ADVERTISEMENT

ಮಿಯಾವಾಕಿ ಮಾದರಿಯಲ್ಲಿ ಅರಣ್ಯಕ್ಕೆ ಯೋಜನೆ: ಅರಣ್ಯ ಸಚಿವ ಅರವಿಂದ ಲಿಂಬಾವಳಿ

ಜೂನ್ 5 ರಂದು ಚಾಲನೆ

​ಪ್ರಜಾವಾಣಿ ವಾರ್ತೆ
Published 24 ಏಪ್ರಿಲ್ 2021, 11:43 IST
Last Updated 24 ಏಪ್ರಿಲ್ 2021, 11:43 IST
 ಧರ್ಮಸ್ಥಳದಲ್ಲಿ ಶನಿವಾರ ಶ್ರೀಸನ್ನಿಧಿ ಅತಿಥಿ ಗೃಹದಲ್ಲಿ ಅರಣ್ಯ ಇಲಾಖಾ ಅಧಿಕಾರಿಗಳೊಂದಿಗೆ ಸಮಾಲೋಚನೆ ಸಭೆಯಲ್ಲಿ ಅರಣ್ಯ ಸಚಿವ ಅರವಿಂದ ಲಿಂಬಾವಳಿ ಮಾತನಾಡಿದರು. ಧರ್ಮಾಧಿಕಾರಿ ಡಿ.ವೀರೇಂದ್ರ ಹೆಗ್ಗಡೆ ಇದ್ದರು
 ಧರ್ಮಸ್ಥಳದಲ್ಲಿ ಶನಿವಾರ ಶ್ರೀಸನ್ನಿಧಿ ಅತಿಥಿ ಗೃಹದಲ್ಲಿ ಅರಣ್ಯ ಇಲಾಖಾ ಅಧಿಕಾರಿಗಳೊಂದಿಗೆ ಸಮಾಲೋಚನೆ ಸಭೆಯಲ್ಲಿ ಅರಣ್ಯ ಸಚಿವ ಅರವಿಂದ ಲಿಂಬಾವಳಿ ಮಾತನಾಡಿದರು. ಧರ್ಮಾಧಿಕಾರಿ ಡಿ.ವೀರೇಂದ್ರ ಹೆಗ್ಗಡೆ ಇದ್ದರು   

ಉಜಿರೆ: ‘ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದಲ್ಲಿ ನೂರು ಎಕರೆ ಅರಣ್ಯ ಪ್ರದೇಶದಲ್ಲಿ ಹಣ್ಣಿನ ಗಿಡಗಳನ್ನು ಬೆಳೆಸುವ ಯೋಜನೆ ಇದೇ ಜೂನ್ 5 ರಂದು ಪ್ರಾರಂಭಗೊಳ್ಳಲಿದೆ’ ಎಂದು ಅರಣ್ಯ ಸಚಿವ ಅರವಿಂದ ಲಿಂಬಾವಳಿ ಹೇಳಿದರು.

ಧರ್ಮಸ್ಥಳದಲ್ಲಿ ಶನಿವಾರ ಶ್ರೀಸನ್ನಿಧಿ ಅತಿಥಿ ಗೃಹದಲ್ಲಿ ಅರಣ್ಯ ಇಲಾಖಾ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿದ ಬಳಿಕ ಅವರು ನಿರ್ಧಾರ ಪ್ರಕಟಿಸಿದರು.

‘ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆ ಯೋಜನೆಗೆ ಚಾಲನೆ ನೀಡುವರು. ಸಾರ್ವಜನಿಕರ ಸಹಕಾರದೊಂದಿಗೆ ಜಪಾನಿನ ಮಿಯಾವಾಕಿ ಮಾದರಿಯಲ್ಲಿ ಅರಣ್ಯ ಬೆಳೆಸುವ ಯೋಜನೆ ರೂಪಿಸಬೇಕು ಎಂದು ಸಚಿವರು ಅಧಿಕಾರಿಗಳಿಗೆ ಸಲಹೆ ನೀಡಿದರು. ಮೇ 15 ರೊಳಗೆ ಈ ಬಗ್ಯೆ ಅರಣ್ಯ ಇಲಾಖೆ ವತಿಯಿಂದ ತರಬೇತಿ ನೀಡಿ ಜೂನ್ 5 ರಂದು ಸಾಂಕೇತಿಕವಾಗಿ ಯೋಜನೆಗೆ ಚಾಲನೆ ನೀಡಲಾಗುವುದು. ಬೆಳ್ತಂಗಡಿಯಲ್ಲಿ ಪ್ರಾಯೋಗಿಕವಾಗಿ ಆರಂಭಿಸಿದ ಈ ಯೋಜನೆಯನ್ನು ಮುಂದಿನ ವರ್ಷ ಎಲ್ಲಾ ಜಿಲ್ಲೆಗಳಿಗೂ ವಿಸ್ತರಿಸಲಾಗುವುದು’ ಎಂದು ಸಚಿವರು ತಿಳಿಸಿದರು.

