
ಉಜಿರೆ: ಮಕ್ಕಳ ಸೇವೆ ದೇವರ ಸೇವೆಗೆ ಸಮಾನವಾಗಿದ್ದು, ಸರ್ವರಿಗೂ ಆಧುನಿಕ ತಂತ್ರಜ್ಞಾನದ ಬಳಕೆಯೊಂದಿಗೆ ಉತ್ತಮ ಗುಣಮಟ್ಟದ ಶಿಕ್ಷಣ ನೀಡಿದಾಗ ಸಮಾಜದ ಸರ್ವತೋಮುಖ ಪ್ರಗತಿ ಸಾಧ್ಯವಾಗುತ್ತದೆ ಎಂದು ಶಿಕ್ಷಣ ಸಚಿವ ಮಧುಬಂಗಾರಪ್ಪ ಹೇಳಿದರು.
ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಹಿರಿಯ ಪ್ರಾಥಮಿಕ ಶಾಲೆಯ ಶತಮಾನೋತ್ಸವ ಸಮಾರೋಪ ಸಮಾರಂಭದಲ್ಲಿ ಈಚೆಗೆ ನವೀಕೃತ ಗ್ರಂಥಾಲಯ ಉದ್ಘಾಟಿಸಿ ಮಾತನಾಡಿದರು.
ರಾಜ್ಯದ ಸರ್ಕಾರಿ ಶಾಲೆಗಳಲ್ಲಿ 51 ಸಾವಿರ ಶಿಕ್ಷಕರ ಹುದ್ದೆ ಖಾಲಿ ಇದ್ದು ಮುಂದಿನ ಶೈಕ್ಷಣಿಕ ವರ್ಷ ಆರಂಭದೊಳಗೆ 12 ಸಾವಿರ ಶಿಕ್ಷಕರ ಹುದ್ದೆಗಳನ್ನು ಭರ್ತಿ ಮಾಡಲಾಗುವುದು. 900 ಕೆಪಿಎಸ್ ಶಾಲೆಗಳು ನಿರ್ಮಾಣವಾಗಲಿವೆ ಎಂದರು.
ಶಾಸಕ ಎಸ್.ಎಲ್ ಭೋಜೇಗೌಡ ಮಾತನಾಡಿ ಶಾಲೆಗಳ ಮಾನ್ಯತೆ ನವೀಕರಣಕ್ಕಾಗಿ ಜಾಗದ ಪರಿವರ್ತನೆ ಪ್ರಮಾಣಪತ್ರ ನೀಡುವಲ್ಲಿ ಇರುವ ಸಮಸ್ಯೆಯನ್ನು ಸದ್ಯದಲ್ಲೆ ಸದನ ಸಮಿತಿ ಮೂಲಕ ಪರಿಹರಿಸಲಾಗುವುದು ಎಂದು ಅವರು ಭರವಸೆ ನೀಡಿದರು.
ಶಾಸಕ ಹರೀಶ್ ಪೂಂಜ ಅಧ್ಯಕ್ಷತೆ ವಹಿಸಿದ್ದರು.
ರಾಜ್ಯದಲ್ಲಿ ಕನ್ನಡ ಮಾಧ್ಯಮ ಶಾಲೆಯನ್ನು ಮುಚ್ಚಬಾರದು ಎಂದು ಧರ್ಮಾಧಿಕಾರಿ ಡಿ.ವೀರೇಂದ್ರ ಹೆಗ್ಗಡೆ ಹೇಳಿದರು. ಎಲ್ಲ ರೀತಿಯ ಬಂಧನಗಳಿಂದ ಮುಕ್ತರಾಗಲು ಶಿಕ್ಷಣ ಬೇಕು. ಮಾತೃಭಾಷೆ ಕನ್ನಡ ಬಳಕೆಯೊಂದಿಗೆ, ಕನ್ನಡ ಮಾಧ್ಯಮ ಶಾಲೆಗಳಿಗೆ ಪ್ರೋತ್ಸಾಹ ನೀಡಬೇಕು ಎಂದು ಅವರು ಹೇಳಿದರು.
ಹೇಮಾವತಿ ಹೆಗ್ಗಡೆ, ಡಿ.ಹರ್ಷೇಂದ್ರ ಕುಮಾರ್, ಕಾಂಗ್ರೆಸ್ ಮುಖಂಡ ರಕ್ಷಿತ್ ಶಿವರಾಂ, ಗುರುನಾರಾಯಣ ನಿಗಮದ ಅಧ್ಯಕ್ಷ ಮಂಜುನಾಥ ಪೂಜಾರಿ, ಉಜಿರೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಉಷಾಕಿರಣ ಕಾರಂತ, ಉಪಾಧ್ಯಕ್ಷ ರವಿಕುಮಾರ್ ಬರಮೇಲು, ಎಸ್‌ಡಿಎಂ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಪ್ರೊ. ಎಸ್.ಸತೀಶ್ಚಂದ್ರ, ಮುಖ್ಯೋಪಾಧ್ಯಾಯ ಬಾಲಕೃಷ್ಣ ನಾಯ್ಕ ಮತ್ತು ಶಾಲಾ ವಿದ್ಯಾರ್ಥಿ ನಾಯಕಿ ಶೆಝ ಫಾತಿಮಾ ಪಾಲ್ಗೊಂಡಿದ್ದರು. ಶತಮಾನೋತ್ಸವ ಸಮಿತಿ ಅಧ್ಯಕ್ಷ ಶರತ್ ಕೃಷ್ಣ ಪಡ್ವೆಟ್ನಾಯ ಸ್ವಾಗತಿಸಿದರು. ಕಾರ್ಯದರ್ಶಿ ಅಬೂಬಕ್ಕರ್ ಧನ್ಯವಾದ ಹೇಳಿದರು. ನಿವೃತ್ತ ಮುಖ್ಯಶಿಕ್ಷಕ ಸೋಮಶೇಖರ ಶೆಟ್ಟಿ ಮತ್ತು ಅನನ್ಯಾ ನಿರ್ವಹಿಸಿದರು.