
ಮಂಗಳೂರು: 72ನೇ ಅಖಿಲ ಭಾರತ ಸಹಕಾರ ಸಪ್ತಾಹದ ರಾಜ್ಯ ಮಟ್ಟದ ಕಾರ್ಯಕ್ರಮವು ನ.16ರಂದು ಬೆಳಿಗ್ಗೆ 10 ಗಂಟೆಗೆ ಇಲ್ಲಿಯ ಕರಾವಳಿ ಉತ್ಸವ ಮೈದಾನದಲ್ಲಿ ನಡೆಯಲಿದೆ. ‘ಸಹಕಾರ ಸಂಸ್ಥೆಗಳ ಮೂಲಕ ಗ್ರಾಮೀಣ ಅಭಿವೃದ್ಧಿಯ ಬಲವರ್ಧನೆ’ ಈ ಧ್ಯೇಯವಾಕ್ಯದೊಂದಿಗೆ ಕಾರ್ಯಕ್ರಮ ನಡೆಯಲಿದೆ ಎಂದು ಎಸ್‌ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಎಂ.ಎನ್. ರಾಜೇಂದ್ರ ಕುಮಾರ್ ಹೇಳಿದರು.
ಶುಕ್ರವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ‘ಸಹಕಾರ ಚಳವಳಿ ನಡೆದು ಬಂದ ಹಾದಿಯ ಅವಲೋಕನ, ಭವಿಷ್ಯದ ಸಹಕಾರ ಚಳವಳಿಯನ್ನು ಯಶಸ್ವಿಯಾಗಿ ಮುನ್ನಡೆಸುವ ಬಗ್ಗೆ ಚರ್ಚಿಸಲಾಗುವುದು. ವಿಧಾನಸಭೆ ಸ್ಪೀಕರ್ ಯು.ಟಿ.ಖಾದರ್ ಕಾರ್ಯಕ್ರಮ ಉದ್ಘಾಟಿಸುವರು’ ಎಂದರು.
ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಮಾಣಿಕ್ಯ ಪ್ರಶಸ್ತಿ ಪ್ರದಾನ ಮಾಡುವರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳಕರ, ರಾಜ್ಯ ಸಹಕಾರ ಮಹಾಮಂಡಳದ ಅಧ್ಯಕ್ಷ ಜಿ.ಟಿ. ದೇವೇಗೌಡ, ಶಾಸಕ ಕೆ.ಎನ್.ರಾಜಣ್ಣ, ಸಂಸದ ಬ್ರಿಜೇಶ್ ಚೌಟ, ಸ್ಥಳೀಯ ಜನಪ್ರತಿನಿಧಿಗಳು ಭಾಗವಹಿಸುವರು. ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದಿಂದ ನಂದಿನಿಯ ಹೊಸ ಉತ್ಪನ್ನಗಳ ಬಿಡುಗಡೆ ನಡೆಯಲಿದೆ ಎಂದು ಹೇಳಿದರು.
ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ, ರಾಜ್ಯ ಸಹಕಾರ ಮಾರಾಟ ಮಹಾಮಂಡಳ, ಎಸ್‌ಸಿಡಿಸಿಸಿ ಬ್ಯಾಂಕ್ ನೇತೃತ್ವದಲ್ಲಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್, ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ, ನವೋದಯ ಗ್ರಾಮ ವಿಕಾಸ ಚಾರಿಟಬಲ್ ಟ್ರಸ್ಟ್, ಕೃಷಿ ಪತ್ತಿನ ಸಹಕಾರ ಸಂಘಗಳು, ಪಟ್ಟಣ ಸಹಕಾರ ಬ್ಯಾಂಕ್‌ಗಳು ಸಹಯೋಗ ನೀಡಿವೆ ಎಂದು ತಿಳಿಸಿದರು.
