ADVERTISEMENT

ಕೋವಿಡ್: ಧರ್ಮಸ್ಥಳಕ್ಕೆ ಹೋಗಿದ್ದ ಭಕ್ತರನ್ನು ತಡೆದು ಹಿಂದೆ ಕಳಿಸಿದ ಪೊಲೀಸರು

​ಪ್ರಜಾವಾಣಿ ವಾರ್ತೆ
Published 20 ಜೂನ್ 2021, 7:23 IST
Last Updated 20 ಜೂನ್ 2021, 7:23 IST
ಗುಂಡ್ಯ ಚೆಕ್‌ಪೋಸ್ಟ್‌ನಲ್ಲಿ ಸಾಲುಗಟ್ಟಿ ನಿಂತಿರುವ ವಾಹನಗಳು
ಗುಂಡ್ಯ ಚೆಕ್‌ಪೋಸ್ಟ್‌ನಲ್ಲಿ ಸಾಲುಗಟ್ಟಿ ನಿಂತಿರುವ ವಾಹನಗಳು    

ಮಂಗಳೂರು: ಧರ್ಮಸ್ಥಳ ಕ್ಷೇತ್ರಕ್ಕೆ ಬರುವ ವಾಹನಗಳನ್ನು ತಡೆದು ವಾಪಸ್‌ ಕಳುಹಿಸುವುದೇ ಪೊಲೀಸರಿಗೆ ಹರಸಾಹಸವಾಗಿದೆ. ಶನಿವಾರ ಮಧ್ಯರಾತ್ರಿ 12ರಿಂದ ಬೆಳಗಿನ ಜಾವ 3 ಗಂಟೆಯವರೆಗೆ ಗುಂಡ್ಯ ಚೆಕ್‌ಪೋಸ್ಟ್‌ನಲ್ಲಿ ಸುಮಾರು 60 ವಾಹನಗಳನ್ನು ತಡೆದು, ವಿಚಾರಿಸಿ ವಾಪಸ್ ಕಳುಹಿಸಿದರು.

ಕೋವಿಡ್ ಪಾಸಿಟಿವಿಟಿ ದರ ಕಡಿಮೆ ಇರುವ ಜಿಲ್ಲೆಗಳಲ್ಲಿ ಸೆಮಿ ಅನ್‌ಲಾಕ್ ಆಗಿರುವ ಕಾರಣ ಆ ಜಿಲ್ಲೆಗಳ ಜನರು ಧರ್ಮಸ್ಥಳ, ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರಗಳಿಗೆ ಬರುತ್ತಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಲಾಕ್‌ಡೌನ್ ಮುಂದುವರಿದಿರುವ ಕಾರಣ ಇಲ್ಲಿನ ದೇವಾಲಯಗಳಲ್ಲಿ ಸಾರ್ವಜನಿಕರ ಪ್ರವೇಶಕ್ಕೆ ಅವಕಾಶವಿಲ್ಲ. ಇದನ್ನು ತಿಳಿಯದ ಹೊರ ಜಿಲ್ಲೆಗಳ ಭಕ್ತರು ದೇವರ ದರ್ಶನಕ್ಕೆ ಬರುತ್ತಿದ್ದಾರೆ.

ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ ಬಿಗಿಗೊಳಿಸಿರುವ ಪೊಲೀಸರು, ಪ್ರತಿದಿನ ಬರುವ ನೂರಾರು ವಾಹನಗಳನ್ನು ತಡೆದು, ವಾಪಸ್ ಕಳುಹಿಸುತ್ತಿದ್ದಾರೆ.

ADVERTISEMENT

‘ಜಿಲ್ಲೆಯಲ್ಲಿ ಜಾರಿಯಲ್ಲಿರುವ ಕೋವಿಡ್-19 ಮಾರ್ಗಸೂಚಿಗಳ ಅನ್ವಯ ದೇವಸ್ಥಾನ, ಚರ್ಚ್ ಹಾಗೂ ಮಸೀದಿಗಳೂ ಒಳಗೊಂಡಂತೆ ಜಿಲ್ಲೆಯ ಎಲ್ಲ ಧಾರ್ಮಿಕ ಕೇಂದ್ರಗಳಿಗೆ ಸಾರ್ವಜನಿಕ ಪ್ರವೇಶವನ್ನು ಕಟ್ಟುನಿಟ್ಟಾಗಿ ನಿರ್ಬಂಧಿಸಲಾಗಿದೆ. ಇನ್ನು ಎರಡು ವಾರಗಳ ಕಾಲ ಧಾರ್ಮಿಕ ಕೇಂದ್ರಗಳಿಗೆ ಪ್ರವೇಶ ಇಲ್ಲ’ ಎಂದು ಜಿಲ್ಲಾಧಿಕಾರಿ ಡಾ.ಕೆ.ವಿ. ರಾಜೇಂದ್ರ ಸ್ಪಷ್ಟಪಡಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.