
ಮಂಗಳೂರು: 'ಅಧಿಕಾರ ಶಾಶ್ವತ ಅಲ್ಲ. ಅಧಿಕಾರವನ್ನು ಯಾವತ್ತಿದ್ದರೂ ಬಿಡಲೇ ಬೇಕು. ಹತ್ತು ವರ್ಷದ ನಂತರವಾದರೂ ಬಿಡಬೇಕು. ಅಧಿಕಾರವನ್ನು ಯಾವಾಗ ಬಿಡಬೇಕು ಎಂಬುದನ್ನು ಹೈಕಮಾಂಡ್ ತೀರ್ಮಾನ ಮಾಡುತ್ತದೆ' ಎಂದು ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು.
ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ಬುಧವಾರ ಏರ್ಪಡಿಸಿದ್ದ ಮಹಾತ್ಮ ಗಾಂಧಿ- ನಾರಾಯಣ ಗುರು ಸಂವಾದದ ಶತಮಾನೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಂದಿದ್ದ ಅವರು ಇಲ್ಲಿ ಸುದ್ದಿಗಾರರ ಜೊತೆ ಬುಧವಾರ ಮಾತನಾಡಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಎಐಸಿಸಿ ಪ್ರಧಾನ ಕಾರ್ಯರ್ಶಿ ಕೆ.ಸಿ ವೇಣುಗೋಪಾಲ್ ಇಲ್ಲಿ ಭೇಟಿಯಾಗಿ ಮಾತುಕತೆ ನಡೆಸಿದ ಕುರಿತು ಸುದ್ದಿಗಾರರ ಪ್ರಶ್ನೆಗೆ ಅವರು ಪ್ರತಿಕ್ರಿಯಿಸಿದರು.
'ಅವರು ಕಾರ್ಯಕ್ರಮಕ್ಕೆ ಬಂದಿದಾರಷ್ಟೇ. ಅವರ ನಡುವೆ ಯಾವುದೇ ರಾಜಕೀಯ ಮಾತುಕತೆ ಆಗಿಲ್ಲ. ಅವರಿಬ್ಬರು ಏನು ಮಾತುಕತೆ ನಡೆಸಿದ್ದಾರೆ ಎಂದು ಅವರನ್ನೆ ಕೇಳಬೇಕು' ಎಂದರು.
ಮಂಗಳೂರು ವಿಮಾನನಿಲ್ದಾಣದಲ್ಲಿ ಕಾರ್ಯಕರ್ತರು ಡಿ.ಕೆ.ಶಿವಕುಮಾರ್ ಹಾಗೂ ಸಿದ್ದರಾಮಯ್ಯ ಪರ ಜೈಕಾರ ಹಾಕಿದ ಕುರಿತು ಪ್ರತಿಕ್ರಿಯಿಸಿದ ಅವರು, 'ಆ ರೀತಿ ಜೈಕಾರ ಹಾಕಿದರೆ ಏನು ಪ್ರಯೋಜನ ಆಗುವುದಿಲ್ಲ. ನಮ್ಮಲ್ಲಿ ಯಾವುದೇ ಗೊಂದಲ ಇಲ್ಲ. ಎಲ್ಲಾ ತಿಳಿಯಾಗಿದೆ. ಉಭಯ ನಾಯಕರು ಈಗಾಗಲೇ ಮಾತನಾಡಿದ್ದಾರೆ' ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.