ADVERTISEMENT

ಮಂಗಳೂರು ವೃತ್ತದ ಉಪ ಅರಣ್ಯ ಸಂರಕ್ಷಣಾಧಿಕಾರಿ ಡಾ.ವಿ.ಕರಿಕ್ಕಳನ್‌ ಅವರನ್ನು ಯೋಜನೆಗೆ ಮಾರ್ಗದರ್ಶಿ ಅಧಿಕಾರಿಯಾಗಿ ಕಾರ್ಯನಿರ್ವಹಿಸುವಂತೆ ಸಚಿವರು ನಿರ್ದೇಶನ ನೀಡಿದರು. ಬೇಡಿಕೆಗನುಗುಣವಾಗಿ ಹಣ್ಣಿನ ಗಿಡಗಳನ್ನು ಮತ್ತು ಬೀಜಗಳನ್ನು ಪೂರೈಸುವಂತೆ ಸಲಹೆ ನೀಡಿದರು.

ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆ ಪ್ರಾಸ್ತಾವಿಕವಾಗಿ ಮಾತನಾಡಿ, ‘ಜಾಗತಿಕ ಗ್ರಾಮದ ಕಲ್ಪನೆಯೊಂದಿಗೆ ವಿಶ್ವದ ಪ್ರಸ್ತುತ ವಿದ್ಯಮಾನಗಳನ್ನು ಗಮನಿಸಿದಾಗ, ಇಡಿ ವಿಶ್ವವೇ ನಮ್ಮ ಮನೆ ಎಂಬ ಭಾವನೆಯಿಂದ ಭೂಮಿಯನ್ನು ಚೆನ್ನಾಗಿ ರಕ್ಷಣೆ ಮಾಡಿ ಪ್ರಕೃತಿ-ಪರಿಸರವನ್ನು ಸುಸ್ಥಿತಿಯಲ್ಲಿ ಮುಂದಿನ ಜನಾಂಗಕ್ಕೆ ಬಿಟ್ಟುಕೊಡುವುದು ನಮ್ಮೆಲ್ಲರ ಹೊಣೆಗಾರಿಕೆಯಾಗಿದೆ’ ಎಂದರು.

‘ಕಾಡುಪ್ರಾಣಿಗಳು ಆಹಾರ ಅರಸಿ ನಾಡಿಗೆ ಬಂದು ರೈತರ ಕೃಷಿಗೆ ಹಾನಿ ಮಾಡುತ್ತವೆ. ಇದನ್ನು ತಡೆಗಟ್ಟಲು ಅರಣ್ಯ ಪ್ರದೇಶದಲ್ಲಿ ಹಣ್ಣಿನ ಗಿಡಗಳನ್ನು ಬೆಳೆಸಬೇಕೆಂದು ಅರಣ್ಯ ಸಚಿವರಿಗೆ ಪತ್ರ ಬರೆದಾಗ ತಕ್ಷಣ ಸ್ಪಂದಿಸಿದ ಅವರು, ಧರ್ಮಸ್ಥಳದಲ್ಲಿ ಸಮಾಲೋಚನಾ ಸಭೆ ನಡೆಸಿರುವುದು ಸಂತೋಷವಾಗಿದೆ. ಮಾವು, ನೇರಳೆ, ಜಂಬೂ ನೇರಳೆ, ಹಲಸು, ಹೆಬ್ಬಲಸು, ಬಿದಿರು, ನೆಲ್ಲಿ, ಪುನರ್ಪುಳಿ ಮೊದಲಾದ ಹಣ್ಣಿನ ಗಿಡಗಳನ್ನು ಕಾಡಿನಲ್ಲಿ ಬೆಳೆಸಬೇಕು’ ಎಂದು ಸಲಹೆ ನೀಡಿದರು.

ಶಾಸಕ ಹರೀಶ್ ಪೂಂಜ, ವಿಧಾನ ಪರಿಷತ್ ಸದಸ್ಯ ಕೆ. ಪ್ರತಾಪಸಿಂಹ ನಾಯಕ್, ಮುಖ್ಯ ಅರಣ್ಯಸಂರಕ್ಷಣಾಧಿಕಾರಿ ಸಂಜಯ್ ಮೋಹನ್, ಉಪ ಅರಣ್ಯ ಸಂರಕ್ಷಣಾಧಿಕಾರಿ ಸುಬ್ರಹ್ಮಣ್ಯರಾವ್, ಕಾರ್ಯನಿರ್ವಾಹಕ ನಿರ್ದೇಶಕಿ ಕಮಲಾ ಕರಿಕ್ಕಳ, ಮಂಗಳೂರು ವೃತ್ತದ ಉಪ ಅರಣ್ಯ ಸಂರಕ್ಷಣಾಧಿಕಾರಿ ಪ್ರಕಾಶ್ ನೆಟಾಲ್ಕರ್, ಬೆಳ್ತಂಗಡಿ ತಹಶೀಲ್ದಾರ್ ಮಹೇಶ್ ಜೆ., ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯನಿರ್ವಾಹಕ ನಿರ್ದೇಶಕ ಡಾ. ಎಲ್.ಎಚ್. ಮಂಜುನಾಥ್, ಪ್ರಾದೇಶಿಕ ನಿರ್ದೇಶಕ ವಿವೇಕ್ ಪಾಯಸ್, ಕೃಷಿ ವಿಭಾಗದ ಮುಖ್ಯಸ್ಥ ಬಾಲಕೃಷ್ಣ ಪೂಜಾರಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.