ಮಂಗಳೂರು: ತ್ಯಾಜ್ಯದಿಂದ ಸುರತ್ಕಲ್ ಖಂಡಿಗೆ ಬಳಿ ನಂದಿನಿ ನದಿ ಮಲಿನವಾಗುತ್ತಿರುವ ಬಗ್ಗೆ ಸಾರ್ವಜನಿಕ ದೂರುಗಳ ಹಿನ್ನೆಲೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಬುಧವಾರ ಸ್ಥಳಕ್ಕೆ ಭೇಟಿ ನೀಡಿದರು.
ನಂದಿನಿ ನದಿ ಸೇತುವೆಯಲ್ಲಿ ನಿಂತು ಪರಿಶೀಲನೆ ನಡೆಸಿದ ಅವರು, ಸ್ಥಳೀಯರ ಅಹವಾಲು ಆಲಿಸಿದರು.
ಹಲವು ವರ್ಷಗಳಿಂದ ನದಿಗೆ ಸ್ಥಳೀಯ ವೈದ್ಯಕೀಯ ಕಾಲೇಜಿನಿಂದ ತ್ಯಾಜ್ಯ ಹರಿದು ಬರುತ್ತಿದೆ. ಸುರತ್ಕಲ್ ವೆಟ್ ವೆಲ್ ನಿಂದಲೂ ತ್ಯಾಜ್ಯವನ್ನು ನೇರವಾಗಿ ಬಿಡಲಾಗುತ್ತಿದೆ ಎಂದು ಸಾರ್ವಜನಿಕರು ತಿಳಿಸಿದರು.
ಶಾಸಕ ಉಮಾನಾಥ ಕೋಟ್ಯಾನ್ ಮಾತನಾಡಿ, ನದಿ ಮಾಲಿನ್ಯದಿಂದ ಸ್ಥಳೀಯರಿಗೆ ತೀವ್ರ ಸಮಸ್ಯೆ ಆಗಿದೆ. ಇದಕ್ಕೆ ಸಾರ್ವಜನಿಕರು ಹಲವು ಬಾರಿ ಸಂಬಂಧಿಸಿದವರ ಗಮನಕ್ಕೆ ತಂದರೂ ಸಮಸ್ಯೆ ಪರಿಹಾರವಾಗಿಲ್ಲ ಎಂದರು.
ಮಹಾನಗರ ಪಾಲಿಕೆ ಆಯುಕ್ತರು ಹಾಗೂ ಮಾಲಿನ್ಯ ನಿಯಂತ್ರಣ ಮಂಡಳಿ ಅಧಿಕಾರಿಗಳಿಂದ ಮಾಹಿತಿ ಪಡೆದ ಸಚಿವರು, ನದಿಗೆ ಹರಿದು ಬರುವ ತ್ಯಾಜ್ಯವನ್ನು ತಕ್ಷಣದಿಂದಲೇ ನಿಲ್ಲಿಸಬೇಕು. ಇದಕ್ಕೆ ಕಾರಣರಾದವರ ವಿರುದ್ಧ ಕ್ರಮ ಕೈಗೊಳ್ಳಬೇಕು. ಮಂಗಳೂರು ಮಹಾನಗರಪಾಲಿಕೆಯು ತ್ಯಾಜ್ಯ ಸಂಸ್ಕರಣಾ ಘಟಕದಲ್ಲಿ ತಂತ್ರಜ್ಞಾನ ಬಳಸಿಕೊಂಡು ತ್ಯಾಜ್ಯ ಶುದ್ಧೀಕರಣ ಮಾಡಬೇಕು. ಶೀಘ್ರವೇ ಈ ಬಗ್ಗೆ ಸಭೆ ನಡೆಸಲಾಗುವುದು ಎಂದರು.
ಮಾಜಿ ಸಚಿವ ಅಭಯಚಂದ್ರ ಜೈನ್, ಹೆಚ್ಚುವರಿ ಜಿಲ್ಲಾಧಿಕಾರಿ ಜಿ. ಸಂತೋಷ್, ಮಹಾನಗರಪಾಲಿಕೆ ಆಯುಕ್ತ ರವಿಚಂದ್ರ ನಾಯಕ್, ಮಂಗಳೂರು ಉಪ ವಿಭಾಗಾಧಿಕಾರಿ ಹರ್ಷವರ್ಧನ್ ಮತ್ತಿತರರು ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.