ADVERTISEMENT

ಮೂಡುಬಿದಿರೆ | ‘ನೇರ ನೇಮಕಾತಿ: ಸಾಧಕ ಕ್ರೀಡಾಪಟುಗಳ ಪರಿಗಣಿಸಿ’

​ಪ್ರಜಾವಾಣಿ ವಾರ್ತೆ
Published 2 ಡಿಸೆಂಬರ್ 2025, 7:25 IST
Last Updated 2 ಡಿಸೆಂಬರ್ 2025, 7:25 IST
ಅಂತರರಾಷ್ಟ್ರೀಯ ಕಬಡ್ಡಿ ಆಟಗಾರ್ತಿ ಧನಲಕ್ಷ್ಮಿ ಪೂಜಾರಿ ಅವರನ್ನು ವಿವಿಧ ಸಂಘ ಸಂಸ್ಥೆಗಳ ವತಿಯಿಂದ ಮೂಡುಬಿದಿರೆ ಆಳ್ವಾಸ್‌ನ ಕುವೆಂಪು ಸಭಾಭವನದಲ್ಲಿ ಸೋಮವಾರ ಸನ್ಮಾನಿಸಲಾಯಿತು 
ಅಂತರರಾಷ್ಟ್ರೀಯ ಕಬಡ್ಡಿ ಆಟಗಾರ್ತಿ ಧನಲಕ್ಷ್ಮಿ ಪೂಜಾರಿ ಅವರನ್ನು ವಿವಿಧ ಸಂಘ ಸಂಸ್ಥೆಗಳ ವತಿಯಿಂದ ಮೂಡುಬಿದಿರೆ ಆಳ್ವಾಸ್‌ನ ಕುವೆಂಪು ಸಭಾಭವನದಲ್ಲಿ ಸೋಮವಾರ ಸನ್ಮಾನಿಸಲಾಯಿತು    

ಮೂಡುಬಿದಿರೆ: ಕ್ರೀಡೆಯಲ್ಲಿ ರಾಷ್ಟ್ರ-ಅಂತರರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡಿದ ಕ್ರೀಡಾಪಟುಗಳಿಗೆ ಹರಿಯಾಣ, ಉತ್ತರ ಪ್ರದೇಶ, ಮಧ್ಯಪ್ರದೇಶ, ಛತ್ತೀಸಗಢ ಮತ್ತು ಕೇರಳ ರಾಜ್ಯ ಸರ್ಕಾರಗಳು‌ ನೇರ ನೇಮಕಾತಿ ಮೂಲಕ ಉದ್ಯೋಗಗಳನ್ನು ಒದಗಿಸುತ್ತಿರುವುದು ಗಮನಾರ್ಹ. ಕರ್ನಾಟದ ಕ್ರೀಡಾಪಟುಗಳಿಗೂ ಇಂಥ ಅವಕಾಶಗಳನ್ನು ರಾಜ್ಯ ಸರ್ಕಾರ ಮಾಡಿಕೊಡಬೇಕು ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ.ಮೋಹನ ಆಳ್ವ ಹೇಳಿದರು.

ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ, ದಕ್ಷಿಣ ಕನ್ನಡ ಜಿಲ್ಲಾ ಅಮೆಚೂರ್ ಕಬಡ್ಡಿ ಅಸೋಸಿಯೇಷನ್ ಮಂಗಳೂರು, ಮೂಡುಬಿದಿರೆ ತಾಲ್ಲೂಕು ಅಮೆಚೂರ್ ಕಬಡ್ಡಿ ಅಸೋಸಿಯೇಷನ್ ಹಾಗೂ ಬ್ರಹ್ಮಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘ ಮೂಡಬಿದಿರೆಯ ಸಹಯೋಗದಲ್ಲಿ ನಡೆದ ಕಾರ್ಯಕ್ರಮದಲ್ಲಿ ವಿಶ್ವಕಪ್ ಗೆದ್ದ, ಆಳ್ವಾಸ್ ಸ್ಪೋರ್ಟ್ಸ್‌ ಕ್ಲಬ್‌ನ ಕಬಡ್ಡಿ ಆಟಗಾರ್ತಿ ಧನಲಕ್ಷ್ಮೀ ಪೂಜಾರಿ ಅವರ ಅಭಿನಂದನಾ ಸಮಾರಂಭದಲ್ಲಿ ಅವರು ಸೋಮವಾರ ಮಾತನಾಡಿದರು.

