ಸಾಕ್ಷಿ ದೂರುದಾರ (ಕಡತ ಚಿತ್ರ)
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಧರ್ಮಸ್ಥಳ ಗ್ರಾಮದಲ್ಲಿ ನಡೆದಿದೆ ಎನ್ನಲಾದ ಅಪರಾಧಗಳಲ್ಲಿನ ಮೃತದೇಹಗಳನ್ನು ಹೂತು ಹಾಕಲಾಗಿದೆ ಎಂದು ಆರೋಪಿಸಲಾದ ಪ್ರಕರಣದ ಸಾಕ್ಷಿದೂರುದಾರನ್ನು ಬೆಳ್ತಂಗಡಿಯ ಜೆಎಂಎಫ್‌ಸಿ ನ್ಯಾಯಾಲಯದಲ್ಲಿ ಮಂಗಳವಾರ ಪೊಲೀಸರು ಹಾಜರುಪಡಿಸಿದರು.
ಪ‍್ರಕರಣದ ಕುರಿತಾಗಿ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆಯ (ಬಿಎನ್‌ಎಸ್‌ಎಸ್) ಸೆಕ್ಷನ್ 183ರ ಅಡಿ ನ್ಯಾಯಾಲಯದಲ್ಲಿ ಸ್ವಯಂಪ್ರೇರಿತವಾಗಿ ತಪ್ಪೊಪ್ಪಿಗೆ ಹೇಳಿಕೆ ದಾಖಲಿಸಲು ಆತನನ್ನು ಶಿವಮೊಗ್ಗ ಜೈಲಿನಿಂದ ಬೆಳ್ತಂಗಡಿ ಜೆಎಂಎಫ್‌ಸಿ ನ್ಯಾಯಾಲಯಕ್ಕೆ ಕರೆತರಲಾಗಿದೆ ಎಂದು ಮೂಲಗಳು ತಿಳಿಸಿವೆ.
ಈ ಪ್ರಕರಣ ಸಂಬಂಧ ಧರ್ಮಸ್ಥಳ ಠಾಣೆಗೆ ದೂರು ನೀಡಿದ್ದ ಸಾಕ್ಷಿ ದೂರುದಾರ, ‘ತಾನು ಹೂತು ಹಾಕಿದ್ದ ಮೃತದೇಹವೊಂದನ್ನು ಹೊರತೆಗೆದ ಅವಶೇಷವಿದು’ ಎಂದು ಹೇಳಿ ತಲೆಬುರುಡೆಯನ್ನೂ ಒಪ್ಪಿಸಿದ್ದ. ವಿಶೇಷ ತನಿಖಾ ತಂಡವು (ಎಸ್‌ಐಟಿ) ಈ ಬಗ್ಗೆ ವಿಚಾರಣೆ ನಡೆಸಿದಾಗ ತಲೆಬುರುಡೆಯನ್ನು ನೆಲದಿಂದ ಹೊರತೆಗೆದ ಜಾಗ ತೋರಿಸಲು ಮೀನಮೇಷ ಎಣಿಸಿದ್ದ. ಬಳಿಕ ಅದನ್ನು ತಾನು ಹೊರತೆಗೆದಿಲ್ಲ ಎಂದು ಹೇಳಿಕೆ ನೀಡಿದ್ದ. ಆ ಬಳಿಕ ಎಸ್‌ಐಟಿಯವರು ಆತನನ್ನು ಬಂಧಿಸಿ ಆ. 23ರಂದು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ಬೆಳ್ತಂಗಡಿಯ ಜೆಎಂಎಫ್‌ಸಿ ನ್ಯಾಯಾಲಯವು ಆತನಿಗೆ ನ್ಯಾಯಾಂಗ ಬಂಧನ ವಿಧಿಸಿದೆ.
ಸಾಕ್ಷಿ ದೂರುದಾರನನ್ನು ಸೆ.18ರಂದು ಬೆಳ್ತಂಗಡಿಯ ಜೆಎಂಎಫ್‌ಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ಆದರೆ, ಅಂದು ಆತನ ಹೇಳಿಕೆ ದಾಖಲಿಸಿಕೊಳ್ಳುವ ಪ್ರಕ್ರಿಯೆ ನಡೆದಿರಲಿಲ್ಲ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.