ಮಂಗಳೂರು: ‘ಹಾಸನ ಜಿಲ್ಲೆಯಲ್ಲಿ ಹೃದಯಾಘಾತಕ್ಕೆ ಸಂಬಂಧಿಸಿದ ಅನೇಕ ಪ್ರಕರಣಗಳು ಈಚೆಗೆ ವರದಿಯಾಗಿವೆ. ಆ ಜಿಲ್ಲೆಯಲ್ಲೇ ಏಕೆ ಅಷ್ಟೊಂದು ಹೃದಯಾಘಾತಗಳು ಸಂಭವಿಸುತ್ತಿವೆ ಎಂಬ ಬಗ್ಗೆ ಪರಿಶೀಲನೆ ಮಾಡಿ ವರದಿ ನೀಡಲು ಅಧಿಕಾರಿಗಳಿಗೆ ಆದೇಶಿಸಿದ್ದೇನೆ’ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು.
ಇಲ್ಲಿ ಸುದ್ದಿಗಾರರ ಜೊತೆ ಸೋಮವಾರ ಮಾತನಾಡಿದ ಅವರು, ‘ವರದಿ ಸಲ್ಲಿಕೆಯಾದ ಬಳಿಕ ಇದರ ಹಿಂದಿನ ಸತ್ಯಾಸತ್ಯತೆ ಗೊತ್ತಾಗಲಿದೆ. ಈಗಿನ ಜೀವನ ಶೈಲಿ, ಆಹಾರ ಪದ್ದತಿ, ಮೊಬೈಲ್ ಅತಿ ಬಳಕೆ ಮತ್ತು ಡಿಜಿಟಲ್ ವ್ಯಸನಗಳಿಂದಾಗಿಯೂ ಅನಾರೋಗ್ಯ ಸಮಸ್ಯೆ ಹೆಚ್ಚಾಗಿದೆ. ಅನೇಕರಿಗೆ ಚಿಕ್ಕ ವಯಸ್ಸಿನಲ್ಲಿ ರಕ್ತದೋತ್ತಡ, ಮಧುಮೇಹ ಸಮಸ್ಯೆಗಳು ಕಾಣಿಸಿಕೊಳ್ಳುತ್ತಿವೆ. ವಾಯು ಮಾಲಿನ್ಯ, ಜಲ ಮಾಲಿನ್ಯ ಹಾಗೂ ಮಲಿನ ಆಹಾರಗಳಿಂದಾಗಿಯೂ ಆರೋಗ್ಯ ಹದಗೆಡುತ್ತಿದೆ’ ಎಂದರು.
‘ಕೋವಿಡ್ ಬಳಿಕ ಹೃದಯಘಾತ ಪ್ರಮಾಣ ಹೆಚ್ಚಳ ಆಗುತ್ತಿರುವ ಬಗ್ಗೆ ಪರಿಶೀಲಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮುಖ್ಯ ಕಾರ್ಯದರ್ಶಿ ಅವರಿಗೆ ಪತ್ರ ಬರೆದಿದ್ದಾರೆ. ಇದು ಕೇವಲ ಕರ್ನಾಟಕದ ಸಮಸ್ಯೆ ಅಲ್ಲ. ಜಾಗತಿಕ ಮಟ್ಟದಲ್ಲಿ ಈ ಬಗ್ಗೆ ಅಧ್ಯಯನ ನಡೆಯಬೇಕಾದ ಅಗತ್ಯ ಇದೆ’ ಎಂದು ಅವರು ಅಭಿಪ್ರಾಯಪಟ್ಟರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.