿ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂಬ ಆರೋಪದ ಮೇಲೆ ಉಡುಪಿ ಜಿಲ್ಲೆಯ ಬ್ರಹ್ಮಾವರ ಠಾಣೆ ಪೊಲೀಸರು ಮಹೇಶ್ ಶೆಟ್ಟಿ ಅವರನ್ನು ಬಂಧಿಸಲು ಆ.21ರಂದು ತಿಮರೋಡಿಗೆ ಬಂದಿದ್ದ ವೇಳೆ ಕರ್ತವ್ಯಕ್ಕೆ ಅಡ್ಡಿಪಡಿಸಲಾಗಿತ್ತು ಎಂದು ದೂರಿ ಹಲವರ ವಿರುದ್ಧ ಪ್ರಕರಣ ದಾಖಲಾಗಿತ್ತು. ಮಹೇಶ್ ಶೆಟ್ಟಿ ಈ ಪ್ರಕರಣದ ಮೂರನೇ ಆರೋಪಿ.
ಶುಕ್ರವಾರ ಬೆಳಿಗ್ಗೆ ಠಾಣೆಗೆ ಹಾಜರಾದ ಮಹೇಶ್ ಶೆಟ್ಟಿ ಅವರ ಹೇಳಿಕೆಯನ್ನು ದಾಖಲಿಸಿಕೊಳ್ಳಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಧರ್ಮಸ್ಥಳ ಗ್ರಾಮದಲ್ಲಿ ನಡೆದಿದೆ ಎನ್ನಲಾದ ಅಸಹಜ ಸಾವಿಗೆ ಸಂಬಂಧಿಸಿದ ಶವಗಳನ್ನು ಹೂತು ಹಾಕಿರುವುದಾಗಿ ಹೇಳಿರುವ ವ್ಯಕ್ತಿಗೆ ಆಶ್ರಯ ನೀಡಿದ್ದಾರೆ ಎಂಬ ಆರೋಪದಲ್ಲಿ ಮಹೇಶ್ ಶೆಟ್ಟಿ ತಿಮರೋಡಿ ಅವರು ಎಸ್‌ಐಟಿ ಠಾಣೆಗೂ ಶುಕ್ರವಾರ ಹಾಜರಾಗಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿ ಹಾಜರಾಗುವಂತೆ ತಿಮರೋಡಿ ಅವರಿಗೆ ಎಸ್‌ಐಟಿ ನೋಟಿಸ್ ನೀಡಿತ್ತು. ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ವಿಚಾರಣೆ ಮುಗಿದ ನಂತರ ಅವರು ಎಸ್‌ಐಟಿ ಕಚೇರಿಗೆ ಹಾಜರಾದರು ಎಂದು ತಿಳಿದು ಬಂದಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.