ಎಫ್‌ಐಆರ್
(ಸಾಂದರ್ಭಿಕ ಚಿತ್ರ)
ಮಂಗಳೂರು: ಹಿಂದುತ್ವವಾದಿ ಕಾರ್ಯಕರ್ತ, ರೌಡಿಶೀಟರ್ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದ ತನಿಖೆಯನ್ನು ರಾಷ್ಟ್ರೀಯ ತನಿಖಾ ಸಂಸ್ಥೆಗೆ (ಎನ್‌ಐಎ) ವಹಿಸಬೇಕು ಎಂದು ಆಗ್ರಹಿಸಿ ಬಜಪೆಯಲ್ಲಿ ಭಾನುವಾರ ಪೊಲೀಸ್ ಇಲಾಖೆಯಿಂದ ಅನುಮತಿ ಪಡೆಯದೆಯೇ ‘ಬಜಪೆ ಚಲೋ’ ಪ್ರತಿಭಟನೆ ನಡೆಸಿದ ಹಾಗೂ ಸಭೆಯಲ್ಲಿ ಧರ್ಮಗಳ ನಡುವೆ ದ್ವೇಷ ಹುಟ್ಟಿಸುವಂತೆ ಪ್ರಚೋದನಾಕಾರಿ ಭಾಷಣ ಮಾಡಿದ ಆರೋಪದ ಮೇಲೆ ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಮತ್ತು ಬಜರಂಗದಳದ ಮುಖಂಡರ ಮೇಲೆ ಹಾಗೂ ಈ ಸಭೆಯಲ್ಲಿ ಭಾಗವಹಿಸಿದವರ ಮೇಲೆ ಬಜಪೆ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.
‘ಪ್ರತಿಭಟನೆ ಸಂದರ್ಭದಲ್ಲಿ ಭಾಷಣಕಾರರೊಬ್ಬರು ಸುಹಾಸ್ ಶೆಟ್ಟಿ ಹತ್ಯೆ ವಿಚಾರವನ್ನು ಪ್ರಸ್ತಾಪಿಸಿ, ಎರಡು ಧರ್ಮಗಳ ನಡುವೆ ದ್ವೇಷ ಹುಟ್ಟಿಸುವ ಮಾತುಗಳನ್ನಾಡಿದ್ದಾರೆ. ಈ ಮೂಲಕ ಸಾರ್ವಜನಿಕ ಶಾಂತಿ ಭಂಗಗೊಳಿಸಲು ಯತ್ನಿಸಿದ್ದಾರೆ’ ಎಂದು ಎಂದು ಪೊಲೀಸ್ ಕಮಿಷನರ್ ಅನುಪಮ್ ಅಗ್ರವಾಲ್ ತಿಳಿಸಿದ್ದಾರೆ.
‘ಬಜಪೆ ಚಲೋ ಪ್ರತಿಭಟನೆ ಹಮ್ಮಿಕೊಳ್ಳುವುದಕ್ಕೆ ಪೊಲೀಸ್ ಇಲಾಖೆ ಅನುಮತಿ ನೀಡಿರಲಿಲ್ಲ. ಆದರೂ ಭಾನುವಾರ ಮಧ್ಯಾಹ್ನ 3ರಿಂದ 5ರ ನಡುವೆ ಬಜಪೆ ಬಸ್ ನಿಲ್ದಾಣದ ಬಳಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಈ ಪಟ್ಟಣವನ್ನು ಪ್ರವೇಶಿಸುವ ಹಾಗೂ ಅಲ್ಲಿಂದ ನಿರ್ಗಮಿಸುವ ಮಾರ್ಗಗಳನ್ನು ಸಂಪೂರ್ಣವಾಗಿ ಮುಚ್ಚುವ ಹಾಗೂ ಅಲ್ಲಿ ರಾಜ್ಯ ಹೆದ್ದಾರಿ 67 ಅನ್ನು ಭಾಗಶಃ ಮುಚ್ಚುವ ಮೂಲಕ ಸಾರ್ವಜನಿಕ ವಾಹನಗಳ ಸಂಚಾರಕ್ಕೆ ಅಡ್ಡಿ ಉಂಟುಮಾಡಲಾಗಿದೆ’ ಎಂದೂ ಅವರು ತಿಳಿಸಿದ್ದಾರೆ.
‘ಈ ಪ್ರತಿಭಟನೆ ಆಯೋಜಿಸಿದ್ದ ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಮತ್ತು ಬಜರಂಗದಳದ ಮುಖಂಡರು ಹಾಗೂ ಈ ಸಭೆಯಲ್ಲಿ ಭಾಗವಹಿಸಿದವರ ವಿರುದ್ಧ ಬಜಪೆ ಠಾಣೆಯಲ್ಲಿ ಭಾರತೀಯ ನ್ಯಾಯ ಸಂಹಿತೆಯ ಸೆಕ್ಷನ್ 189 (2) (ಅಕ್ರಮ ಕೂಟ ರಚನೆ), ಸೆಕ್ಷನ್ 191 (2) (ಗಲಭೆ ಸೃಷ್ಟಿ), ಸೆಕ್ಷನ್ 285 (ಸಾರ್ವಜನಿಕ ರಸ್ತೆಯಲ್ಲಿ ವಾಹನ ಸಂಚಾರಕ್ಕೆ ಅಡ್ಡಿ), ಸೆಕ್ಷನ್ 192 (ಗಲಭೆ ಸೃಷ್ಟಿಸಲು ಪ್ರಚೋದನೆ), 351 (2) ಮತ್ತು 351 (3) (ಬೆದರಿಕೆ), 190 (ಸಮಾನ ಉದ್ದೇಶದಿಂದ ಅಕ್ರಮವಾಗಿ ಸಭೆ ನಡೆಸಿದ್ದು) ಮತ್ತು ಕರ್ನಾಟಕ ಪೊಲೀಸ್ ಕಾಯ್ದೆಯ ಸೆಕ್ಷನ್ 107 ಮತ್ತು 109ರ (ಸಾರ್ವಜನಿಕ ಹಿತ ಕಾಯುವ ದೃಷ್ಟಿಯಿಂದ ಪೊಲೀಸ್ ಕಮಿಷನರ್ ಹೊರಡಿಸಿದ ಆದೇಶ ಉಲ್ಲಂಘನೆ) ಡಿ ಎಫ್‌ಐಆರ್ ದಾಖಲಿಸಿಕೊಳ್ಳಲಾಗಿದೆ ಎಂದು ಪೊಲೀಸ್ ಕಮಿಷನರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.