ADVERTISEMENT

ಕೊರೊನಾ ತಡೆಗೆ ಕಟ್ಟುನಿಟ್ಟಿನ ಕ್ರಮ: ಇಂದು ದಕ್ಷಿಣ ಕನ್ನಡ ಜಿಲ್ಲೆ ಸಂಪೂರ್ಣ ಬಂದ್‌

​ಪ್ರಜಾವಾಣಿ ವಾರ್ತೆ
Published 28 ಮಾರ್ಚ್ 2020, 2:46 IST
Last Updated 28 ಮಾರ್ಚ್ 2020, 2:46 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಮಂಗಳೂರು: ಕೇರಳದ ಕಾಸರಗೋಡು ಸೇರಿದಂತೆ ನೆರೆಯ ಜಿಲ್ಲೆಗಳಲ್ಲಿ ‘ಕೋವಿಡ್‌–19’ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿರುವ ಕಾರಣದಿಂದ ಶನಿವಾರ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ವಾಣಿಜ್ಯ ವಹಿವಾಟುಗಳು ಸೇರಿದಂತೆ ಎಲ್ಲ ಚಟುವಟಿಕೆಗಳನ್ನು ಬಂದ್‌ ಮಾಡಲು ಆದೇಶಿಸಲಾಗಿದೆ.

ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅಧ್ಯಕ್ಷತೆಯಲ್ಲಿ ಶುಕ್ರವಾರ ರಾತ್ರಿ ನಡೆದ ಉನ್ನತ ಮಟ್ಟದ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.

ಸಂಸದ ನಳಿನ್‌ ಕುಮಾರ್‌ ಕಟೀಲ್‌, ಜಿಲ್ಲೆಯ ಶಾಸಕರು, ಉಸ್ತುವಾರಿ ಕಾರ್ಯದರ್ಶಿ ವಿ.ಪೊನ್ನುರಾಜ್‌ ಸೇರಿದಂತೆ ಹಿರಿಯ ಅಧಿಕಾರಿಗಳು ಸಭೆಯಲ್ಲಿದ್ದರು.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಈವರೆಗೆ ಏಳು ‘ಕೋವಿಡ್‌–19’ ಪ್ರಕರಣಗಳು ದೃಢಪಟ್ಟಿವೆ. ಕಾಸರಗೋಡಿನಲ್ಲಿ ಒಂದೇ ದಿನ 34 ಹೊಸ ಪ್ರಕರಣಗಳು ದೃಢಪಟ್ಟಿರುವುದು ಮತ್ತು ಉತ್ತರ ಕನ್ನಡ ಜಿಲ್ಲೆಯಲ್ಲೂ ಹೊಸ ಪ್ರಕರಣಗಳು ವರದಿಯಾಗಿವೆ. ಈ ಎಲ್ಲ ಕಾರಣಗಳಿಂದ ಸೋಂಕು ಮತ್ತಷ್ಟು ವ್ಯಾಪಿಸದಂತೆ ತಡೆಯಲು ಒಂದು ದಿನ ಸಂಪೂರ್ಣ ಬಂದ್‌ ಮಾಡಲು ನಿರ್ಧರಿಸಲಾಗಿದೆ.

‘ಜಿಲ್ಲೆಯಲ್ಲಿ ಸಾರ್ವಜನಿಕರ ಓಡಾಟವನ್ನು ನಿರ್ಬಂಧಿಸದಿದ್ದರೆ ಮುಂದಿನ ದಿನಗಳು ಅಪಾಯಕಾರಿಯಾಗಲಿವೆ ಎಂಬ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ’ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್‌ ತಿಳಿಸಿದ್ದಾರೆ.

ಸೇವೆ ಲಭ್ಯ: ಹಾಲು, ವೈದ್ಯಕೀಯ ಸೇವೆ, ದಿನಪತ್ರಿಕೆ ಅಗತ್ಯವಸ್ತುಗಳ ಸಾಗಣೆಗೆ ಯಾವುದೇ ನಿರ್ಬಂಧ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.