ADVERTISEMENT

ಕಣಚೂರು ಆಸ್ಪತ್ರೆಯಲ್ಲಿ ಕ್ಯಾನ್ಸರ್ ವಿಭಾಗ

​ಪ್ರಜಾವಾಣಿ ವಾರ್ತೆ
Published 1 ಅಕ್ಟೋಬರ್ 2021, 3:58 IST
Last Updated 1 ಅಕ್ಟೋಬರ್ 2021, 3:58 IST

ಮಂಗಳೂರು: ನಗರದ ಹೊರವಲಯದ ನಾಟೆಕಲ್‌ನಲ್ಲಿರುವ ಕಣಚೂರು ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದಲ್ಲಿ ಸುಸಜ್ಜಿತ ಕ್ಯಾನ್ಸರ್ ಚಿಕಿತ್ಸಾ ವಿಭಾಗವು ಅಕ್ಟೋಬರ್ 1ರ ಬೆಳಿಗ್ಗೆ 10 ಗಂಟೆಗೆ ಉದ್ಘಾಟನೆಗೊಳ್ಳಲಿದೆ ಎಂದು ಸಂಸ್ಥೆಯ ಮೆಡಿಕಲ್ ಸುಪರಿಂಟೆಂಡೆಂಟ್ ಡಾ. ದೇವಿದಾಸ್ ಶೆಟ್ಟಿ ತಿಳಿಸಿದರು.

ಗುರುವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ನಿಟ್ಟೆ ವಿಶ್ವವಿದ್ಯಾಲಯದ ಉಪ ಕುಲಪತಿ ಡಾ.ಸತೀಶ್ ಭಂಡಾರಿ ಉದ್ಘಾಟಿಸುವರು. ಒಂದು ತಿಂಗಳು ನಡೆಯಲಿರುವ ಸ್ತನ ಕ್ಯಾನ್ಸರ್ ಜಾಗೃತಿ ಕಾರ್ಯಕ್ರಮಕ್ಕೆ ಜಿಲ್ಲಾಧಿಕಾರಿ ಡಾ.ಕೆ.ವಿ. ರಾಜೇಂದ್ರ ಚಾಲನೆ ನೀಡುವರು. ಶಾಸಕ ಯು.ಟಿ. ಖಾದರ್ ಅಧ್ಯಕ್ಷತೆ ವಹಿಸುವರು ಎಂದರು.

ಆಸ್ಪತ್ರೆಯಲ್ಲಿ ಕ್ಯಾನ್ಸರ್ ಚಿಕಿತ್ಸೆಗೆ ಎಲ್ಲ ಸೌಲಭ್ಯಗಳಿವೆ. ‘ಕ್ಷೇಮ’ದ ‘ವಿಕಿರಣ ಆಂಕಾಲಜಿ’ ವಿಭಾಗ ಸಹಯೋಗ ನೀಡಿದೆ. ಸ್ತನ ಕ್ಯಾನ್ಸರ್ ಅನ್ನು ಆರಂಭದಲ್ಲಿಯೇ ಗುರುತಿಸಿ, ಚಿಕಿತ್ಸೆ ಪಡೆಯಬೇಕು. ಈ ವಿಷಯದಲ್ಲಿ ನಿರ್ಲಕ್ಷ್ಯ ಬೇಡ ಎಂದರು.

ADVERTISEMENT

ಸ್ತನ ಕ್ಯಾನ್ಸರ್ ಮತ್ತು ಗರ್ಭಕೋಶದ ತಪಾಸಣಾ ಶಿಬಿರವು ಅಕ್ಟೋಬರ್ 1ರಿಂದ 31ರವರೆಗೆ ನಡೆಯಲಿದೆ. ಶಿಬಿರದಲ್ಲಿ ಪ್ರಯೋಗಾಲಯ ಪರೀಕ್ಷೆಗೆ ಮತ್ತು ಅಲ್ಟ್ರಾಸೌಂಡ್ ಸ್ಕ್ಯಾನ್‌ಗೆ ಶೇ 50 ರಿಯಾಯಿತಿ ನೀಡಲಾಗುವುದು ಎಂದು ಹೇಳಿದರು. ಸಂಸ್ಥೆಯ ಸೀನಿಯರ್ ಮೆಡಿಕಲ್ ಆಂಕಾಲಜಿಸ್ಟ್ ಡಾ.ಗುರುಪ್ರಸಾದ್ ಭಟ್, ಮೆಡಿಕಲ್ ಆಂಕಾಲಜಿಸ್ಟ್ ಡಾ. ನಜೀಬ್, ಸಾರ್ವಜನಿಕ ಸಂಪರ್ಕಾಧಿಕಾರಿಗಳಾದ ರಶೀದ್, ನವಾಜ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.