ADVERTISEMENT

ಗ್ರಾ.ಪಂ. ಚುನಾವಣೆಗೆ ಬಿಜೆಪಿ ಸಜ್ಜು: ಸುದರ್ಶನ ಮೂಡುಬಿದಿರೆ

28 ರಂದು ಪುತ್ತೂರು, ಬಿ.ಸಿ.ರೋಡ್‌ನಲ್ಲಿ ಸಮಾವೇಶ

​ಪ್ರಜಾವಾಣಿ ವಾರ್ತೆ
Published 25 ನವೆಂಬರ್ 2020, 17:31 IST
Last Updated 25 ನವೆಂಬರ್ 2020, 17:31 IST
ಸುದರ್ಶನ ಎಂ.
ಸುದರ್ಶನ ಎಂ.   

ಮಂಗಳೂರು: ಗ್ರಾಮ ಪಂಚಾಯಿತಿ ಚುನಾವಣಾ ಸಿದ್ಧತೆಗಾಗಿ ಪಕ್ಷ ಸಂಘಟನೆ ಮಾಡಲಾಗುತ್ತಿದ್ದು, ಇದೇ 28ರಂದು ಬೆಳಿಗ್ಗೆ ಬಿ.ಸಿ.ರೋಡ್‌ನಲ್ಲಿ ಮತ್ತು ಮಧ್ಯಾಹ್ನ ಪುತ್ತೂರಿನಲ್ಲಿ ಗ್ರಾಮ ಸ್ವರಾಜ್ಯ ಸಮಾವೇಶ ಆಯೋಜಿಸಲಾಗಿದೆ ಎಂದು ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಸುದರ್ಶನ ಮೂಡುಬಿದಿರೆ ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್‌ಕುಮಾರ್ ಕಟೀಲ್ ನೇತೃತ್ವದಲ್ಲಿ ನಡೆಯುವ ಸಮಾವೇಶದಲ್ಲಿ ಉಪ ಮುಖ್ಯಮಂತ್ರಿ ಡಾ.ಅಶ್ವತ್ಥನಾರಾಯಣ, ಸಂಸದೆ ಶೋಭಾ ಕರಂದ್ಲಾಜೆ, ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಶಾಸಕರು, ಗ್ರಾಮ ಪಂಚಾಯಿತಿ, ಮಂಡಲ ಮಟ್ಟದ ವಿವಿಧ ಘಟಕಗಳ ಪದಾಧಿಕಾರಿಗಳು ಭಾಗವಹಿಸಲಿದ್ದಾರೆ ಎಂದರು.

ಬಿ.ಸಿ.ರೋಡ್‌ನ ಸ್ಪರ್ಶ ಸಭಾಂಗಣದಲ್ಲಿ 28ರಂದು ನಡೆಯುವ ಸಮಾವೇಶದಲ್ಲಿ ಮೂಡುಬಿದಿರೆ, ಮಂಗಳೂರು ಉತ್ತರ ಮತ್ತು ಬಂಟ್ವಾಳ ವಿಧಾನಸಭಾ ಕ್ಷೇತ್ರದ ವಿವಿಧ ಘಟಕದ ಪದಾಧಿಕಾರಿಗಳು ಭಾಗವಹಿಸಲಿದ್ದಾರೆ. ಮಧ್ಯಾಹ್ನ 2.30 ಕ್ಕೆ ಪುತ್ತೂರಿನ ‘ಕೋಟೆಚಾ‘ ಸಭಾಂಗಣದಲ್ಲಿ ಬೆಳ್ತಂಗಡಿ, ಪುತ್ತೂರು ಮತ್ತು ಸುಳ್ಯ ವಿಧಾನಸಭಾ ಕ್ಷೇತ್ರಗಳ ಪ್ರತಿನಿಧಿಗಳು ಪಾಲ್ಗೊಳ್ಳಿದ್ದಾರೆ ಎಂದು ಹೇಳಿದರು.

ADVERTISEMENT

ಜಿಲ್ಲೆಯಲ್ಲಿ ನಡೆಯಲಿರುವ ಗ್ರಾಮ ಪಂಚಾಯಿತಿ ಚುನಾವಣೆಗೆ ಬಿಜೆಪಿ ಎಲ್ಲ ಸಿದ್ಧತೆ ಮಾಡಿಕೊಂಡಿದೆ. ಈಗಾಗಲೇ 218 ಗ್ರಾಮ ಪಂಚಾಯಿತಿಗಳಲ್ಲಿ ಕುಟುಂಬ ಮಿಲನ ಕಾರ್ಯಕ್ರಮ ನಡೆದಿದೆ. 1,186 ಮತದಾನ ಕೇಂದ್ರ ವ್ಯಾಪ್ತಿಯಲ್ಲಿ ಪಂಚರತ್ನರ ನೇಮಕ ಆಗಿದೆ ಎಂದು ತಿಳಿಸಿದರು.

20ಸಾವಿರ ಪೇಜ್ ಪ್ರಮುಖರ ಆಯ್ಕೆ ನಡೆದಿದೆ. ಜಿಲ್ಲೆಯ ಒಟ್ಟು 228 ಗ್ರಾಮ ಪಂಚಾಯಿತಿಗಳ ಪೈಕಿ ಈ ಬಾರಿ ನಡೆಯಲಿರುವ 225 ಗ್ರಾಮ ಪಂಚಾಯಿತಿಗಳಲ್ಲಿ 148 ರಲ್ಲಿ ಬಿಜೆಪಿ ಬೆಂಬಲಿತ ಸದಸ್ಯರು ಅಧಿಕಾರದಲ್ಲಿದ್ದಾರೆ. ಮುಂದಿನ ಚುನಾವಣೆಯಲ್ಲಿ 200ಕ್ಕೂ ಅಧಿಕ ಗ್ರಾಮ ಪಂಚಾಯಿತಿಗಳಲ್ಲಿ ಬಿಜೆಪಿ ಅಧಿಕಾರ ಹಿಡಿಯುವ ಗುರಿ ಇದೆ ಎಂದು ಸುದರ್ಶನ್ ತಿಳಿಸಿದರು.

ಬಿಜೆಪಿ ಮುಖಂಡರಾದ ಕಸ್ತೂರಿ ಪಂಜ, ಜಗದೀಶ್ ಶೇಣವ, ಸುಧೀರ್ ಶೆಟ್ಟಿ ಕಣ್ಣೂರು, ರವಿಶಂಕರ್ ಮಿಜಾರು, ಪೂಜಾ ಪೈ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.