ADVERTISEMENT

ಪುತ್ತೂರು ವಿದ್ಯಾರ್ಥಿನಿಯ ಸಾಮೂಹಿಕ ಅತ್ಯಾಚಾರ: ಐವರ ವಿರುದ್ಧ ಆರೋಪಪಟ್ಟಿ

​ಪ್ರಜಾವಾಣಿ ವಾರ್ತೆ
Published 9 ಅಕ್ಟೋಬರ್ 2019, 16:26 IST
Last Updated 9 ಅಕ್ಟೋಬರ್ 2019, 16:26 IST
   

ಮಂಗಳೂರು: ಪತ್ತೂರು ನಗರದ ಪದವಿ ಕಾಲೇಜೊಂದರ ಮೊದಲ ವರ್ಷದ ವಿದ್ಯಾರ್ಥಿನಿಯೊಬ್ಬಳ ಮೇಲೆ ನಡೆದಿದ್ದ ಸಾಮೂಹಿಕ ಅತ್ಯಾಚಾರ ಆರೋಪ ಪ್ರಕರಣದಲ್ಲಿ ಆರೋಪಿಗಳಾಗಿರುವ ಅದೇ ಕಾಲೇಜಿನ ಪದವಿ ದ್ವಿತೀಯ ವರ್ಷದ ಐವರು ವಿದ್ಯಾರ್ಥಿಗಳ ವಿರುದ್ಧ ಪೊಲೀಸರು ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದಾರೆ.

ಪ್ರಕರಣದ ತನಿಖಾಧಿಕಾರಿಯಾಗಿರುವ ಪುತ್ತೂರು ಉಪ ವಿಭಾಗದ ಡಿವೈಎಸ್‌ಪಿ ದಿನಕರ ಶೆಟ್ಟಿ ಅವರು ಪುತ್ತೂರಿನ ನ್ಯಾಯಾಲಯಕ್ಕೆ ಇತ್ತೀಚೆಗೆ 365 ಪುಟಗಳ ಆರೋಪಪಟ್ಟಿ ಸಲ್ಲಿಸಿದ್ದಾರೆ. ಪುತ್ತೂರು ತಾಲ್ಲೂಕಿನ ಬಜತ್ತೂರು ಗ್ರಾಮದ ಗಾಣದಮನೆ ನಿವಾಸಿ ಗುರುನಂದನ್ (19), ಬಂಟ್ವಾಳ ತಾಲ್ಲೂಕಿನ ಪೆರ್ನೆ ನಿವಾಸಿ ಪ್ರಜ್ವಲ್ (19), ಕಡಂಬು ನಿವಾಸಿ ಕಿಶನ್ (19), ಪುತ್ತೂರು ತಾಲ್ಲೂಕಿನ ಆರ್ಯಾಪು ಗ್ರಾಮದ ಪಿಲಿಗುಂಡ ನಿವಾಸಿ ಸುನೀಲ್ (19) ಹಾಗೂ ಬಂಟ್ವಾಳ ತಾಲ್ಲೂಕಿನ ಬರಿಮಾರು ಗ್ರಾಮದ ಬಲ್ಯ ನಿವಾಸಿ ಪ್ರಖ್ಯಾತ್ (19) ಆರೋಪಪಟ್ಟಿ ಸಲ್ಲಿಸಿದ್ದಾರೆ.

ಆರೋಪಿಗಳನ್ನು ಬಂಧಿಸಿದ 90 ದಿನಗಳೊಳಗೆ ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಲಾಗಿದೆ. ಶೀಘ್ರದಲ್ಲಿಯೇ ವಿಚಾರಣಾ ನ್ಯಾಯಾಲಯವು ಪ್ರಕರಣದ ವಿಚಾರಣೆಯನ್ನು ಕೈಗೆತ್ತಿಕೊಳ್ಳಲಿದೆ ಎಂದು ಪಬ್ಲಿಕ್‌ ಪ್ರಾಸಿಕ್ಯೂಟರ್‌ ಕೃಷ್ಣವೇಣಿ ಮಾಹಿತಿ ನೀಡಿದರು.

