ADVERTISEMENT

ಸಿಎಎ, ಎನ್‌ಆರ್‌ಸಿ ಜಾಗೃತಿ ಸಮಾವೇಶ 27ಕ್ಕೆ

ಕೇಂದ್ರ ಸಚಿವ ರಾಜನಾಥ್‌ ಸಿಂಗ್ ಭಾಗಿ: ಸಂಜೀವ ಮಠಂದೂರು

​ಪ್ರಜಾವಾಣಿ ವಾರ್ತೆ
Published 21 ಜನವರಿ 2020, 16:35 IST
Last Updated 21 ಜನವರಿ 2020, 16:35 IST
ಸಂಜೀವ ಮಠಂದೂರು
ಸಂಜೀವ ಮಠಂದೂರು   

ಮಂಗಳೂರು: ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ಹಾಗೂ ರಾಷ್ಟ್ರೀಯ ಪೌರತ್ವ ನೋಂದಣಿ (ಎನ್‌ಆರ್‌ಸಿ) ಕುರಿತು ಜನಜಾಗೃತಿ ಮೂಡಿಸುವ ಬೃಹತ್‌ ಸಮಾವೇಶವನ್ನು ಬಿಜೆಪಿ ಜಿಲ್ಲಾ ಘಟಕದ ವತಿಯಿಂದ ಇದೇ 27 ರಂದು ನಗರದ ಬಂಗ್ರಕೂಳೂರಿನ ಗೋಲ್ಡ್‌ಫಿಂಚ್‌ ಸಿಟಿಯಲ್ಲಿ ಆಯೋಜಿಸಲಾಗಿದೆ.

ಪತ್ರಿಕಾಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ, ಶಾಸಕ ಸಂಜೀವ್‌ ಮಠಂದೂರು, ‘ಇದೇ ಸಂದರ್ಭದಲ್ಲಿ ಇಂತಹ ಕಾನೂನು ಜಾರಿಗೆ ತಂದ ಪ್ರಧಾನಿ ನರೇಂದ್ರ ಮೋದಿ ಹಾಗೂ ಗೃಹ ಸಚಿವ ಅಮಿತ್‌ ಶಾ ಅವರಿಗೆ ಅಭಿನಂದನೆ ಸಲ್ಲಿಸಲಾಗುವುದು’ ಎಂದರು.

27 ರಂದು ಮಧ್ಯಾಹ್ನ 3 ಗಂಟೆಗೆ ನಡೆಯಲಿರುವ ಕಾರ್ಯಕ್ರಮದಲ್ಲಿ ಕೇಂದ್ರ ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ಭಾಗವಹಿಸಲಿದ್ದು, ಸಿಎಎ ಹಾಗೂ ಎನ್‌ಆರ್‌ಸಿ ಕುರಿತು ಜಾಗೃತಿ ಮೂಡಿಸಲಿದ್ದಾರೆ ಎಂದು ತಿಳಿಸಿದರು.

ADVERTISEMENT

‘ಈ ಕಾಯ್ದೆಗಳ ಕುರಿತು ಪ್ರತಿಪಕ್ಷಗಳು ಜನರಲ್ಲಿ ಗೊಂದಲ ಸೃಷ್ಟಿ ಮಾಡುತ್ತಿವೆ. ಇಲ್ಲಸಲ್ಲದ ಹೇಳಿಕೆಗಳನ್ನು ನೀಡುವ ಮೂಲಕ ಕಾಯ್ದೆಯ ಬಗ್ಗೆ ಜನರಲ್ಲಿ ಭೀತಿ ಉಂಟು ಮಾಡುತ್ತಿವೆ. ಇಂತಹ ಸಂದರ್ಭದಲ್ಲಿ ಜವಾಬ್ದಾರಿಯುತ ರಾಜಕೀಯ ಪಕ್ಷವಾಗಿ ಜಾಗೃತಿ ಮೂಡಿಸುವುದು ನಮ್ಮ ಕರ್ತವ್ಯ. ಅದಕ್ಕಾಗಿಯೇ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ’ ಎಂದು ಹೇಳಿದರು.

ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಿಂದ ಸುಮಾರು 1.50 ಲಕ್ಷ ಜನರು ಭಾಗವಹಿಸುವ ನಿರೀಕ್ಷೆ ಇದೆ. ಗ್ರಾಮ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ, ಜಿಲ್ಲಾ ಪಂಚಾಯಿತಿ ಸದಸ್ಯರು, ಬಿಜೆಪಿ ಕಾರ್ಯಕರ್ತರು ಭಾಗವಹಿಸಲಿದ್ದಾರೆ ಎಂದ ಅವರು, ವರ್ತಕರು, ಅಟೋ ರಿಕ್ಷಾ ಚಾಲಕರು, ಸ್ವಯಂ ಪ್ರೇರಣೆಯಿಂದ ಕಾರ್ಯಕ್ರಮದಲ್ಲಿ ಭಾಗವಹಿಸಬೇಕು ಎಂದು ಮನವಿ ಮಾಡಿದರು.

ಕುಮಾರಸ್ವಾಮಿಗೆ ಚಿಕಿತ್ಸೆ ಅಗತ್ಯ: ಬಜ್ಪೆ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಾಂಬ್‌ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ ಸಂಜೀವ್‌ ಮಠಂದೂರು, ಅವರಿಗೆ ನಿಮ್ಹಾನ್ಸ್‌ನಲ್ಲಿ ಚಿಕಿತ್ಸೆ ಕೊಡಿಸಬೇಕು ಎಂದರು.

ಬಾಂಬ್‌ ಪತ್ತೆಯಾದ ಪ್ರಕರಣವನ್ನು ನಗರದ ಪೊಲೀಸರು ಅತ್ಯಂತ ಯಶಸ್ವಿಯಾಗಿ ನಿಭಾಯಿಸಿದ್ದಾರೆ. ಕುಮಾರಸ್ವಾಮಿ ಅವರ ಇಂತಹ ಹೇಳಿಕೆಗಳಿಂದ ಪೊಲೀಸರ ಆತ್ಮಸ್ಥೈರ್ಯ ಕುಗ್ಗಿಸಿದಂತಾಗುತ್ತದೆ ಎಂದು ಟೀಕಿಸಿದರು.

ಜಿಲ್ಲಾ ಘಟಕದ ಚುನಾಯಿತ ಅಧ್ಯಕ್ಷ ಸುದರ್ಶನ ಮೂಡುಬಿದಿರೆ, ಶಾಸಕರಾದ ವೇದವ್ಯಾಸ ಕಾಮತ್, ಡಾ.ವೈ.ಭರತ್‌ ಶೆಟ್ಟಿ, ಪಾಲಿಕೆ ಸದಸ್ಯ ಸುಧೀರ್ ಶೆಟ್ಟಿ ಕಣ್ಣೂರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.