ADVERTISEMENT

ಕೋವಿಡ್‌–19: ದಕ್ಷಿಣ ಕನ್ನಡ ಜಿಲ್ಲೆ ಸಂಪೂರ್ಣ ಬಂದ್

​ಪ್ರಜಾವಾಣಿ ವಾರ್ತೆ
Published 28 ಮಾರ್ಚ್ 2020, 5:25 IST
Last Updated 28 ಮಾರ್ಚ್ 2020, 5:25 IST
 ಮಂಗಳೂರು ನಗರದ ಸೆಂಟ್ರಲ್ ಮಾರ್ಕೆಟ್ ಪ್ರದೇಶದಲ್ಲಿ ಬೆಳಿಗ್ಗೆ ಕಂಡುಬಂದ ದೃಶ್ಯ - ಪ್ರಜಾವಾಣಿ ಚಿತ್ರ/ ಗೋವಿಂದರಾಜ ಜವಳಿ
ಮಂಗಳೂರು ನಗರದ ಸೆಂಟ್ರಲ್ ಮಾರ್ಕೆಟ್ ಪ್ರದೇಶದಲ್ಲಿ ಬೆಳಿಗ್ಗೆ ಕಂಡುಬಂದ ದೃಶ್ಯ - ಪ್ರಜಾವಾಣಿ ಚಿತ್ರ/ ಗೋವಿಂದರಾಜ ಜವಳಿ   
""

ಮಂಗಳೂರು: ಕೊರೊನಾ ವೈರಸ್ ಸೋಂಕು ತಡೆಗೆ ಶನಿವಾರ ಬೆಳಿಗ್ಗೆಯಿಂದ ದಕ್ಷಿಣ ಕನ್ನಡ ಜಿಲ್ಲೆ ಸಂಪೂರ್ಣ ಬಂದ್ ಆಗಿದೆ. ಆಸ್ಪತ್ರೆಗಳು, ಔಷಧಿ ಅಂಗಡಿಗಳ ಹೊರತಾಗಿ ಯಾವುದೇ ಚಟುವಟಿಕೆಯೂ ನಡೆಯುತ್ತಿಲ್ಲ.

ನೆರೆಯ ಕಾಸರಗೋಡು ಜಿಲ್ಲೆಯಲ್ಲಿ ಒಂದೇ ದಿನ 34 ಪ್ರಕರಣಗಳು ದೃಢಪಟ್ಟಿರುವುದು ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಬ್ಬರಿಗೆ ಸೋಂಕು ತಗುಲಿರುವುದು ಖಚಿತವಾಗಿರುವ ಕಾರಣದಿಂದ ಭೀತಿ ಹೆಚ್ಚಿದೆ. ಸೋಂಕು ಹಬ್ಬದಂತೆ ತಡೆಯಲು ಶನಿವಾರ ಸಂಪೂರ್ಣ ಬಂದ್ ಜಾರಿಗೆ ಶುಕ್ರವಾರ ರಾತ್ರಿ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ತೀರ್ಮಾನಿಸಲಾಗಿತ್ತು.

ಶನಿವಾರ ಬೆಳಿಗ್ಗೆ ಕೆಲಕಾಲ ಹಾಲು ಮಾರಾಟಕ್ಕೆ ಮಾತ್ರ ಅವಕಾಶ ನೀಡಲಾಗಿತ್ತು. ಇಲ್ಲಿನ ಕೇಂದ್ರ ಮಾರುಕಟ್ಟೆಯಲ್ಲಿ ಕೆಲವರು ವ್ಯಾಪಾರಕ್ಕೆ ಯತ್ನಿಸಿದ್ದು, ಸ್ಥಳಕ್ಕೆ ಬಂದ ಪೊಲೀಸರು ಅಂಗಡಿಗಳನ್ನು ಬಂದ್ ಮಾಡಿಸಿದರು.

ADVERTISEMENT

ರಸ್ತೆಗಳಲ್ಲಿ ಜನ ಸಂಚಾರ ಬಹುತೇಕ ಸ್ಥಗಿತವಾಗಿದೆ. ವಾಹನಗಳು ಕಡಿಮೆ ಸಂಖ್ಯೆಯಲ್ಲಿ ಒಡಾಡುತ್ತಿವೆ. ಆಸ್ಪತ್ರೆ ಭೇಟಿ ಮತ್ತು ಔಷಧಿ ಖರೀದಿಸಲು ತೆರಳುವವರಿಗೆ ಮಾತ್ರ ಅವಕಾಶ ನೀಡಲಾಗುತ್ತಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.