ADVERTISEMENT

ದೆಹಲಿ ಚಲೋಗೆ ಜಿಲ್ಲೆಯ ರೈತರು: ನಾರಾಯಣ ಸ್ವಾಮಿ

​ಪ್ರಜಾವಾಣಿ ವಾರ್ತೆ
Published 6 ಡಿಸೆಂಬರ್ 2022, 16:25 IST
Last Updated 6 ಡಿಸೆಂಬರ್ 2022, 16:25 IST

ಮಂಗಳೂರು: ರೈತರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಡಿ. 19ರಂದು ಹಮ್ಮಿಕೊಂಡಿರುವ ರೈತ ಘರ್ಜನಾ ರ್‍ಯಾಲಿ, ದೆಹಲಿ ಚಲೋ ಕಾರ್ಯಕ್ರಮದಲ್ಲಿ ಜಿಲ್ಲೆಯಿಂದ ನೂರಾರು ರೈತರು ಭಾಗವಹಿಸಲಿದ್ದಾರೆ ಎಂದು ಭಾರತೀಯ ಕಿಸಾನ್ ಸಂಘದ ಜಿಲ್ಲಾ ಘಟಕದ ಪ್ರಾಂತ ಸಂಘಟನಾ ಕಾರ್ಯದರ್ಶಿ ನಾರಾಯಣ ಸ್ವಾಮಿ ಹೇಳಿದರು.

ಮಂಗಳವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ರೈತರು ಉತ್ಪನ್ನಗಳಿಗೆ ಮಾಡುವ ಖರ್ಚಿನ ಆಧಾರದಲ್ಲಿ ಬೆಲೆ ನಿಗದಿಯಾಗಬೇಕು ಎಂಬುದು ಪ್ರಮುಖ ಬೇಡಿಕೆಗಳಲ್ಲಿ ಒಂದಾಗಿದೆ. ಭಾರತೀಯ ಕಿಸಾನ್ ಸಂಘದ ನೇತೃತ್ವದಲ್ಲಿ ನಡೆಯಲಿರುವ ಈ ಕಾರ್ಯಕ್ರಮದಲ್ಲಿ ಕೃಷಿಗೆ ಬಳಸುವ ಯಂತ್ರೋಪಕರಣಗಳು, ಕೃಷಿ ಪರಿಕರ, ಪಂಪ್‍ಸೆಟ್‍, ಹನಿ ನೀರಾವರಿ ಪರಿಕರಗಳ ಮೇಲಿನ ಜಿಎಸ್‍ಟಿ ರದ್ದುಗೊಳಿಸಬೇಕು. ಕಿಸಾನ್ ಸಮ್ಮಾನ್
ಯೋಜನೆಯ ಮೊತ್ತವನ್ನು ಹೆಚ್ಚಿಸಬೇಕು ಸೇರಿದಂತೆ ಅನೇಕ ಬೇಡಿಕೆಗಳನ್ನು ಕೇಂದ್ರ ಸರ್ಕಾರದ ಮುಂದಿಡಲಾಗುವುದು’ ಎಂದರು.

ಕೃಷಿ ಉತ್ಪನ್ನಗಳಿಗೆ ಸೂಕ್ತ ಬೆಲೆ ಸಿಗದ ಕಾರಣ ರೈತರು ಕೃಷಿಯಿಂದ ವಿಮುಖರಾಗುತ್ತಿದ್ದಾರೆ. ರೈತ ಆತ್ಮಹತ್ಯೆ ಪ್ರಕರಣಗಳು ಹೆಚ್ಚುತ್ತಿದ್ದು, ಸಮಸ್ಯೆಯಲ್ಲೇ ದಿನ ಕಳೆಯುವಂತಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬೆಳೆಯುತ್ತಿದ್ದ ಭತ್ತದ ಪ್ರಮಾಣ ಕುಸಿದಿದೆ. ಸರ್ಕಾರ ರೈತರ ಬೇಡಿಕೆ ಈಡೇರಿಸಲು ಮುಂದಾಗಬೇಕು ಎಂದರು. ಕಿಸಾನ್ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಶಾಂತಿ ಪ್ರಸಾದ್ ಹೆಗ್ಡೆ, ಅಂಬುಜಾಕ್ಷ, ಸುಬ್ರಾಯ ಬಿ.ಎಸ್., ಜಯಾನಂದ ಇದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.