ಸಹಕಾರ ಸಂಘಗಳ ಜಂಟಿ ನಿಬಂಧಕ ಪ್ರಸಾದ್ ರೆಡ್ಡಿ, ಉಪ ನಿಬಂಧಕ ರಮೇಶ್ ಎಚ್.ಎನ್ , ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ಅಧ್ಯಕ್ಷ ರವಿರಾಜ್ ಹೆಗ್ಡೆ, ಉಭಯ ಜಿಲ್ಲೆಗಳ ಸಹಕಾರಿ ಯೂನಿಯನ್ ಅಧ್ಯಕ್ಷರಾದ ಶಶಿಕುಮಾರ್ ರೈ ಬಾಲ್ಯೋಟ್ಟು, ಜಯಕರ ಶೆಟ್ಟಿ ಇಂದ್ರಾಳಿ, ಬ್ಯಾಂಕ್ ಉಪಾಧ್ಯಕ್ಷ ವಿನಯಕುಮಾರ್ ಸೂರಿಂಜೆ, ನಿರ್ದೇಶಕರಾದ ಭಾಸ್ಕರ್ ಎಸ್. ಕೋಟ್ಯಾನ್, ವಾದಿರಾಜ ಶೆಟ್ಟಿ , ಐಕಳಬಾವ ದೇವಿಪ್ರಸಾದ್ ಶೆಟ್ಟಿ ಎಸ್.ಬಿ.ಜಯರಾಂ ರೈ ,ಜೈರಾಜ್ ಬಿ. ರೈ, ಮೋನಪ್ಪ ಶೆಟ್ಟಿ ಎಕ್ಕಾರು, ಎಂ.ಮಹೇಶ್ ಹಗ್ಡೆ, ಅಶೋಕ್ ಕುಮಾರ್ ಶೆಟ್ಟಿ, ಸದಾಶಿವ ಉಳ್ಳಾಲ್, ರಾಜೇಶ್ ರಾವ್, ಕುಶಲಪ್ಪ ಗೌಡ, ಎಸ್.ಎನ್.ಮನ್ಮಥ, ಸ್ಕ್ಯಾಡ್ಸ್ ಅಧ್ಯಕ್ಷ ರವೀಂದ್ರ ಕಂಬಳಿ, ಬ್ಯಾಂಕ್ ಸಿಇಒ ಗೋಪಾಲಕೃಷ್ಣ ಭಟ್ ಉಪಸ್ಥಿತರಿದ್ದರು.
‘ಸಹಕಾರ ಮಾಣಿಕ್ಯ’
ಸಮ್ಮಾನ ಸರ್ವಾಂಗೀಣ ಪ್ರಗತಿ ಸಾಧಿಸಿದ ಸಹಕಾರ ಸಂಘಗಳಿಗೆ 5 ಗ್ರಾಂ ಚಿನ್ನ ₹10 ಸಾವಿರ ನಗದು ಪಾರಿತೋಷಕದೊಂದಿಗೆ ‘ಸಹಕಾರ ಮಾಣಿಕ್ಯ’ ಪ್ರಶಸ್ತಿ ನೀಡಿ ಗೌರವಿಸಲಾಗುವುದು. ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಕೃಷಿ ಪತ್ತಿನ ಸಹಕಾರಿ ಸಂಘಗಳು ಮಹಿಳಾ ಸಹಕಾರಿ ಸಂಘಗಳು ಮೀನುಗಾರಿಕಾ ಸಹಕಾರಿ ಸಂಘಗಳು ಕ್ರೆಡಿಟ್ ಸೊಸೈಟಿಗಳು ಸೌಹಾರ್ದ ಸಹಕಾರಿ ಸಂಘಗಳಿಗೆ ಪ್ರಶಸ್ತಿ ನೀಡಿ ಗೌರವಿಸಲಾಗುವುದು. ನವೋದಯ ಸ್ವ-ಸಹಾಯ ಗುಂಪುಗಳ ಅತ್ಯುತ್ತಮ ಸ್ವ-ಸಹಾಯ ಗುಂಪುಗಳನ್ನು ಪುರಸ್ಕರಿಸಲಾಗುವುದು ಎಂದು ರಾಜೇಂದ್ರ ಕುಮಾರ್ ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.