ADVERTISEMENT

ಪ್ರತಿಭೆಗೆ ಪ್ರೋತ್ಸಾಹ ಸಾಧನೆಗೆ ಪ್ರೇರಣೆ: ಯು.ಕೆ. ಮೋನು

ಎಸ್‌ಸಿಡಿಸಿಸಿ ಬ್ಯಾಂಕ್‌ನಲ್ಲಿ ಪ್ರತಿಭಾ ಪುರಸ್ಕಾರ, ವಿದ್ಯಾರ್ಥಿ ವೇತನ ವಿತರಣೆ

​ಪ್ರಜಾವಾಣಿ ವಾರ್ತೆ
Published 21 ಜುಲೈ 2024, 4:46 IST
Last Updated 21 ಜುಲೈ 2024, 4:46 IST
ಎಸ್‌ಸಿಡಿಸಿಸಿ ಬ್ಯಾಂಕ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ, ಬ್ಯಾಂಕ್‌ ಸಿಬ್ಬಂದಿ ಮಕ್ಕಳ ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿವೇತನ ವಿತರಣೆ ಮಾಡಲಾಯಿತು – ಪ್ರಜಾವಾಣಿ ಚಿತ್ರ
ಎಸ್‌ಸಿಡಿಸಿಸಿ ಬ್ಯಾಂಕ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ, ಬ್ಯಾಂಕ್‌ ಸಿಬ್ಬಂದಿ ಮಕ್ಕಳ ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿವೇತನ ವಿತರಣೆ ಮಾಡಲಾಯಿತು – ಪ್ರಜಾವಾಣಿ ಚಿತ್ರ   

ಮಂಗಳೂರು: ಪ್ರತಿಭಾವಂತ ವಿದ್ಯಾರ್ಥಿಗಳನ್ನು ಪುರಸ್ಕರಿಸುವ ಮೂಲಕ ಯುವ ಪೀಳಿಗೆಯಲ್ಲಿ ಸಾಧನೆಯ ಕನಸು ಬಿತ್ತುವ ಕಾರ್ಯವನ್ನು ಎಸ್‌ಸಿಡಿಸಿಸಿ ಬ್ಯಾಂಕ್ ಮಾಡುತ್ತಿದೆ ಎಂದು ಕಣಚೂರು ವೈದ್ಯಕೀಯ ವಿಜ್ಞಾನ ಸಂಸ್ಥೆ ಅಧ್ಯಕ್ಷ ಯು.ಕೆ. ಮೋನು ಶ್ಲಾಘಿಸಿದರು.

ಸಹಕಾರಿ ಪಿತಾಮಹ ದಿ. ಮೊಳಹಳ್ಳಿ ಶಿವರಾವ್ ಸ್ಮರಣಾರ್ಥ ಶನಿವಾರ ಬ್ಯಾಂಕ್‌ನಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಎಸ್‌ಎಸ್ಎಲ್‌ಸಿ ಮತ್ತು ದ್ವಿತೀಯ ಪಿಯುಸಿಯಲ್ಲಿ ಗರಿಷ್ಠ ಅಂಕ ಪಡೆದಿರುವ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ, ನವೋದಯ ಸ್ವ ಸಹಾಯ ಸಂಘಗಳ ಸದಸ್ಯರ ಮಕ್ಕಳು, ಬ್ಯಾಂಕ್ ಸಿಬ್ಬಂದಿ ಮಕ್ಕಳಿಗೆ ಉನ್ನತ ಶಿಕ್ಷಣಕ್ಕಾಗಿ ವಿದ್ಯಾರ್ಥಿ ವೇತನ ವಿತರಿಸಿ ಅವರು ಮಾತನಾಡಿದರು.

ಮೂರ್ನಾಲ್ಕು ದಶಕಗಳ ಹಿಂದೆ ಶೈಕ್ಷಣಿಕ ವ್ಯವಸ್ಥೆ ಇಷ್ಟು ಸುಧಾರಣೆ ಕಂಡಿರಲಿಲ್ಲ. ಬಹಳಷ್ಟು ಶಾಲೆಗಳು ಮೂಲ ಸೌಕರ್ಯಗಳಿಂದ ಬಳಲುತ್ತಿದ್ದವು. ಪ್ರಸ್ತುತ ಶಿಕ್ಷಣ ಕ್ಷೇತ್ರದಲ್ಲಿ ಕ್ರಾಂತಿಯಾಗಿದೆ. ವಿದ್ಯಾರ್ಥಿಗಳ ಸಕಲ ಸೌಲಭ್ಯಗಳೊಂದಿಗೆ ಶಿಕ್ಷಣ ಪಡೆಯುತ್ತಿದ್ದಾರೆ. ಅಂಕ ಗಳಿಕೆಯಲ್ಲಿ ಪೈಪೋಟಿ ಹೆಚ್ಚುತ್ತಿದೆ. ಯುವ ಪೀಳಿಗೆಗೆ ಸಾಧನೆ ಮಾಡಲು ಭರಪೂರ ಅವಕಾಶ ಇದ್ದು, ಉನ್ನತ ಶಿಕ್ಷಣ ಪಡೆದ ಮಕ್ಕಳ ಸೇವೆ ಸಮಾಜಕ್ಕೆ ಸಿಗುವಂತಾಗಬೇಕು ಎಂದರು.