ADVERTISEMENT

‘ಮಾರ್ಚ್‌ ತಿಂಗಳಿನಲ್ಲಿ ಆರೋಪಿ ವಿದ್ಯಾರ್ಥಿಗಳು ಸಂತ್ರಸ್ತೆಯನ್ನು ಮನೆಗೆ ತಲುಪಿಸುವುದಾಗಿ ಹೇಳಿ ಕಾರಿನಲ್ಲಿ ಕರೆದುಕೊಂಡು ಹೋಗಿದ್ದರು. ನಿರ್ಜನ ಪ್ರದೇಶವೊಂದಕ್ಕೆ ಕರೆದೊಯ್ದು ಕಾರಿನಲ್ಲೇ ಆಕೆಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ್ದರು. ಮೊಬೈಲ್‌ನಲ್ಲಿ ಘಟನೆಯ ವಿಡಿಯೊ ಚಿತ್ರೀಕರಣ ಮಾಡಿಕೊಂಡಿದ್ದರು. ಅತ್ಯಾಚಾರ ನಡೆದಿರುವ ಕುರಿತು ಬಾಯಿ ಬಿಟ್ಟರೆ ಜೀವಸಹಿತ ಬಿಡುವುದಿಲ್ಲ ಎಂಬುದಾಗಿ ಬೆದರಿಕೆ ಒಡ್ಡಿದ್ದರು’ ಎಂಬ ವಿಷಯ ಆರೋಪಪಟ್ಟಿಯಲ್ಲಿದೆ ಎಂದು ಗೊತ್ತಾಗಿದೆ.

ಅತ್ಯಾಚಾರದ ವಿಡಿಯೊ ತುಣುಕು ಜುಲೈ ತಿಂಗಳಿನಲ್ಲಿ ಸಾಮಾಜಿಕ ಮಾಧ್ಯಮಗಳ ಮೂಲಕ ಪ್ರಸಾರವಾಗಿತ್ತು. ಆ ಬಳಿಕ ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು ಐವರನ್ನು ಬಂಧಿಸಿದ್ದರು. ಈ ವಿಡಿಯೊ ತುಣುಕನ್ನು ‘ವೈರಲ್‌’ ಮಾಡಿದ್ದ ಆರೋಪದಲ್ಲಿ ಪ್ರತ್ಯೇಕ ಪ್ರಕರಣ ದಾಖಲಿಸಿ, ಎಂಟು ಮಂದಿಯನ್ನು ಬಂಧಿಸಲಾಗಿತ್ತು.

‘ಈಗ ಮೊದಲ ಹಂತದ ಆರೋಪಪಟ್ಟಿ ಸಲ್ಲಿಸಲಾಗಿದೆ. ವಿಧಿ ವಿಜ್ಞಾನ ಪ್ರಯೋಗಾಲಯದ ವರದಿ ಮತ್ತು ದೂರವಾಣಿ ಕರೆಗಳಿಗೆ ಸಂಬಂಧಿಸಿದ ಮಾಹಿತಿ ಕೈಸೇರಬೇಕಿದೆ. ಆ ಬಳಿಕ ಹೆಚ್ಚುವರಿ ಆರೋಪಪಟ್ಟಿ ಸಲ್ಲಿಸಲಾಗುವುದು. ಈಗ ಸಲ್ಲಿಸಿರುವ ಆರೋಪಪಟ್ಟಿ ಪ್ರಕಾರ ಆರೋಪಿಗಳಿಗೆ ಶಿಕ್ಷೆಯಾದರೆ 20 ವರ್ಷಗಳವರೆಗೂ ಕಠಿಣ ಜೈಲು ಶಿಕ್ಷೆ ವಿಧಿಸಲು ಅವಕಾಶವಿದೆ’ ಎಂದು ದಕ್ಷಿಣ ಕನ್ನಡ ಎಸ್‌ಪಿ ಬಿ.ಎಂ.ಲಕ್ಷ್ಮೀಪ್ರಸಾದ್‌ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.