ADVERTISEMENT

ಬೆಡ್‌ಗಳ ಕೊರತೆ ಆಗದಿರಲಿ: ವೆನ್ಲಾಕ್‌ ಆಸ್ಪತ್ರೆಯ ವೈದ್ಯರಿಗೆ ಡಿಸಿ ಸೂಚನೆ

​ಪ್ರಜಾವಾಣಿ ವಾರ್ತೆ
Published 18 ಏಪ್ರಿಲ್ 2021, 4:50 IST
Last Updated 18 ಏಪ್ರಿಲ್ 2021, 4:50 IST
ವೆನ್ಲಾಕ್‌ ಆಸ್ಪತ್ರೆಯಲ್ಲಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ಮಾತನಾಡಿದರು.
ವೆನ್ಲಾಕ್‌ ಆಸ್ಪತ್ರೆಯಲ್ಲಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ಮಾತನಾಡಿದರು.   

ಮಂಗಳೂರು: ಮುಂಬರುವ ದಿನಗಳಲ್ಲಿ ಜಿಲ್ಲಾಸ್ಪತ್ರೆಗೆ ಕೋವಿಡ್ ಸೋಂಕಿತರು ಹೆಚ್ಚು ಬರುವ ಸಾಧ್ಯತೆಗಳಿರುವ ಹಿನ್ನೆಲೆ ಚಿಕಿತ್ಸೆ ನೀಡಲು ಅಗತ್ಯ ಮೂಲಸೌಕರ್ಯಗಳನ್ನು ಒಳಗೊಂಡ ಹಾಸಿಗೆಗಳ ವ್ಯವಸ್ಥೆಯನ್ನು ಮಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ. ರಾಜೇಂದ್ರ. ಕೆ.ವಿ., ವೆನ್ಲಾಕ್ ಆಸ್ಪತ್ರೆಯ ವೈದ್ಯಾಧಿಕಾರಿಗಳಿಗೆ ಸೂಚನೆ ನೀಡಿದರು.

ನಗರದ ವೆನ್‍ಲಾಕ್ ಆಸ್ಪತ್ರೆಗೆ ಭೇಟಿ ನೀಡಿ, ಕೋವಿಡ್ ಚಿಕಿತ್ಸೆಗೆ ಹೆಚ್ಚುವರಿ ಹಾಸಿಗೆಗಳ ಕುರಿತು ಪರಿಶೀಲಿಸಿದ ನಂತರ ಆರೋಗ್ಯ ವೈದ್ಯಾಧಿಕಾರಿಗಳ ಜೊತೆಗೆ ನಡೆದ ಸಭೆಯಲ್ಲಿ ಅವರು ಮಾತನಾಡಿದರು.

ಕೆಎಂಸಿ ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿಗಳನ್ನು ಹೆಚ್ಚಿನ ಸಂಖ್ಯೆಯಲ್ಲಿ ವೈದ್ಯಕೀಯ ಸೇವೆಗೆ ನಿಯೋಜಿಸುವುದರಿಂದ ಅಗತ್ಯ ಚಿಕಿತ್ಸೆಗಳನ್ನು ನೀಡಲು ಸಹಕಾರಿಯಾಗುತ್ತದೆ ಎಂದರು.

ADVERTISEMENT

ವೆನ್‍ಲಾಕ್ ಆಸ್ಪತ್ರೆಯ ವೈರಾಲಜಿ ವಿಭಾಗದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಕಂಪ್ಯೂಟರ್‌ ಸಿಬ್ಬಂದಿಯನ್ನು ಹೆಚ್ಚಿನ ಸಂಖ್ಯೆಯಲ್ಲಿ ನಿಯೋಜಿಸಿ ಕೋವಿಡ್ ಪರೀಕ್ಷೆಯ ವರದಿಗಳನ್ನು ವಿಳಂಬವಿಲ್ಲದೇ ನೀಡಬೇಕು ಎಂದು ಸೂಚಿಸಿದರು.

ಆಸ್ಪತ್ರೆಯಲ್ಲಿ ಕೋವಿಡ್ ಪ್ರಕರಣಗಳಿಗೆ ಕಾಯ್ದಿರಿಸಿದ ಹಾಸಿಗೆಗಳು, ಐಸಿಯು, ವೆಂಟಿಲೇಟರ್ ಹಾಗೂ ಔಷಧಿಗಳನ್ನು ವ್ಯವಸ್ಥಿತವಾಗಿ ಇರುವಂತೆ ನೋಡಿಕೊಳ್ಳಬೇಕು ಎಂದರು.

ಕೋವಿಡ್ ರೋಗಿಗಳಿಗೆ ಚಿಕಿತ್ಸೆ ನೀಡಲು ಔಷಧಿಗಳು, ಸುರಕ್ಷಾ ಸಾಧನಗಳು ಹಾಗೂ ಪರಿಕರಗಳನ್ನು ಮುಂದಿನ 15 ರಿಂದ 20 ದಿನಗಳಿಗೆ ಆಗುವಂತೆ ದಾಸ್ತಾನು ಇಟ್ಟಕೊಳ್ಳಬೇಕು ಎಂದರು.

ಜಿಲ್ಲಾ ಪಂಚಾಯಿತಿ ಸಿಇಒ ಡಾ.ಕುಮಾರ್, ಜಿಲ್ಲಾ ಆರೋಗ್ಯಾಧಿಕಾರಿ ಡಾ.ಕಿಶೋರ್, ಸರ್ವೇಕ್ಷಣಾಧೀಕಾರಿ ಡಾ.ಜಗದೀಶ್, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ. ಸದಾಶಿವ ಶಾನುಭೋಗ್, ಕೆಎಂಸಿ ಹಾಗೂ ವೆನ್‍ಲಾಕ್ ಆಸ್ಪತ್ರೆಯ ವೈದ್ಯಾಧಿಕಾರಿಗಳು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.