ಉಜಿರೆ: ಸಮಾಜದ ಸ್ವಾಸ್ಥ್ಯ ಕಾಪಾಡಲು ಕಾನೂನಿನ ಚೌಕಟ್ಟಿನೊಳಗೆ ಸುಮೊಟೊ ಪ್ರಕರಣ ದಾಖಲಿಸುವ ಜವಾಬ್ದಾರಿ ಪೊಲೀಸ್ ಇಲಾಖೆಗೆ ಇದೆ. ಆದರೆ, ಧರ್ಮಸ್ಥಳದ ಪಾಂಗಾಳ ಕ್ರಾಸ್‌ನಲ್ಲಿ ಎರಡು ಗುಂಪುಗಳ ಮಧ್ಯೆ ನಡೆದ ಗುಂಪು ಘರ್ಷಣೆಯಲ್ಲಿ ಅಮಾಯಕ ಹಿಂದೂ ಹಾಗೂ ಬಿಜೆಪಿ ಕಾರ್ಯಕರ್ತರ ಮೇಲೆ ವಿನಾಕಾರಣ ಪೊಲೀಸರು ಪ್ರಕರಣ ದಾಖಲಿಸಿ, ರಾತ್ರಿ ಹೊತ್ತು ಮನೆಗಳಿಗೆ ಹೋಗಿ ಕಿರುಕುಳ ನೀಡುತ್ತಿದ್ದಾರೆ ಎಂದು ಶಾಸಕ ಹರೀಶ್ ಪೂಂಜ ಆರೋಪಿಸಿದರು.
ಇಲ್ಲಿನ ಖಾಸಗಿ ಹೋಟೆಲ್‌ನಲ್ಲಿ ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಶಶಿರಾಜ್, ಸಂದೀಪ್ ಮೊದಲಾದ ಹತ್ತು ಮಂದಿ ಕಾರ್ಯಕರ್ತರು ಗಲಭೆ ನಡೆಯುವ ಸ್ಥಳದಲ್ಲಿ ಇಲ್ಲದಿದ್ದರೂ ಅವರ ಮೇಲೆ ವಿನಾಕಾರಣ ಪ್ರಕರಣ ದಾಖಲಿಸಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಎಸ್‌ಡಿಪಿಐ ಹಾಗೂ ಎಡಪಂಥೀಯ ಸಂಘಟನೆಗಳ ಮಾತನ್ನು ಕೇಳಿ ಅಮಾಯಕರ ಮೇಲೆ ಪ್ರಕರಣ ದಾಖಲಿಸುತ್ತಿರುವುದು ಖಂಡನೀಯ. ಎಸ್‌ಐಟಿ ತನಿಖೆ ನಡೆಸುತ್ತಿರುವಾಗ ಜನಪ್ರತಿನಿಧಿಯಾಗಿ ಯಾವುದೇ ಹೇಳಿಕೆ ನೀಡುವುದಿಲ್ಲ. ಆದರೆ ಹಿಂದೂಗಳ ಶ್ರದ್ಧಾಭಕ್ತಿಯ ಕೇಂದ್ರವಾದ ಧರ್ಮಸ್ಥಳದ ಮೇಲೆ ಅನಗತ್ಯ ಗೂಬೆ ಕೂರಿಸುವ ಯತ್ನವನ್ನು ತಾನು ಬಲವಾಗಿ ಖಂಡಿಸುವೆ. ಎಸ್‌ಐಟಿ ತನಿಖೆ ಬಗ್ಗೆ ಪರ ಅಥವಾ ವಿರುದ್ಧವಾಗಿ ಯಾವುದೇ ರೀತಿಯ ಸುಳ್ಳು ಮಾಹಿತಿ ಹರಡಬಾರದು ಎಂದು ಅವರು ಸಲಹೆ ನೀಡಿದರು.
ಪತ್ರಿಕಾಗೋಷ್ಠಿಯಲ್ಲಿ ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಜಯಂತ್ ಕೋಟ್ಯಾನ್, ಮಂಡಲ ಪ್ರಧಾನ ಕಾರ್ಯದರ್ಶಿ ಪ್ರಶಾಂತ್ ಎಂ. ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.