ADVERTISEMENT

ಮಹಿಳಾ ಸಬಲೀಕರಣಕ್ಕೆ ಒತ್ತು

ಇಂದಿರಾ ಗಾಂಧಿ ಮಹಿಳಾ ನರ್ಸಿಂಗ್ ವಸತಿ ನಿಲಯ ಉದ್ಘಾಟಿಸಿದ ದಿನೇಶ್ ಗುಂಡೂರಾವ್

​ಪ್ರಜಾವಾಣಿ ವಾರ್ತೆ
Published 26 ಜುಲೈ 2025, 6:51 IST
Last Updated 26 ಜುಲೈ 2025, 6:51 IST
ಮಂಗಳೂರಿನ ಉರ್ವಸ್ಟೋರ್‌ನಲ್ಲಿ ದೇವರಾಜ ಅರಸು ಭವನ ಮತ್ತು ಇಂದಿರಾಗಾಂಧಿ ನರ್ಸಿಂಗ್ ಹಾಸ್ಟೆಲ್ ಅನ್ನು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಉದ್ಘಾಟಿಸಿದರು : ಪ್ರಜಾವಾಣಿ ಚಿತ್ರ
ಮಂಗಳೂರಿನ ಉರ್ವಸ್ಟೋರ್‌ನಲ್ಲಿ ದೇವರಾಜ ಅರಸು ಭವನ ಮತ್ತು ಇಂದಿರಾಗಾಂಧಿ ನರ್ಸಿಂಗ್ ಹಾಸ್ಟೆಲ್ ಅನ್ನು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಉದ್ಘಾಟಿಸಿದರು : ಪ್ರಜಾವಾಣಿ ಚಿತ್ರ   

ಮಂಗಳೂರು: ನಗರದ ಉರ್ವ ಸ್ಟೋರ್‌ನಲ್ಲಿ ₹5 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗಿರುವ ಶ್ರೀಮತಿ ಇಂದಿರಾ ಗಾಂಧಿ ಮಹಿಳಾ ನರ್ಸಿಂಗ್ ವಸತಿ ನಿಲಯ, ₹1 ಕೋಟಿ ವೆಚ್ಚದಲ್ಲಿ ನಿರ್ಮಿಸಿರುವ ಡಿ. ದೇವರಾಜ ಅರಸು ಭವನ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ತಾಲ್ಲೂಕು ಕಚೇರಿಯನ್ನು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಶುಕ್ರವಾರ ಉದ್ಘಾಟಿಸಿದರು.

ನಂತರ ಮಾತನಾಡಿದ ಅವರು, ‘ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಾಕಷ್ಟು ವಿದ್ಯಾಸಂಸ್ಥೆಗಳು ಇವೆ. ಇಲ್ಲಿ ಗುಣಮಟ್ಟದ ಶಿಕ್ಷಣ ಸಿಗುವುದರಿಂದ ಹೊರ ಜಿಲ್ಲೆಗಳ ವಿದ್ಯಾರ್ಥಿಗಳು ಬರುತ್ತಾರೆ. ಹೀಗಾಗಿ, ವಸತಿ ನಿಲಯಗಳಿಗೆ ಬೇಡಿಕೆ ಹೆಚ್ಚಿದೆ. ವಿದ್ಯಾರ್ಥಿಗಳಿಗೆ ಉತ್ತಮ ಶಿಕ್ಷಣ ದೊರೆತಾಗ ಸಮಾಜ ನೈಜವಾಗಿ ಅಭಿವೃದ್ಧಿ ಆದಂತೆ’ ಎಂದರು.

ಡಿ. ದೇವರಾಜ ಅರಸು ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿ ನಿಲಯ, ಮಾದರಿ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿ ನಿಲಯಕ್ಕೆ ಸಚಿವರು ಶಿಲಾನ್ಯಾಸ ನೆರವೇರಿಸಿದರು.

