ADVERTISEMENT

ಬಿಜೆಪಿ ರಾಜ್ಯ ಕಾರ್ಯಕಾರಿಣಿ: ಕಡಲತಡಿಯಿಂದ ಸಂಘಟನೆಯ ಪಾಠ

ಬಿಜೆಪಿ ರಾಜ್ಯ ಕಾರ್ಯಕಾರಿಣಿ; ಪಂಚಾಯಿತಿ ಚುನಾವಣೆಗೆ ಯೋಜನೆ

ಚಿದಂಬರ ಪ್ರಸಾದ್
Published 5 ನವೆಂಬರ್ 2020, 4:15 IST
Last Updated 5 ನವೆಂಬರ್ 2020, 4:15 IST
ಮಂಗಳೂರಿನಲ್ಲಿ ಬುಧವಾರ ನಡೆದ ಪ್ರಭಾರಿ, ಸಹ ಪ್ರಭಾರಿ, ವಿಭಾಗ ಸಂಘಟನಾ ಕಾರ್ಯದರ್ಶಿ, ಸಹ ಸಂಘಟನಾ ಕಾರ್ಯದರ್ಶಿಗಳ ಸಭೆಯಲ್ಲಿ ಮಹೇಶ್‌ ಟೆಂಗಿನಕಾಯಿ ಮಾತನಾಡಿದರು. ರಾಜ್ಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಅರುಣ್‌ಕುಮಾರ್, ರಾಜ್ಯ ಘಟಕದ ಅಧ್ಯಕ್ಷ ನಳಿನ್‌ಕುಮಾರ್ ಕಟೀಲ್‌ ಇದ್ದರು.
ಮಂಗಳೂರಿನಲ್ಲಿ ಬುಧವಾರ ನಡೆದ ಪ್ರಭಾರಿ, ಸಹ ಪ್ರಭಾರಿ, ವಿಭಾಗ ಸಂಘಟನಾ ಕಾರ್ಯದರ್ಶಿ, ಸಹ ಸಂಘಟನಾ ಕಾರ್ಯದರ್ಶಿಗಳ ಸಭೆಯಲ್ಲಿ ಮಹೇಶ್‌ ಟೆಂಗಿನಕಾಯಿ ಮಾತನಾಡಿದರು. ರಾಜ್ಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಅರುಣ್‌ಕುಮಾರ್, ರಾಜ್ಯ ಘಟಕದ ಅಧ್ಯಕ್ಷ ನಳಿನ್‌ಕುಮಾರ್ ಕಟೀಲ್‌ ಇದ್ದರು.   

ಮಂಗಳೂರು: ಮುಂಬರುವ ಗ್ರಾಮ ಪಂಚಾಯಿತಿ, ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ ಚುನಾವಣೆಗೆ ಈಗಿನಿಂದಲೇ ಸಿದ್ಧತೆ ಆರಂಭಿಸಿರುವ ಬಿಜೆಪಿ, ನಗರದಲ್ಲಿ ಗುರುವಾರ ನಡೆಯಲಿರುವ ರಾಜ್ಯ ಕಾರ್ಯಕಾರಿಣಿಯ ಮೂಲಕ ಸಂಘಟನೆಯ ಬಲವರ್ಧನೆಗೆ ಮುಂದಾಗಿದೆ.

ಕೇಂದ್ರ ಸಚಿವರು, ಮುಖ್ಯಮಂತ್ರಿ, ರಾಷ್ಟ್ರೀಯ ಪದಾಧಿಕಾರಿಗಳು, ರಾಜ್ಯ ಘಟಕದ ಪದಾಧಿಕಾರಿಗಳ ಸಮ್ಮುಖದಲ್ಲಿ ಬೆಳಿಗ್ಗೆ 10 ರಿಂದ ಸಂಜೆ 5ಗಂಟೆಯವರೆಗೆ ನಡೆಯುವ ಕಾರ್ಯಕಾರಿಣಿಯಲ್ಲಿ ಪ್ರಮುಖವಾಗಿ ಪಕ್ಷದ ಬಲವರ್ಧನೆ ಹಾಗೂ ಪಂಚಾಯಿತಿ ಚುನಾವಣೆಗಳನ್ನು ಎದುರಿಸುವ ಕುರಿತು ಮಾರ್ಗದರ್ಶನ ನೀಡಲು ನಿರ್ಧರಿಸಲಾಗಿದೆ.

