ADVERTISEMENT

ಕೋವಿಡ್ ನಿಯಂತ್ರಣ: ಜಿಲ್ಲಾಡಳಿತ ವಿಫಲ

ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿ ಆರೋಪ

​ಪ್ರಜಾವಾಣಿ ವಾರ್ತೆ
Published 23 ಜುಲೈ 2020, 11:41 IST
Last Updated 23 ಜುಲೈ 2020, 11:41 IST
ಮಂಗಳೂರಿನ ಜಿಲ್ಲಾ ವೆನ್ಲಾಕ್ ಆಸ್ಪತ್ರೆಯ ಮುಂಭಾಗದಲ್ಲಿ ಕಾಂಗ್ರೆಸ್‌ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು–ಪ್ರಜಾವಾಣಿ ಚಿತ್ರ
ಮಂಗಳೂರಿನ ಜಿಲ್ಲಾ ವೆನ್ಲಾಕ್ ಆಸ್ಪತ್ರೆಯ ಮುಂಭಾಗದಲ್ಲಿ ಕಾಂಗ್ರೆಸ್‌ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು–ಪ್ರಜಾವಾಣಿ ಚಿತ್ರ   

ಮಂಗಳೂರು: ಕೋವಿಡ್-19 ಸೋಂಕು ನಿಯಂತ್ರಣದಲ್ಲಿ ರಾಜ್ಯ ಸರ್ಕಾರ ಮತ್ತು ದಕ್ಷಿಣ ಕನ್ನಡ ಜಿಲ್ಲಾಡಳಿತ ವಿಫಲವಾಗಿದೆ ಎಂದು ಆರೋಪಿಸಿ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್‌ ಸಮಿತಿ ನೇತೃತ್ವದಲ್ಲಿ ಗುರುವಾರ ನಗರದಲ್ಲಿ ಪ್ರತಿಭಟನೆ ನಡೆಯಿತು.

ನಗರದಲ್ಲಿರುವ ಜಿಲ್ಲಾ ಸರ್ಕಾರಿ ವೆನ್ಲಾಕ್ ಆಸ್ಪತ್ರೆಯ ಎದುರಗಡೆ ರಸ್ತೆ ಬದಿಯಲ್ಲಿ ನಿಂತ ಕಾಂಗ್ರೆಸಿಗರು, ಮೌನ ಪ್ರತಿಭಟನೆ ನಡೆಸಿದರು.

ಬಳಿಕ ಸುದ್ದಿಗಾರರ ಜೊತೆ ಮಾತನಾಡಿದ ಮುಖಂಡರು, ‘ಕೋವಿಡ್–19 ಸೋಂಕಿತರ ಸಂಖ್ಯೆಯು ಜಿಲ್ಲೆಯಲ್ಲಿ ದಿನೇ ದಿನೇ ಹೆಚ್ಚಳವಾಗುತ್ತಿದೆ. ವೈರಸ್ ವ್ಯಾಪಕವಾಗಿ ಹರಡುತ್ತಿದೆ. ಇದನ್ನು ನಿಯಂತ್ರಿಸುವಲ್ಲಿ ಜಿಲ್ಲಾಡಳಿತವು ವಿಫಲವಾಗಿದೆ. ಅಲ್ಲದೇ, ಚಿಕಿತ್ಸೆಗೆ ನಿರಾಕರಿಸಿದ ಖಾಸಗಿ ಆಸ್ಪತ್ರೆಗಳ ಮೇಲೆ ಕ್ರಮ ಕೈಗೊಳ್ಳುತ್ತಲೂ ಇಲ್ಲ. ಖಾಸಗಿ ಆಸ್ಪತ್ರೆಗಳಲ್ಲಿ ಶೇ 50 ಹಾಸಿಗೆಗಳನ್ನು ಮೀಸಲು ಇಟ್ಟಿಲ್ಲ. ಅಲ್ಲಿಗೆ ಹೋಗುವ ಜನತೆ ಸಮಸ್ಯೆ ಎದುರಿಸುತ್ತಿದ್ದು, ತೀವ್ರ ಸಂಕಷ್ಟಕ್ಕೀಡಾಗಿದ್ದಾರೆ’ ಎಂದು ದೂರಿದರು.

ADVERTISEMENT

‘ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋವಿಡ್–19 ನಿಯಂತ್ರಣಕ್ಕಾಗಿ ಸರ್ಕಾರ ಮಾಡಿದಖರ್ಚಿನ ಲೆಕ್ಕವನ್ನು ಜನತೆಯ ಮುಂದೆ ಇಡಬೇಕು. ಜಿಲ್ಲಾಡಳಿತದ ತಪ್ಪು ನೀತಿಯೇ ಜಿಲ್ಲೆಯ 60ಕ್ಕೂ ಹೆಚ್ಚು ಮಂದಿ ಕೋವಿಡ್‌–19 ಸೋಂಕಿನಿಂದ ಸಾಯಲು ಕಾರಣವಾಗಿದೆ’ ಎಂದು ಶಾಸಕ ಯು.ಟಿ.ಖಾದರ್ ಆರೋಪಿಸಿದರು.

ಸಮಿತಿ ಅಧ್ಯಕ್ಷ ಹರೀಶ್ ಕುಮಾರ್, ಮಾಜಿ ಸಚಿವ ರಮಾನಾಥ ರೈ, ಮಾಜಿ ಶಾಸಕರಾದ ಜೆ.ಆರ್.ಲೋಬೊ, ಮೊಯ್ದೀನ್ ಬಾವಾ, ವಿಧಾನ ಪರಿಷತ್‌ ಮಾಜಿ ಸದಸ್ಯ ಐವನ್‌ ಡಿಸೋಜ, ಪಾಲಿಕೆ ಸದಸ್ಯ ಶಶಿಧರ ಹೆಗ್ಡೆ, ಟಿ.ಕೆ. ಸುಧೀರ್, ಪಿ.ವಿ.ಮೋಹನ್ ಮತ್ತಿತರರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.