ADVERTISEMENT

ದಕ್ಷಿಣ ಕನ್ನಡ: ಕೆರೆ ಒತ್ತುವರಿ ತೆರವಿಗೆ ಸೂಚನೆ

ಕೆರೆಗಳ ಸಂರಕ್ಷಣೆ, ಅಭಿವೃದ್ಧಿ ಹಾಗೂ ನಿರ್ವಹಣೆ ಕುರಿತ ಸಭೆಯಲ್ಲಿ ಡಿಸಿ

​ಪ್ರಜಾವಾಣಿ ವಾರ್ತೆ
Published 2 ಡಿಸೆಂಬರ್ 2021, 4:33 IST
Last Updated 2 ಡಿಸೆಂಬರ್ 2021, 4:33 IST
ಕೆರೆ ಒತ್ತುವರಿ ತೆರವಿಗೆ ಸಂಬಂಧಿಸಿ, ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ಅಧಿಕಾರಿಗಳ ಸಭೆ ನಡೆಸಿದರು.
ಕೆರೆ ಒತ್ತುವರಿ ತೆರವಿಗೆ ಸಂಬಂಧಿಸಿ, ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ಅಧಿಕಾರಿಗಳ ಸಭೆ ನಡೆಸಿದರು.   

ಮಂಗಳೂರು: ಜಿಲ್ಲೆಯಲ್ಲಿ ಒತ್ತುವರಿಯಾಗಿರುವ ಕೆರೆಗಳ ತೆರವಿಗೆ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಕೂಡಲೇ ಕಾರ್ಯಪ್ರವೃತರಾಗಬೇಕು ಎಂದು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ನಿರ್ದೇಶನ ನೀಡಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಕೆರೆಗಳ ಸಂರಕ್ಷಣೆ, ಅಭಿವೃದ್ಧಿ ಹಾಗೂ ನಿರ್ವಹಣೆಯ ಕುರಿತು ಹಮ್ಮಿಕೊಂಡಿದ್ದ ಸಭೆಯಲ್ಲಿ ಅವರು ಮಾತನಾಡಿದರು. ದಾಖಲೆ ಪ್ರಕಾರ ಜಿಲ್ಲೆಯಲ್ಲಿ 644 ಕೆರೆಗಳಿವೆ. ಹೆಚ್ಚುವರಿ ಕೆರೆಗಳಿದ್ದಲ್ಲಿ ಪಹಣಿಪತ್ರ ಪರಿಶೀಲಿಸಿ, ಈ ಕೆರೆಗಳ ಒತ್ತುವರಿ ತೆರವುಗೊಳಿಸಬೇಕು. ಒತ್ತುವರಿ ತೆರವುಗೊಂಡಿರುವ ಕೆರೆಗಳ ದಂಡೆಗಳಲ್ಲಿ ಗಿಡಗಳನ್ನು ನೆಡಬೇಕು. ಅವುಗಳ ಸೌಂದರ್ಯೀಕರಣಕ್ಕೆ ಅಗತ್ಯ ಕ್ರಮ ಕೈಗೊಳ್ಳಬೇಕು. ಇದಕ್ಕಾಗಿ ಡಿ.31ರೊಳಗೆ ಕ್ರಿಯಾ ಯೋಜನೆ ಸಿದ್ಧಪಡಿಸಿ ಸಲ್ಲಿಸಬೇಕು ಎಂದು ಪಿಡಿಒಗಳಿಗೆ ಸೂಚನೆ ನೀಡಿದರು.

ಭೂ ದಾಖಲೆಗಳ ಇಲಾಖೆಯ ಉಪ ನಿರ್ದೇಶಕರು ಕೆರೆಗಳ ಸರ್ವೆ ಕಾರ್ಯ ಕೈಗೊಳ್ಳಬೇಕು. ಮಂಗಳೂರು ತಾಲ್ಲೂಕಿನಲ್ಲಿ 306 ಕೆರೆಗಳಿದ್ದು, 140 ಹೆಚ್ಚುವರಿ ಕೆರೆಗಳಿರುವುದಾಗಿ ತಹಶೀಲ್ದಾರ್ ಮಾಹಿತಿ ನೀಡಿದ್ದಾರೆ. ಈ ಬಗ್ಗೆ ಸರ್ವೆ ನಡೆಸಬೇಕು ಹಾಗೂ ಅವುಗಳನ್ನು ಪಹಣಿಪತ್ರದ ಮೂಲಕ ಪತ್ತೆ ಮಾಡಬೇಕು ಅವರು ತಿಳಿಸಿದರು.

ADVERTISEMENT

ಸಣ್ಣ ನೀರಾವರಿ ಇಲಾಖೆಯ ಕಾರ್ಯಪಾಲಕ ಎಂಜಿನಿಯರ್ ಗೋಕುಲ್ ದಾಸ್ ಮಾತನಾಡಿ, ‘ಎಲ್ಲ ಕೆರೆಗಳ ನೀರಿನ ಗುಣಮಟ್ಟವನ್ನು ಪರೀಕ್ಷಿಸಿ ವಿವರಗಳನ್ನು ನಮೂದಿಸಬೇಕಾಗಿದೆ. ಈಗಾಗಲೇ ದಕ್ಷಿಣ ಕನ್ನಡ ಜಿಲ್ಲೆಯ ಕೆರೆಗಳ ಹೆಸರು, ಗ್ರಾಮ, ಸರ್ವೆ ಸಂಖ್ಯೆ, ಹೋಬಳಿ, ತಾಲ್ಲೂಕಿನ ವಿವರಗಳನ್ನು ನಮೂನೆಯಲ್ಲಿ ಭರ್ತಿ ಮಾಡಿ ತಾಲ್ಲೂಕುವಾರು ಗೂಗಲ್ ಸ್ಪ್ರೆಡ್ ಶೀಟ್ ತಯಾರಿಸಲಾಗುತ್ತಿದೆ ಎಂದು ಮಾಹಿತಿ ನೀಡಿದರು.

