ADVERTISEMENT

ಅಂಬೇಡ್ಕರ್ ಪ್ರತಿಮೆ ಅನಾವರಣ ಇಂದು

​ಪ್ರಜಾವಾಣಿ ವಾರ್ತೆ
Published 5 ಡಿಸೆಂಬರ್ 2022, 16:33 IST
Last Updated 5 ಡಿಸೆಂಬರ್ 2022, 16:33 IST
ಪತ್ರಿಕಾಗೋಷ್ಠಿಯಲ್ಲಿ ಕುಲಪತಿ ಪ್ರೊ.ಪಿ.ಎಸ್‌.ಯಡಪಡಿತ್ತಾಯ ಮಾತನಾಡಿದರು
ಪತ್ರಿಕಾಗೋಷ್ಠಿಯಲ್ಲಿ ಕುಲಪತಿ ಪ್ರೊ.ಪಿ.ಎಸ್‌.ಯಡಪಡಿತ್ತಾಯ ಮಾತನಾಡಿದರು   

ಮಂಗಳೂರು: ಇಲ್ಲಿಯ ಮಂಗಳೂರು ವಿಶ್ವವಿದ್ಯಾಲಯದ ಆವರಣದಲ್ಲಿ ಸ್ಥಾಪಿಸಿರುವ ಸಂವಿಧಾನ ಶಿಲ್ಪಿ ಬಿ.ಆರ್.ಅಂಬೇಡ್ಕರ್‌ ಅವರ ಪ್ರತಿಮೆಯನ್ನು ರಾಜ್ಯಪಾಲ ಹಾಗೂ ವಿವಿ ಕುಲಾಧಿಪತಿ ಥಾವರ್ ಚಂದ್ ಗೆಹಲೋತ್‌ ಇದೇ 6ರಂದು ಮಂಗಳವಾರ ಸಂಜೆ 5ಕ್ಕೆ ಅನಾವರಣ ಮಾಡಲಿದ್ದಾರೆ ಎಂದು ಕುಲಪತಿ ಪ್ರೊ. ಪಿ. ಸುಬ್ರಹ್ಮಣ್ಯ ಯಡಪಡಿತ್ತಾಯ ತಿಳಿಸಿದರು.

ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂಬೇಡ್ಕರ್ ಅಧ್ಯಯನ ಕೇಂದ್ರದ ಯೋಜನೆಯಡಿ 9 ಅಡಿ ಎತ್ತರದ, 600 ಕೆಜಿ ತೂಕದ ಕಂಚಿನ ಪ್ರತಿಮೆಯನ್ನು ₹ 14.30 ಲಕ್ಷ ವೆಚ್ಚದಲ್ಲಿ ನಿರ್ಮಿಸಲಾಗಿದೆ. ಛತ್ತೀಸ್‌ಗಢದ ಮಹಾತ್ಮಗಾಂಧಿ ತೋಟಗಾರಿಕೆ ಮತ್ತು ಅರಣ್ಯ ವಿವಿ ಕುಲಪತಿ ಪ್ರೊ.ಆರ್.ಎಸ್.ಕುರೀಲ್ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ ಎಂದು ಅವರು ತಿಳಿಸಿದರು.

ಪ್ರತಿಮೆಯ ಕೆಳಭಾಗದಲ್ಲಿ ಅಂಬೇಡ್ಕರ್ ಅಧ್ಯಯನ ಕೇಂದ್ರದ ಮುಖ್ಯಸ್ಥರ ಹೆಸರು ಅಚ್ಚು ಮಾಡಿರುವುದಕ್ಕೆ ಆಕ್ಷೇಪ ವ್ಯಕ್ತಪಡಿಸಿ ಎಸ್‌ಸಿಎಸ್‌ಟಿ ನೌಕರರು ನೀಡಿರುವ ಮನವಿಗೆ ಸಂಬಂಧಿಸಿ ಪ್ರತಿಕ್ರಿಯಿಸಿದ ಕುಲಪತಿ, ಪ್ರತಿಮೆ ನಿರ್ಮಾಣ ಕಾರ್ಯ ನಿಯಮ ಪ್ರಕಾರವೇ ನಡೆದಿದ್ದು ಸಂಬಂಧಪಟ್ಟವರಿಗೆ ಮನವರಿಕೆ ಮಾಡಲಾಗಿದೆ ಎಂದರು. ಮುಂದಿನ ವರ್ಷ ಸ್ವಾಮಿ ವಿವೇಕಾನಂದರ ಪ್ರತಿಮೆಯನ್ನೂ ಸ್ಥಾಪಿಸಲಾಗುವುದು ಎಂದರು.

ADVERTISEMENT

ಕುಲಸಚಿವ ಡಾ.ಸಿ.ಕೆ. ಕಿಶೋರ್ ಕುಮಾರ್, ಡಾ.ಬಿ.ಆರ್.ಅಂಬೇಡ್ಕರ್ ಅಧ್ಯಯನ ಕೇಂದ್ರದ ನಿರ್ದೇಶಕ ಪ್ರೊ.ವಿಶ್ವನಾಥ, ಸಮೂಹ ಸಂವಹನ ಮತ್ತು ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥ ಎಂ.ಪಿ.ಉಮೇಶ್‌ಚಂದ್ರ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.