ಕರ್ನಾಟಕ ಅಮೆಚೂರ್ ಕಬಡ್ಡಿ ಅಸೋಸಿಯೇಷನ್‌ನ ಗೌರವಾಧ್ಯಕ್ಷ ರಾಕೇಶ್ ಮಲ್ಲಿ ಮಾತನಾಡಿ, ಮುಂದಿನ ದಿನಗಳಲ್ಲಿ ಧನಲಕ್ಷ್ಮೀ ಅವರಿಗೆ ಸರ್ಕಾರಿ ಹುದ್ದೆ ಲಭಿಸುವಂತೆ ಮಾಡಲು ಸರ್ಕಾರದ ಮಟ್ಟದಲ್ಲಿ ಒತ್ತಡ ತರಲಾಗುವುದು ಎಂದು ತಿಳಿಸಿದರು.

ADVERTISEMENT

ಸನ್ಮಾನ ಸ್ವೀಕರಿಸಿದ ಧನಲಕ್ಷ್ಮೀ, ವಿಶ್ವ ವೇದಿಕೆಯಲ್ಲಿ ಭಾರತದ ತ್ರಿವರ್ಣಪತಾಕೆಯನ್ನು ಹೆಮ್ಮೆಯಿಂದ ಹಾರಿಸುವ ಅವಕಾಶ ದೊರೆತ ಕ್ಷಣ ನನ್ನ ಜೀವನದ ಸ್ಮರಣೀಯ ಕ್ಷಣವಾಗಿತ್ತು. ಆಳ್ವಾಸ್ ಸೇರದರೆ ಇರುತ್ತಿದ್ದರೆ ಇಂಥ ಸಾಧನೆ ನನ್ನಿಂದ ಸಾಧ್ಯವಾಗುತ್ತಿರಲಿಲ್ಲ ಎಂದರು.

ಧನಲಕ್ಷ್ಮಿ ಹಾಗೂ ಅವರ ಪೋಷಕರನ್ನು ಸನ್ಮಾನಿಸಿ, ಆಳ್ವಾಸ್ ಸಂಸ್ಥೆಯ ವತಿಯಿಂದ ₹ 50 ಸಾವಿರ ನೀಡಲಾಯಿತು.

ಉದ್ಯಮಿ ನಾರಾಯಣ ಪಿ.ಎಂ., ಬ್ರಹ್ಮಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘ ಮೂಡಬಿದಿರೆಯ ಅಧ್ಯಕ್ಷ ಸುರೇಶ್ ಕೆ.ಪೂಜಾರಿ, ಮೂಡುಬಿದಿರೆ ತಾಲ್ಲೂಕು ಅಮೆಚೂರ್ ಕಬಡ್ಡಿ ಅಸೋಸಿಯೇಷನ್‌ನ ಉಪಾಧ್ಯಕ್ಷ ಸುದರ್ಶನ್, ಧನಲಕ್ಷಿ ಅವರ ಕೋಚ್ ಹಂಸವತಿ ಭಾಗವಹಿಸಿದ್ದರು.

ದ.ಕ ಅಮೆಚೂರ್ ಕಬಡ್ಡಿ ಅಸೋಸಿಯೇಷನ್‌ನ ಗೌರವಾಧ್ಯಕ್ಷ ಪುರುಷೋತ್ತಮ ಪೂಜಾರಿ ಪ್ರಾಸ್ತಾವಿಕ ನುಡಿಗಳನ್ನಾಡಿದರು. ದೈಹಿಕ ಶಿಕ್ಷಣ ಶಿಕ್ಷಕ ನವೀನಚಂದ್ರ ಅಂಬೂರಿ ನಿರೂಪಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.