ಮಂಗಳೂರು: ರಾಹುಲ್ ಗಾಂಧಿ ಕುರಿತು ಪ್ರಚೊದನಾಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ದಾಖಲಾದ ಪ್ರಕರಣ ಸಂಬಂಧ ಮಂಗಳೂರು ಉತ್ತರ ಕ್ಷೇತ್ರದ ಶಾಸಕ ಡಾ.ವೈ.ಭರತ್ ಶೆಟ್ಟಿ ಅವರಿಗೆ ಕಾವೂರು ಠಾಣಾಧಿಕಾರಿಯವರು ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ಜಾರಿಗೊಳಿಸಿದ್ದಾರೆ.
‘ಕಾವೂರಿನಲ್ಲಿ ಸೋಮವಾರ ನಡೆದ ಪ್ರತಿಭಟನೆಯಲ್ಲಿ ಪ್ರಚೋದನಾಕಾರಿ ಹೇಳಿಕೆ ನೀಡಿದ ಕುರಿತ ದೂರಿನ ಸಂಬಂಧ ಡಾ.ವೈ.ಭರತ್ ಶೆಟ್ಟಿ ಅವರಿಗೆ ಬುಧವಾರ ನೋಟಿಸ್ ಜಾರಿಗೊಳಿಸಿದ್ದೆವು. ವಿಧಾನ ಮಂಡಲ ಅಧಿವೇಶನಕ್ಕೆ ತಯಾರಿ ನಡೆಸುತ್ತಿರುವುದರಿಂದ ವಿಚಾರಣೆಗೆ ಹಾಜರಾಗಲು ಕಾಲಾವಕಾಶ ನೀಡುವಂತೆ ಅವರು ಕೋರಿದ್ದಾರೆ’ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಬಿಜೆಪಿ ಯುವ ಮೋರ್ಚಾ ನೇತೃತ್ವದಲ್ಲಿ ಕಾವೂರಿನಲ್ಲಿ ಸೋಮವಾರ ನಡೆದಿದ್ದ ಪ್ರತಿಭಟನೆಯಲ್ಲಿ ಭರತ್ ಶೆಟ್ಟಿ ಪ್ರಚೊದನಾಕಾರಿಯಾಗಿ ಮಾತನಾಡಿದ್ದಾರೆ ಎಂದು ಆರೋಪಿಸಿ ಪಾಲಿಕೆ ಸದಸ್ಯ ಅನಿಲ್ ಕುಮಾರ್ ಕಾವೂರು ಠಾಣೆಗೆ ದೂರು ನೀಡಿದ್ದರು. ಈ ದೂರನ್ನು ಆಧರಿಸಿ ಭಾರತೀಯ ನ್ಯಾಯ ಸಂಹಿತೆಯ ಸೆಕ್ಷನ್ 351 (3) (ಕ್ರಿಮಿನಲ್ ಬೆದರಿಕೆ) ಮತ್ತು ಸೆಕ್ಷನ್ 353ರ (ಪ್ರಚೋದನೆ) ಅಡಿ ಡಾ.ವೈ ಭರತ್ ಶೆಟ್ಟಿ ವಿರುದ್ಧ ಕಾವೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಪ್ರತಿಭಟನೆಯಲ್ಲಿ ಡಾ.ಭರತ್ ಶೆಟ್ಟಿ, ‘ಪಾರ್ಲಿಮೆಂಟ್ ಒಳಗೆ ಹೋಗಿ ಯಾರಾದರೂ ರಾಹುಲ್ಿ ಕೆನ್ನೆಗೆ ಎರಡು ಬಾರಿಸಿದರೆ ಒಳ್ಳೆಯದಿತ್ತು’ ಎಂದಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.