ಮಂಗಳೂರು: ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಸೋಲಿಗೆ ಕಾರಣ ಹುಡುಕುವ ಕಾರ್ಯ ಪೂರ್ಣಗೊಂಡಿದ್ದು ಶೀಘ್ರದಲ್ಲೇ ಪಕ್ಷದ ವರಿಷ್ಠರಿಗೆ ವರದಿ ಸಲ್ಲಿಸಲಾಗುವುದು ಎಂದು ಮಂಗಳೂರು ವಿಭಾಗದ ಸತ್ಯಶೋಧನಾ ಸಮಿತಿ ಅಧ್ಯಕ್ಷ ವಿ.ಎಸ್.ಉಗ್ರಪ್ಪ ತಿಳಿಸಿದರು.
ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು 9 ಮಂದಿಯ ಸಮಿತಿ ಅಭಿಪ್ರಾಯ ಸಂಗ್ರಹಿಸಿದೆ. ಸೋಲಿಗೆ ಪ್ರಮುಖ ಕಾರಣಗಳನ್ನು ಪಟ್ಟಿ ಮಾಡಲಾಗಿದೆ. ಪಕ್ಷದ ಕಟ್ಟುನಿಟ್ಟಿನ ಆದೇಶ ಇರುವುದರಿಂದ ಯಾವುದೇ ಅಂಶವನ್ನು ಬಹಿರಂಗ ಮಾಡಲು ಸಾಧ್ಯವಿಲ್ಲ. ಲೋಪಗಳನ್ನು ಸರಿಪಡಿಸಿ ಪಕ್ಷವನ್ನು ತಳಮಟ್ಟದಿಂದ ಭದ್ರಪಡಿಸಲು ಈ ವರದಿ ಸಹಕಾರಿ ಆಗಲಿದೆ’ ಎಂದರು.
‘ಲೋಕಸಭೆ ಚುನಾವಣೆಯಲ್ಲಿ ರಾಜ್ಯದಲ್ಲಿ 20 ಸ್ಥಾನಗಳನ್ನು ಗೆಲ್ಲುವ ನಿರೀಕ್ಷೆ ಕಾಂಗ್ರೆಸ್‌ಗೆ ಇತ್ತು. ಅದು ಸಾಧ್ಯವಾಗಲಿಲ್ಲ. ಆದರೂ ಕಳೆದ ಬಾರಿಗೆ ಹೋಲಿಸಿದರೆ ಈ ಸಲ ಉತ್ತಮ ಸಾಧನೆ ಆಗಿದೆ’ ಎಂದ ಅವರು ಗ್ಯಾರಂಟಿ ಯೋಜನೆಗಳಿಂದ ಚುನಾವಣೆಯಲ್ಲಿ ಪಕ್ಷದ ಮೇಲೆ ಪ್ರತಿಕೂಲ ಪರಿಣಾಮ ಆಗಲಿಲ್ಲ ಎಂದರು.
‘ಸರ್ಕಾರಿ ನೌಕರರು ಆರ್‌ಎಸ್ಎಸ್ ಚಟುವಟಿಕೆಯಲ್ಲಿ ಭಾಗವಹಿಸುವುದರ ಮೇಲಿನ ನಿಷೇಧ ತೆರವು ಮಾಡಿರುವುದು ಅಸಾಂವಿಧಾನಿಕ. ಬಿಜೆಪಿ ಮತ್ತು ಆರ್‌ಎಸ್‌ಎಸ್ ಒಂದೇ ನಾಣ್ಯದ ಎರಡು ಮುಖಗಳಾಗಿರುವುದರಿಂದ ಪಕ್ಷಕ್ಕಾಗಿ ಸರ್ಕಾರಿ ಯಂತ್ರವನ್ನು ದುರುಪಯೋಗ ಮಾಡಿಕೊಳ್ಳುವ ಸಾಧ್ಯತೆ ಇದೆ’ ಎಂದು ಅವರು ಹೇಳಿದರು.
‘ಬಿಜೆಪಿ ಸರ್ಕಾರ ಆಡಳಿತದಲ್ಲಿ ಇದ್ದಾಗ 40 ಶೇಕಡ ಕಮಿಷನ್ ವಿಷಯಕ್ಕೆ ಸಂಬಂಧಿಸಿ ಹೋರಾಟ ಮಾಡಿದ್ದೆವು. ಈ ವಿಷಯವನ್ನು ಈಗ ನ್ಯಾಯಾಂಗ ತನಿಖೆಗೆ ಒಪ್ಪಿಸಿದ್ದು ತಪ್ಪಿತಸ್ಥರೆಲ್ಲರಿಗೂ ಶಿಕ್ಷೆ ಆಗಲಿದೆ’ ಎಂದು ಉಗ್ರಪ್ಪ ಹೇಳಿದರು.
ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.ಹರೀಶ್ ಕುಮಾರ್, ಕೆಪಿಸಿಸಿ ಉಪಾಧ್ಯಕ್ಷ ರಮಾನಾಥ ರೈ, ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಆರ್, ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.