ADVERTISEMENT

ಅಧ್ಯಕ್ಷತೆ ವಹಿಸಿದ್ದ ಎಸ್‌ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಎಂ.ಎನ್. ರಾಜೇಂದ್ರಕುಮಾರ್ ಮಾತನಾಡಿ, ‘16 ವರ್ಷಗಳಿಂದ ಬ್ಯಾಂಕ್ ಪ್ರತಿಭಾ ಪುರಸ್ಕಾರ ನಡೆಸುತ್ತಿದೆ. ಮುಂದಿನ ಪೀಳಿಗೆಗೆ ಇದು ಮಾದರಿಯಾಗಬೇಕು, ತಾವೂ ಪ್ರತಿಭಾ ಪುರಸ್ಕಾರ ಪಡೆಯಬೇಕೆಂಬ ಹುಮ್ಮಸ್ಸು ಬೆಳೆಯಬೇಕು ಎಂಬುದು ಈ ಕಾರ್ಯಕ್ರಮದ ಮುಖ್ಯ ಆಶಯ. ಬ್ಯಾಂಕ್‌ನ ಸಿಬ್ಬಂದಿ ಹಾಗೂ ಸ್ವ ಸಹಾಯ ಸಂಘದ ಸದಸ್ಯರ ಮಕ್ಕಳಿಗೆ ವಿದ್ಯಾರ್ಥಿ ವೇತನ ನೀಡುವ ಮೂಲಕ ಅವರನ್ನೂ ಪ್ರೋತ್ಸಾಹಿಸಲಾಗುತ್ತಿದೆ’ ಎಂದರು.

ಸ್ಕ್ಯಾಡ್ಸ್ ಅಧ್ಯಕ್ಷ ರವೀಂದ್ರ ಕಂಬಳಿ, ಬ್ಯಾಂಕ್‌ ಉಪಾಧ್ಯಕ್ಷ ವಿನಯ ಕುಮಾರ್ ಸೂರಿಂಜೆ, ನಿರ್ದೇಶಕರಾದ ಭಾಸ್ಕರ್ ಎಸ್. ಕೋಟ್ಯಾನ್, ಎಂ.ವಾದಿರಾಜ ಶೆಟ್ಟಿ, ಎಸ್.ರಾಜು ಪೂಜಾರಿ, ಎಸ್. ಬಿ. ಜಯರಾಮ ರೈ, ಮೋನಪ್ಪ ಶೆಟ್ಟಿ ಎಕ್ಕಾರು, ಎಂ.ಮಹೇಶ್ ಹೆಗ್ಡೆ, ಬಿ.ಅಶೋಕ್ ಕುಮಾರ್ ಶೆಟ್ಟಿ, ಕೆ.ಜೈರಾಜ್ ಬಿ. ರೈ, ಕುಶಾಲಪ್ಪ ಗೌಡ ಪಿ., ಸದಾಶಿವ ಉಳ್ಳಾಲ್ ಇದ್ದರು.

ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ಗೋಪಾಲಕೃಷ್ಣ ಭಟ್‌ ಕಾರ್ಯಕ್ರಮ ನಿರೂಪಿಸಿದರು. ನಿರ್ದೇಶಕ ಶಶಿಕುಮಾರ್ ರೈ ಸ್ವಾಗತಿಸಿದರು.

ನವೋದಯ ಸ್ವ ಸಹಾಯ ಸಂಘಗಳ ಸದಸ್ಯರ ಮಕ್ಕಳು 108 ಮಂದಿ ಬ್ಯಾಂಕ್ ಸಿಬ್ಬಂದಿ ಮಕ್ಕಳು 129 ಜನರಿಗೆ ವಿದ್ಯಾರ್ಥಿ ವೇತನ ವಿತರಿಸಲಾಯಿತು. ಯೋಗ ಸಾಧಕಿ ತನುಶ್ರೀ ಪಿತ್ರೋಡಿ ಅವರಿಂದ ಯೋಗ ಪ್ರದರ್ಶನಗೊಂಡಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.