ADVERTISEMENT

‘ಕೊರೊನಾ’ ಆತಂಕ‌ ಬೇಡ: ಸಚಿವ ಕೋಟ ಶ್ರೀನಿವಾಸ ಪೂಜಾರಿ

ತುರ್ತು ಸಭೆ ನಡೆಸಿ ಪರಿಶೀಲನೆ ನಡೆಸಿದ ಉಸ್ತುವಾರಿ ಸಚಿವ

​ಪ್ರಜಾವಾಣಿ ವಾರ್ತೆ
Published 5 ಫೆಬ್ರುವರಿ 2020, 15:27 IST
Last Updated 5 ಫೆಬ್ರುವರಿ 2020, 15:27 IST
ಕೊರೊನಾ ವೈರಸ್ ಕುರಿತ ಮುಂಜಾಗ್ರತೆಯ ಹಿನ್ನೆಲೆಯಲ್ಲಿ ಮಂಗಳೂರಿನ ಕೆ.ಎಸ್.ಹೆಗ್ಡೆ ಆಸ್ಪತ್ರೆಯಲ್ಲಿ ಸಿದ್ಧತೆ ಮಾಡಿಕೊಂಡಿರುವುದು
ಕೊರೊನಾ ವೈರಸ್ ಕುರಿತ ಮುಂಜಾಗ್ರತೆಯ ಹಿನ್ನೆಲೆಯಲ್ಲಿ ಮಂಗಳೂರಿನ ಕೆ.ಎಸ್.ಹೆಗ್ಡೆ ಆಸ್ಪತ್ರೆಯಲ್ಲಿ ಸಿದ್ಧತೆ ಮಾಡಿಕೊಂಡಿರುವುದು   

ಮಂಗಳೂರು: ‘ಕೊರೊನಾ ವೈರಸ್ ಬಗ್ಗೆ ಜಿಲ್ಲೆಯ ಜನತೆ ಆತಂಕ ಪಡುವ ಅಗತ್ಯವಿಲ್ಲ. ಆದರೆ, ಮುಂಜಾಗ್ರತಾ ಕ್ರಮಗಳನ್ನು ಅಳವಡಿಸಿಕೊಳ್ಳಿ’ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಸಲಹೆ ನೀಡಿದರು.

‘ಕೊರೊನಾ ವೈರಸ್’ ಮುನ್ನೆಚ್ಚರಿಕೆ ಹಿನ್ನೆಲೆಯಲ್ಲಿ ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ತುರ್ತು ಸಭೆ ನಡೆಸಿದ ಅವರು, ‘ಪಕ್ಕದ ಕೇರಳ ರಾಜ್ಯದಲ್ಲಿ ಕೊರೊನಾ ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲೂ ಮುನ್ನೆಚ್ಚರಿಕಾ ಕ್ರಮಕೈಗೊಳ್ಳಲಾಗಿದೆ’ ಎಂದರು.

‘ಸಾರ್ವಜನಿಕರಿಗೆ ಯಾವುದೇ ಸಂಶಯವಿದ್ದರೆ, ಮಾಹಿತಿ‌ ಹಾಗೂ ನೆರವಿಗೆ ಆರೋಗ್ಯ ಇಲಾಖೆಯ ಸಹಾಯವಾಣಿ 104ಕ್ಕೆ ಕರೆ ಮಾಡಬಹುದು. ಜಿಲ್ಲಾಡಳಿತವು ಸಂಪೂರ್ಣ ಸನ್ನದ್ಧವಾಗಿದೆ’ ಎಂದು ಅವರು ಭರವಸೆ ನೀಡಿದರು.

ADVERTISEMENT

ಜಿಲ್ಲಾಧಿಕಾರಿ ಸಿಂಧೂ ಬಿ.ರೂಪೇಶ್ ಮಾತನಾಡಿ, ‘ವಿಮಾನ ನಿಲ್ದಾಣ, ರೈಲು ನಿಲ್ದಾಣಗಳಲ್ಲಿ ವಿಶೇಷವಾಗಿ ಅಂತರ ರಾಷ್ಟ್ರೀಯ ಪ್ರಯಾಣಿಕರ ಆರೋಗ್ಯ ತಪಾಸಣೆಗೆ ವ್ಯವಸ್ಥೆ ಮಾಡಲಾಗಿದೆ. ಚೀನಾದಿಂದ ಮಂಗಳೂರಿಗೆ ನೇರ ವಿಮಾನ ಯಾನ ಇಲ್ಲ. ಹೀಗಾಗಿ, ಕೊರೊನಾ ವೈರಸ್ ಬಗ್ಗೆ ಆತಂಕವಿಲ್ಲ. ಆದರೂ, ಕೆಲ ದಿನಗಳ ಹಿಂದೆ ಚೀನಾದಿಂದ ಜಿಲ್ಲೆಗೆ ಬಂದಿದ್ದ ಇಬ್ಬರ ಆರೋಗ್ಯ ತಪಾಸಣೆ ಮಾಡಲಾಗಿದ್ದು, ಯಾವುದೇ ರೋಗ ಲಕ್ಷಣ ಅವರಲ್ಲಿ ಕಂಡುಬಂದಿರುವುದಿಲ್ಲ’ ಎಂದರು.

ವಿಶ್ವ ಆರೋಗ್ಯ ಸಂಸ್ಥೆಯ ಪ್ರತಿನಿಧಿ ಡಾ. ಸತೀಶ್ಚಂದ್ರ ಮಾತನಾಡಿ, ‘ಕೈಗಳನ್ನು ಸ್ವಚ್ಛವಾಗಿಟ್ಟುಕೊಳ್ಳುವುದು ಹಾಗೂ ಸೀನುವಾಗ ಕರವಸ್ತ್ರ ಹಿಡಿದಿಕೊಳ್ಳುವುದು ಈ ರೋಗ ನಿಯಂತ್ರಣದ ಪ್ರಮುಖ ಕೆಲಸವಾಗಿದೆ’ ಎಂದರು.

ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಯೋಜನಾಧಿಕಾರಿ ಸಂಧ್ಯಾ, ಡಾ. ನವೀನ್ ಚಂದ್ರ, ಡಾ. ರಾಜೇಶ್, ವಿವಿಧ ಇಲಾಖಾಧಿಕಾರಿಗಳು, ವಿಮಾನ ನಿಲ್ದಾಣ, ರೈಲು, ಎನ್.ಎಂ.ಪಿ.ಟಿ. ಅಧಿಕಾರಿಗಳು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.