ಪಕ್ಷ ಸಂಘಟನೆ, ಮುಂದಿನ ಕಾರ್ಯಯೋಜನೆ, ಅಭಿವೃದ್ಧಿ ಕಾರ್ಯಗಳು, ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಸಾಧನೆಗಳನ್ನು ಮನೆ ಮನೆಗೆ ತಲುಪಿಸುವ ಕಾರ್ಯ ಸೇರಿದಂತೆ ಪ್ರಮುಖ ವಿಚಾರಗಳ ಬಗ್ಗೆ ಚರ್ಚೆ ನಡೆಯಲಿದೆ. ಸಭೆಯಲ್ಲಿ ರಾಜ್ಯ ಸಮಿತಿ ಪದಾಧಿಕಾರಿಗಳು, ವಿವಿಧ ಮೋರ್ಚಾಗಳ ಅಧ್ಯಕ್ಷರು, ಪ್ರಧಾನ ಕಾರ್ಯದರ್ಶಿಗಳು ಸೇರಿದಂತೆ 120 ಜನರು ಭಾಗವಹಿಸಲಿದ್ದಾರೆ.

ADVERTISEMENT

ಸಿದ್ಧತೆ ಪೂರ್ಣ: ಬಹುಕಾಲದ ನಂತರ ಮಂಗಳೂರಿನಲ್ಲಿ ರಾಜ್ಯ ಕಾರ್ಯಕಾರಿಣಿ ನಡೆಯುತ್ತಿದ್ದು, ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ, ಸಂಸದ ನಳಿನ್‌ಕುಮಾರ್ ಕಟೀಲ್ ಮಾರ್ಗದರ್ಶನದಂತೆ ಸಿದ್ಧತೆಗಳು ಪೂರ್ಣಗೊಂಡಿವೆ ಎಂದು ಶಾಸಕ ವೇದವ್ಯಾಸ ಕಾಮತ್ ತಿಳಿಸಿದ್ದಾರೆ.

ಸಭೆಯಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್‌ಕುಮಾರ್ ಕಟೀಲ್, ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ, ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ, ಕೇಂದ್ರ ಸಚಿವರಾದ ಪ್ರಲ್ಹಾದ್‌ ಜೋಷಿ, ಡಿ.ವಿ. ಸದಾನಂದ ಗೌಡ, ಸಚಿವರಾದ ಜಗದೀಶ್ ಶೆಟ್ಟರ್, ಕೆ.ಎಸ್. ಈಶ್ವರಪ್ಪ, ಆರ್. ಅಶೋಕ್, ಬಿಜೆಪಿ ರಾಜ್ಯ ಘಟಕದ ಉಪಾಧ್ಯಕ್ಷರಾದ ಅರವಿಂದ ಲಿಂಬಾವಳಿ, ವಿಜಯೇಂದ್ರ, ರಾಜ್ಯಸಂಘಟನಾ ಕಾರ್ಯದರ್ಶಿ ಅರುಣ್‌ಕುಮಾರ್ ಸೇರಿದಂತೆ ಅನೇಕ ಪ್ರಮುಖರು ಭಾಗವಹಿಸಲಿದ್ದಾರೆ ಎಂದು ತಿಳಿಸಿದ್ದಾರೆ.