ಮಂಗಳೂರು ಮಹಾನಗರ ಪಾಲಿಕೆ ಆಯುಕ್ತ ಅಕ್ಷಯ್ ಶ್ರೀಧರ್, ಜಿಲ್ಲಾ ನಗರಾಭಿವೃದ್ದಿ ಕೋಶದ ಯೋಜನಾ ನಿರ್ದೇಶಕಿ ಗಾಯತ್ರಿ ನಾಯಕ್, ಉಪ ವಿಭಾಗಾಧಿಕಾರಿ ಮದನ್ ಮೋಹನ್, ಡಿಡಿಎಲ್‍ಆರ್ ನಿರಂಜನ್, ತಹಶೀಲ್ದಾರ್ ಗುರುಪ್ರಸಾದ್ ಇದ್ದರು.

ಹಿರಿಯ ಸಿವಿಲ್ ನ್ಯಾಯಾಧೀಶ ವೃಥ್ವಿರಾಜ ವರ್ಣೇಕರ್, ಪಿಡಿಒಗಳು, ನಗರ ಸ್ಥಳೀಯ ಸಂಸ್ಥೆಗಳ ಮುಖ್ಯಸ್ಥರು ಆನ್‍ಲೈನ್ ಮೂಲಕ ಭಾಗವಹಿಸಿದ್ದರು.

ದೂರು ಸಲ್ಲಿಸಲು ಮನವಿ

ಜಿಲ್ಲಾಧಿಕಾರಿ ಅಧ್ಯಕ್ಷತೆಯಲ್ಲಿ ಜಿಲ್ಲಾ ಕೆರೆ ಸಮಿತಿ ಈಗಾಗಲೇ ರಚನೆಯಾಗಿದೆ. ಈ ಸಮಿತಿಯಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ, ಉಪ ಅರಣ್ಯ ಸಂರಕ್ಷಣಾಧಿಕಾರಿ, ಸಣ್ಣ ನೀರಾವರಿ ಮತ್ತು ಅಂತರ್ಜಲ ಅಭಿವೃದ್ಧಿ ಇಲಾಖೆಯ ಕಾರ್ಯಪಾಲಕ ಎಂಜಿನಿಯರ್, ಮಾಲಿನ್ಯ ನಿಯಂತ್ರಣ ಮಂಡಳಿಯ ಪರಿಸರ ಅಧಿಕಾರಿ ಇರುತ್ತಾರೆ.

ಕೆರೆಗಳಿಗೆ ಹರಿದು ಬರುವ ನೀರಿನ ಕಾಲುವೆಗಳನ್ನು ಸಮರ್ಪಕವಾಗಿ ಕಾಪಾಡುವ ಜತೆಗೆ, ಕಲುಷಿತ ನೀರು ಕೆರೆಗೆ ಸೇರಬಾರದು. ಕೆರೆ ಪ್ರದೇಶದಿಂದ 30 ಮೀಟರ್ ಅಂತರದೊಳಗೆ ಯಾವುದೇ ಅನಧಿಕೃತ ಕಟ್ಟಡಗಳು ಇರಬಾರದು. ಕೆರೆ ಭೂಮಿಯ ಮೇಲೆ ಯಾವುದೇ ರಚನೆ ಹಾಗೂ ಕೆರೆ ಭೂಮಿಯನ್ನು ಅಥವಾ ಅದರ ಯಾವುದೇ ಭಾಗವನ್ನು ಅದಿಭೋಗಕ್ಕೆ ತೆಗೆದುಕೊಳ್ಳುವಂತಿಲ್ಲ.

ದಕ್ಷಿಣ ಕನ್ನಡ ಜಿಲ್ಲೆಯ ಕೆರೆಗಳ ಸಂರಕ್ಷಣೆಗೆ ಸಂಬಂಧಿಸಿ ಸಾರ್ವಜನಿಕರು ಈ ಅಂಶಗಳ ಮೇಲೆ ಸಮಿತಿಯ ಇ–ಮೇಲ್‌ಗೆ ದೂರು ಸಲ್ಲಿಸಬಹುದು. ಹೆಚ್ಚಿನ ವಿವರಗಳಿಗೆ 0824-2440720 ಈ ದೂರವಾಣಿ ಸಂಖ್ಯೆ ಸಂಪರ್ಕಿಸಬಹುದು ಎಂದು ಸಣ್ಣ ನೀರಾವರಿ ಮತ್ತು ಅಂತರ್ಜಲ ಅಭಿವೃದ್ಧಿ ವಿಭಾಗದ ಕಾರ್ಯಪಾಲಕ ಎಂಜಿನಿಯರ್ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.