ADVERTISEMENT

ಬ್ಯಾನರ್, ಫ್ಲೆಕ್ಸ್, ಬಂಟಿಂಗ್ಸ್ ತೆರವು

ಚುನಾವಣಾ ಕರ್ತವ್ಯ ಗಂಭೀರವಾಗಿ ಪರಿಗಣಿಸಲು ಸೂಚನೆ

​ಪ್ರಜಾವಾಣಿ ವಾರ್ತೆ
Published 30 ಮಾರ್ಚ್ 2023, 4:19 IST
Last Updated 30 ಮಾರ್ಚ್ 2023, 4:19 IST
ಚುನಾವಣೆಯ ನೀತಿ ಸಂಹಿತೆಯ ಹಿನ್ನೆಲೆಯಲ್ಲಿ  ಮಂಗಳೂರಿನ ಬಿಕರ್ನಕಟ್ಟೆ ಕೈಕಂಬ ಮೇಲ್ಸೇತುವೆಯ ಗೋಡೆಗೆ ಇದ್ದ ರಾಜಕೀಯ ಜಾಹೀರಾತುಗಳಿಗೆ ಬಣ್ಣ ಬಳಿಯಲಾಯಿತು – ಪ್ರಜಾವಾಣಿ ಚಿತ್ರ / ಫಕ್ರುದ್ದೀನ್ ಎಚ್
ಚುನಾವಣೆಯ ನೀತಿ ಸಂಹಿತೆಯ ಹಿನ್ನೆಲೆಯಲ್ಲಿ  ಮಂಗಳೂರಿನ ಬಿಕರ್ನಕಟ್ಟೆ ಕೈಕಂಬ ಮೇಲ್ಸೇತುವೆಯ ಗೋಡೆಗೆ ಇದ್ದ ರಾಜಕೀಯ ಜಾಹೀರಾತುಗಳಿಗೆ ಬಣ್ಣ ಬಳಿಯಲಾಯಿತು – ಪ್ರಜಾವಾಣಿ ಚಿತ್ರ / ಫಕ್ರುದ್ದೀನ್ ಎಚ್   

ಮಂಗಳೂರು: ವಿಧಾನಸಭೆ ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಮಾದರಿ ಸಂಹಿತೆ ಜಾರಿಗೊಂಡ ಕಾರಣ ಸರ್ಕಾರದ ಅನುದಾನ ಬಳಸಿ ಜಿಲ್ಲೆಯಾದ್ಯಂತ ಹಾಕಿರುವ ಜಾಹೀರಾತು ಫ್ಲೆಕ್ಸ್, ಬ್ಯಾನರ್ ಹಾಗೂ ಬಂಟಿಂಗ್ಸ್‌ಗಳನ್ನು ಕೂಡಲೇ ತೆರವುಗೊಳಿಸುವಂತೆ ಜಿಲ್ಲೆಯ ಎಲ್ಲ ಚುನಾವಣಾಧಿಕಾರಿಗಳು ಹಾಗೂ ಸಂಬಂಧಪಟ್ಟ ಅಧಿಕಾರಿಗಳಿಗೆ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಕುಮಾರ್ ನಿರ್ದೇಶನ ನೀಡಿದರು.

ಬುಧವಾರ ವಿಡಿಯೊ ಕಾನ್ಪರೆನ್ಸ್‌ನಲ್ಲಿ ಮಾತನಾಡಿದ ಅವರು, ‘ಮಾದರಿ ನೀತಿ ಸಂಹಿತೆ ಜಾರಿಗೊಂಡಿದ್ದು, ಅಧಿಕೃತ ಹಾಗೂ ಅನಧಿಕೃತವಾಗಿ ಹಾಕಲಾಗಿರುವ ಎಲ್ಲ ರೀತಿಯ ಜಾಹೀರಾತುಗಳನ್ನು ತೆರವುಗೊಳಿಸಬೇಕು. ಯಾವುದೇ ಸರ್ಕಾರಿ ಕಚೇರಿಯಲ್ಲಿ, ಸರ್ಕಾರದ ಅಧಿಕೃತ ವೆಬ್‍ಸೈಟ್‍ಗಳಲ್ಲಿ ಹಾಕಲಾಗಿರುವ ರಾಜಕೀಯ ಪಕ್ಷಗಳ ಮುಖಂಡರ ಭಾವಚಿತ್ರಗಳನ್ನು ತೆರವುಗೊಳಿಸಬೇಕು’ ಎಂದರು.

ಒಮ್ಮೆ ತೆರವು ಮಾಡಲಾದ ಫ್ಲೆಕ್ಸ್, ಬ್ಯಾನರ್, ಬಂಟಿಂಗ್ ಹಾಗೂ ಕಟೌಟ್‍ಗಳನ್ನು ಪುನಃ ಅಳವಡಿಸಿದಲ್ಲಿ ಪ್ರಜಾಪ್ರತಿನಿಧಿ ಕಾಯ್ದೆ ಹಾಗೂ ಕರ್ನಾಟಕ ತೆರೆದ ಸ್ಥಳಗಳ (ವಿರೂಪಗೊಳಿಸುವಿಕೆ ತಡೆಗಟ್ಟುವ) ಕಾಯ್ದೆ 1981ರ ಅನ್ವಯ ಆರು ತಿಂಗಳ ಜೈಲು ಶಿಕ್ಷೆ, ₹2,000 ದಂಡ ವಿಧಿಸಬಹುದಾಗಿದೆ. ಅಧಿಕಾರಿಗಳು ಕೈಗೊಂಡ ಕ್ರಮಗಳ ಬಗ್ಗೆ ಕಾಲಮಿತಿಯಲ್ಲಿ ವರದಿ ನೀಡಬೇಕು. ಅಧಿಕಾರಿಗಳು ಚುನಾವಣಾ ಕರ್ತವ್ಯವನ್ನು ಗಂಭೀರವಾಗಿ ಪರಿಗಣಿಸಬೇಕು. ನಿರ್ಲಕ್ಷ್ಯತನಕ್ಕೆ ಅವಕಾಶ ಇಲ್ಲದಂತೆ ಕಾರ್ಯನಿರ್ವಹಿಸಬೇಕು ಎಂದು ಎಚ್ಚರಿಕೆ ನೀಡಿದರು.

ADVERTISEMENT

ಹೆಚ್ಚುವರಿ ಜಿಲ್ಲಾಧಿಕಾರಿ ಎಚ್‌.ಕೆ. ಕೃಷ್ಣಮೂರ್ತಿ ಮಾತನಾಡಿ, ಚುನಾವಣಾಧಿಕಾರಿ ಹಾಗೂ ಸಹಾಯಕ ಚುನಾವಣಾ ಅಧಿಕಾರಿಗಳು ಚುನಾವಣಾ ಆಯೋಗಕ್ಕೆ ನೀಡಬೇಕಾದ ವರದಿಗಳನ್ನು ಕೂಡಲೇ ನೀಡುವಂತೆ ತಿಳಿಸಿದರು.


ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.