ADVERTISEMENT

‘ವಿದ್ಯಾರ್ಥಿನಿಯರ ಶಿಕ್ಷಣಕ್ಕೆ ಹೆಚ್ಚು ಪ್ರೋತ್ಸಾಹ ನೀಡಬೇಕಾಗಿದೆ. ಅವಕಾಶವನ್ನು ಏಣಿಯಾಗಿ ಬಳಸಿಕೊಂಡು ಹೆಣ್ಣು ಮಕ್ಕಳು ಎಲ್ಲ ಕ್ಷೇತ್ರಗಳಲ್ಲೂ ಹೆಜ್ಜೆಗುರುತು ಮೂಡಿಸಿದ್ದಾರೆ. ಕಾಂಗ್ರೆಸ್ ಸರ್ಕಾರ ಮಹಿಳಾ ಸಬಲೀಕರಣಕ್ಕೆ ಪೂರಕವಾದ ಅನೇಕ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಿದೆ. ಮಹಿಳೆಯರಿಗೆ ರಾಜಕೀಯ ಮೀಸಲಾತಿಯೂ ಹೆಚ್ಚಿನ ಪ್ರಮಾಣದಲ್ಲಿ ಸಿಗಬೇಕಾಗಿದೆ’ ಎಂದು ಹೇಳಿದರು.

ಶಾಸಕ ವೇದವ್ಯಾಸ ಕಾಮತ್ ಅಧ್ಯಕ್ಷತೆ ವಹಿಸಿದ್ದರು. ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ, ಮೂಡ ಅಧ್ಯಕ್ಷ ಸದಾಶಿವ ಉಳ್ಳಾಲ್, ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷೆ ಮಮತಾ ಗಟ್ಟಿ, ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಸದಾನಂದ ಮಾವಜಿ, ಜಿಲ್ಲಾಧಿಕಾರಿ ದರ್ಶನ್ ಎಚ್.ವಿ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ವಿನಾಯಕ್ ನರ್ವಾಡೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಬಿಂದಿಯಾ ನಾಯಕ, ತಾಲ್ಲೂಕು ಅಧಿಕಾರಿ ಮಹಾಲಕ್ಷ್ಮಿ ಬೋಳಾರ್ ಉಪಸ್ಥಿತರಿದ್ದರು.

‘100 ವಿದ್ಯಾರ್ಥಿನಿಯರ ಸಾಮರ್ಥ್ಯ’

ಇಲಾಖೆ ಅಡಿಯಲ್ಲಿರುವ 80 ವಸತಿ ನಿಲಯಗಳಲ್ಲಿ 49 ಸ್ವಂತ ಕಟ್ಟಡ ಹೊಂದಿದ್ದು 12 ಉಚಿತ ಕಟ್ಟಡದಲ್ಲಿ ನಡೆಯುತ್ತಿವೆ. ಉಳಿದ ವಸತಿ ನಿಲಯಗಳು ಬಾಡಿಗೆ ಕಟ್ಟಡದಲ್ಲಿವೆ. ಬಾಡಿಗೆ ಕಟ್ಟಡದಲ್ಲಿರುವ ಮಹಿಳಾ ನರ್ಸಿಂಗ್ ವಸತಿ ನಿಲಯವನ್ನು ಸ್ವಂತ ಕಟ್ಟಡಕ್ಕೆ ಸ್ಥಳಾಂತರಿಸಲಾಗುವುದು. ಇದು 100 ವಿದ್ಯಾರ್ಥಿನಿಯರ ಸಾಮರ್ಥ್ಯ ಹೊಂದಿದೆ. ಇಲಾಖೆಯ ₹4 ಕೋಟಿ ಅನುದಾನದಲ್ಲಿ ಡಿ. ದೇವರಾಜ ಅರಸು ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿ ನಿಲಯ ಹಾಗೂ ನಬಾರ್ಡ್‌ನ ₹5 ಕೋಟಿ ಅನುದಾನದಲ್ಲಿ ಮಾದರಿ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿ ನಿಲಯ ನಿರ್ಮಾಣವಾಗಲಿದೆ. ಆಗ ಬಾಡಿಗೆ ಕಟ್ಟಡದಲ್ಲಿರುವ ಇನ್ನೆರಡು ವಸತಿ ನಿಲಯಗಳನ್ನು ಹೊಸ ಕಟ್ಟಡಕ್ಕೆ ಸ್ಥಳಾಂತರಿಸಲಾಗುತ್ತದೆ ಎಂದು ಅಧಿಕಾರಿಗಳು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.