ADVERTISEMENT

‘ಮಾದಕ ವಸ್ತು ಮಾರಾಟ, ಬಳಕೆ ಕಂಡರೆ ಮಾಹಿತಿ ನೀಡಿ’

​ಪ್ರಜಾವಾಣಿ ವಾರ್ತೆ
Published 2 ಜುಲೈ 2022, 15:07 IST
Last Updated 2 ಜುಲೈ 2022, 15:07 IST

ಮಂಗಳೂರು: ಶೈಕ್ಷಣಿಕ ಸಂಸ್ಥೆಗಳ ಸುತ್ತ ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ಮಾದಕ ವಸ್ತುಗಳ ಮಾರಾಟ ಅಥವಾ ಬಳಕೆ ಕಂಡುಬಂದಲ್ಲಿ ಜಿಲ್ಲಾಡಳಿತ ಅಥವಾ ಪೊಲೀಸರಿಗೆ ಮಾಹಿತಿ ನೀಡುವಂತೆ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ ಸಲಹೆ ನೀಡಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಪೊಲೀಸ್ ಇಲಾಖೆ, ಮಂಗಳೂರು ತಾಲ್ಲೂಕು ಆರೋಗ್ಯಾಧಿಕಾರಿ ಕಚೇರಿ ಆಶ್ರಯದಲ್ಲಿ ನಗರದ ಸೇಂಟ್ ಅಲೋಷಿಯಸ್ ಕಾಲೇಜಿನಲ್ಲಿ ಶನಿವಾರ ಹಮ್ಮಿಕೊಂಡಿದ್ದ ಅಂತರರಾಷ್ಟ್ರೀಯ ಮಾದಕ ವ್ಯಸನ ವಿರೋಧಿ ಮತ್ತು ಅಕ್ರಮ ಸಾಗಾಟ ತಡೆಗಟ್ಟುವ ದಿನ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಮಾದಕ ವಸ್ತುಗಳ ಬಳಕೆಸಮಾಜಕ್ಕೆ ಪಿಡುಗು ಆಗಿ ಮಾರ್ಪಟ್ಟಿದೆ. ಅದನ್ನು ನಿಯಂತ್ರಿಸಲು ಯುವಕರು ಮುಂದಾಗಬೇಕು. ಮಾದಕ ವಸ್ತುಗಳ ನಿಯಂತ್ರಣದಲ್ಲಿ ಅಧಿಕಾರಿಗಳಿಗೆ ನೆರವಾಗಬೇಕು. ಯುವಜನರು ಜಿಲ್ಲಾಡಳಿತ ಮತ್ತು ಸಮಾಜದ ಕಣ್ಣು, ಕಿವಿಗಳಂತೆ ಕೆಲಸ ಮಾಡಿದರೆ ಸ್ವಸ್ಥ ಸಮಾಜ ನಿರ್ಮಾಣ ಸುಲಭ ಎಂದು ಅವರು ಹೇಳಿದರು.

ADVERTISEMENT

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಕುಮಾರ್ ಮಾತನಾಡಿ, ಮಾದಕ ವ್ಯಸನವು ಪರೋಕ್ಷವಾಗಿ ದೇಶದ ಅಭಿವೃದ್ಧಿ ಕುಂಠಿತವಾಗಲು ಕಾರಣವಾಗುತ್ತದೆ ಎಂದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಕಿಶೋರ್ ಕುಮಾರ್, ಮಾನಸಿಕ ಆರೋಗ್ಯ ತಜ್ಞ ಡಾ.ಶಾರಣ್ಯ ಶೆಟ್ಟಿ, ಜಿಲ್ಲಾ ಕುಷ್ಠರೋಗ ನಿವಾರಣಾಧಿಕಾರಿ ಡಾ.ಸುದರ್ಶನ್, ಸೇಂಟ್ ಅಲೋಷಿಯಸ್ ಕಾಲೇಜಿನ ಪ್ರಾಂಶುಪಾಲ ಪ್ರವೀಣ್ ಮಾರ್ಟಿಸ್ ಎಸ್.ಜೆ, ಕಾಲೇಜಿನ ಕುಲಸಚಿವ ಅಲ್ವಿನ್ ಡಿ'ಸೋಜ, ಎನ್ಎಸ್ಎಸ್ ಅಧಿಕಾರಿ ಪ್ರೀಮ ತಾವ್ರೊ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.