ADVERTISEMENT

ಕೋವಿಡ್ ನಿಯಮ ಕಡ್ಡಾಯ ಪಾಲಿಸಿ: ಜಿಲ್ಲಾಧಿಕಾರಿ ಡಾ. ರಾಜೇಂದ್ರ

ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆಯಲ್ಲಿ ಜಿಲ್ಲಾಧಿಕಾರಿ ಡಾ. ರಾಜೇಂದ್ರ

​ಪ್ರಜಾವಾಣಿ ವಾರ್ತೆ
Published 11 ಏಪ್ರಿಲ್ 2021, 4:50 IST
Last Updated 11 ಏಪ್ರಿಲ್ 2021, 4:50 IST
ಮಂಗಳೂರಿನಲ್ಲಿ ಶನಿವಾರ ನಡೆದ ಜಿಲ್ಲಾ ವಿಪತ್ತು ನಿರ್ವಹಣಾ ಸಮಿತಿ ಸಭೆಯಲ್ಲಿ ಜಿಲ್ಲಾಧಿಕಾರಿ ಡಾ.ಕೆ.ವಿ. ರಾಜೇಂದ್ರ ಮಾತನಾಡಿದರು.
ಮಂಗಳೂರಿನಲ್ಲಿ ಶನಿವಾರ ನಡೆದ ಜಿಲ್ಲಾ ವಿಪತ್ತು ನಿರ್ವಹಣಾ ಸಮಿತಿ ಸಭೆಯಲ್ಲಿ ಜಿಲ್ಲಾಧಿಕಾರಿ ಡಾ.ಕೆ.ವಿ. ರಾಜೇಂದ್ರ ಮಾತನಾಡಿದರು.   

ಮಂಗಳೂರು: ರಾಜ್ಯದಲ್ಲಿ ಕೋವಿಡ್-19 ಸೋಂಕು ಹೆಚ್ಚಾಗುತ್ತಿದ್ದು, ಸರ್ಕಾರ ಹೊರಡಿಸುವ ಮಾರ್ಗಸೂಚಿಗಳನ್ನು ಸೇರಿದಂತೆ ನಿಯಮಗಳನ್ನು ಚಾಚೂ ತಪ್ಪದೆ ಪಾಲಿಸಬೇಕು ಎಂದು ಜಿಲ್ಲಾಧಿ ಕಾರಿ ಡಾ. ರಾಜೇಂದ್ರ ಕೆ.ವಿ. ತಿಳಿಸಿದರು.

ಶನಿವಾರ ನಡೆದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಆರೋಗ್ಯ ಇಲಾಖೆಯವರು ಕೋವಿಡ್ ಪರೀಕ್ಷೆಗಳನ್ನು ಹೆಚ್ಚಿಸುವುದರೊಂದಿಗೆ ಸೋಂಕಿತರನ್ನು ಗುರುತಿಸಿ, ಚಿಕಿತ್ಸೆ ನೀಡಬೇಕು. ಸೋಂಕಿತರೊಂದಿಗೆ ಸಂಪರ್ಕ ಹೊಂದಿದವರನ್ನು ಗುರುತಿಸಿ ಕೋವಿಡ್ ಪರೀಕ್ಷೆಗೆ ಒಳಪಡಿಸಬೇಕು ಎಂದರು.

ADVERTISEMENT

ರಾತ್ರಿ ಕರ್ಫ್ಯೂ ನಿಯಮಗಳು ಸೇರಿದಂತೆ ಸುರಕ್ಷಿತ ಅಂತರ ಹಾಗೂ ಮಾಸ್ಕ್ ಧರಿಸುವಿಕೆ ಕಡ್ಡಾಯವಾಗಿದ್ದು, ಪ್ರತಿಯೊಬ್ಬರು ಪಾಲಿಸಬೇಕು. ತಪ್ಪಿದ್ದಲ್ಲಿ ಸಂಬಂಧಪಟ್ಟ ಅಧಿಕಾರಿಗಳು ಅಂಥವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಸೂಚನೆ ನೀಡಿದರು.

ವಿಪತ್ತು ನಿರ್ವಹಣೆ ಕಾಯ್ದೆಯ ಅನ್ವಯ ರಾತ್ರಿ ಕರ್ಫ್ಯೂ ಅನ್ನು ಶನಿವಾರದಿಂದ ಏ.20 ರವರೆಗೆ ರಾತ್ರಿ 10 ಗಂಟೆಯಿಂದ ಬೆಳಿಗ್ಗೆ 5 ಗಂಟೆಯವರೆಗೆ ಜಾರಿಗೊಳಿಸಲಾಗಿದೆ. ಈ ಸಂದರ್ಭದಲ್ಲಿ ಕೆಲವು ಅತ್ಯವಶ್ಯಕ ಸೇವೆಗಳಿಗೆ ಮಾತ್ರ ಅನುಮತಿ ನೀಡಲಾಗಿದೆ. ಉಳಿದಂತೆ ಎಲ್ಲ ಸೇವೆಗಳನ್ನು ಹಾಗೂ ಸಂಚಾರಗಳನ್ನು ನಿಷೇಧಿಸಲಾಗಿದೆ ಎಂದು ತಿಳಿಸಿದರು.

ಎಲ್ಲ ಜಿಲ್ಲಾ ಮತ್ತು ತಾಲ್ಲೂಕು ಆಸ್ಪತ್ರೆಗಳಲ್ಲಿ ಕೋವಿಡ್ ಸೋಂಕಿತರಿಗೆ ಚಿಕಿತ್ಸೆ ನೀಡಲು ಅಗತ್ಯವಿರುವ ಔಷಧಿ ಸೇರಿದಂತೆ ಮತ್ತಿತರ ಉಪಕರಣಗಳನ್ನು ಕೊರತೆ ಆಗದಂತೆ ದಾಸ್ತಾನು ಇಟ್ಟುಕೊಳ್ಳಬೇಕು ಎಂದು ಸೂಚನೆ ನೀಡಿದರು.

ಹೆಚ್ಚುವರಿ ಜಿಲ್ಲಾಧಿಕಾರಿ ಎಂ.ಜೆ. ರೂಪಾ, ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ್ ಸೋನಾವಣೆ, ಪಾಲಿಕೆ ಆಯುಕ್ತ ಅಕ್ಷಯ್ ಶ್ರೀಧರ್ ಹಾಗೂ ಅಧಿಕಾರಿಗಳು ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.