ಪ್ರತಿ ಜಿಲ್ಲೆಯಲ್ಲಿ ಸಚಿವರ ಸಭೆ

ಪ್ರತಿ ಜಿಲ್ಲೆಯಲ್ಲಿ ರಾಜ್ಯ ಕಾರ್ಯಕಾರಿಣಿ ನಡೆಸಲು ನಿರ್ಧರಿಸಲಾಗಿದೆ. ಮಂಗಳೂರಿನಿಂದಲೇ ಇದು ಆರಂಭವಾಗಲಿದೆ. ಅದೇ ರೀತಿ ಎರಡು ತಿಂಗಳಿಗೊಮ್ಮೆ ಪ್ರತಿ ಜಿಲ್ಲೆಯಲ್ಲಿ ಸಚಿವರ ಸಭೆಯನ್ನು ನಡೆಸಲು ತೀರ್ಮಾನಿಸಲಾಗಿದೆ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ, ಸಂಸದ ನಳಿನ್‌ಕುಮಾರ್ ಕಟೀಲ್‌ ತಿಳಿಸಿದ್ದಾರೆ.

ಎಲ್ಲ ಸಚಿವರು ಪ್ರತಿಯೊಂದು ಜಿಲ್ಲೆಗಳಿಗೆ ಭೇಟಿ ನೀಡುವುದರಿಂದ ಆಯಾ ಜಿಲ್ಲೆಗಳ ಸಮಸ್ಯೆಗಳು ಪರಿಹಾರ ಆಗಲಿವೆ. ಜೊತೆಗೆ ಪಕ್ಷದ ಸಂಘಟನೆಗೂ ಹೆಚ್ಚಿನ ಬಲ ದೊರೆಯಲಿದೆ ಎಂದರು.

ಕರಾವಳಿಯ ಮಾದರಿ

ಪಕ್ಷದ ಸಂಘಟನೆಯ ವಿಚಾರದಲ್ಲಿ ಕರಾವಳಿಯಲ್ಲಿ ಅಳವಡಿಸಿರುವ ಮಾದರಿಯ ಕುರಿತು ಸಭೆಯಲ್ಲಿ ಚರ್ಚೆ ನಡೆಸಲಾಗುತ್ತಿದೆ.

ತಳಮಟ್ಟದಿಂದ ಹಿಡಿದು ಮೇಲಿನವರೆಗೆ ಎಲ್ಲ ಹಂತಗಳಲ್ಲೂ ಪಕ್ಷ ಅಧಿಕಾರದಲ್ಲಿ ಇರಬೇಕು. ಅದರಲ್ಲೂ ದಕ್ಷಿಣ ಕನ್ನಡ ಜಿಲ್ಲೆಯ ನಗರಸಭೆ, ಪಾಲಿಕೆಯಲ್ಲಿ ಬಿಜೆಪಿ ಬಹುಮತ ಪಡೆದಿದ್ದು, ಏಳು ಶಾಸಕರು, ಒಬ್ಬ ಸಂಸದರಿದ್ದಾರೆ. ಇದೇ ಮಾದರಿಯ ಪಕ್ಷ ಸಂಘಟನೆಗೆ ಒತ್ತು ನೀಡುವ ಬಗ್ಗೆ ಕಾರ್ಯಕಾರಿಣಿಯಲ್ಲಿ ಪ್ರಮುಖ ಚರ್ಚೆ ನಡೆಯಲಿದೆ.

*****

ಹೊಸ ಕಾರ್ಯಕಾರಿಣಿ ರಚನೆಯಾದ ನಂತರ ಪ್ರಥಮ ಬಾರಿಗೆ ಮಂಗಳೂರಿನಲ್ಲಿ ರಾಜ್ಯ ಕಾರ್ಯಕಾರಿಣಿ ನಡೆಯಲಿದ್ದು, ಸಂಘಟನಾತ್ಮಕ ಚರ್ಚೆ ನಡೆಸಿ, 2–3 ನಿರ್ಣಯ ಕೈಗೊಳ್ಳಲಾಗುತ್ತದೆ.
-ನಳಿನ್‌ಕುಮಾರ್ ಕಟೀಲ್‌
ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ, ಸಂಸದ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.